Bengaluru Airport; ವಾಹನ ಸವಾರರಿಗೆ ಖಡಕ್ ಎಚ್ಚರಿಕೆ
ಬೆಂಗಳೂರು, ಮೇ 14: ಬೆಂಗಳೂರು ನಗರದ ಹೊರವಲಯದ ದೇವನಹಳ್ಳಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಪ್ರತಿನಿತ್ಯ ಲಕ್ಷಾಂತರ ಜನರು, ಸಾವಿರಾರು ವಾಹನಗಳು ನಗರದಿಂದ ಏರ್‌ಪೋರ್ಟ್‌ಗೆ ಸಾಗುತ್ತವೆ.
ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ನಿರ್ವಹಣೆ ಹೊಣೆ ಹೊತ್ತಿರುವ ಸಂಚಾರಿ ಪೊಲೀಸರು ವಿಮಾನ ನಿಲ್ದಾಣದ ವಾಹನ ಸವಾರರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಟಣೆ: ಬೆಂಗಳೂರು ನಗರದ ಸಂಚಾರಿ ಪೊಲೀಸರು ಮಂಗಳವಾರ ಪ್ರಕಟಣೆ ಮೂಕ ಮಾಹಿತಿಯೊಂದನ್ನು ನೀಡಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅದರಲ್ಲೂ ಮುಖ್ಯವಾಗಿ ಚಾಲಕರು/ ವಾಹನ ಸವಾರರ ಅತಿವೇಗದ ಚಾಲನೆ ಈ ಅಪಘಾತಗಳು ಉಂಟಾಗುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರ ವಹಿಸುತ್ತಿರುವುದನ್ನು ಗಮನಿಸಿಸಲಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆಯನ್ನು ಪತ್ತೆ ಹಚ್ಚುವ ಕ್ಯಾಮೆರಾಗಳನ್ನು ಅಳವಡಿಸಿದ್ದು, ಸದರಿ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಅತಿವೇಗದ ಚಾಲನೆಯನ್ನು ಕಂಡು ಹಿಡಿಯುವ ಸಾಮರ್ಥ್ಯವನ್ನು ಹೊಂದಿವೆ ಎಂದು ತಿಳಿಸಿದ್ದಾರೆ.
ಈ ಕ್ಯಾಮರಾಗಳು ಕಾನೂನಾತ್ಮಕವಾಗಿ ನಿಗದಿಪಡಿಸಲಾಗಿರುವ ಪ್ರತಿ ಗಂಟೆಗೆ 80 ಕಿ. ಮೀ. ಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರು ನಗರದಿಂದ ಪ್ರತಿನಿತ್ಯ ಸಾವಿರಾರು ವಾಹನಗಳು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುತ್ತವೆ. ಹಲವು ಬಾರಿ ಸಂಚಾರ ದಟ್ಟಣೆಗೆ ಸಿಲುಕಿ ಪ್ರಯಾಣಿಕರು ಪರದಾಡುತ್ತಾರೆ. ಸರಣಿ ಅಪಘಾತಗಳು ನಡೆಯುತ್ತವೆ. ಆದ್ದರಿಂದ ಪೊಲೀಸರು ವಾಹನ ಸವಾರರ ಮೇಲೆ ಕಣ್ಣಿಡಲಾಗಿದೆ.
ಬೆಂಗಳೂರು ನಗರದಲ್ಲಿ ಸಂಚಾರಿ ಪೊಲೀಸರು ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ (ಐಟಿಎಂಎಸ್) ಅಡಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಕ್ಯಾಮೆರಾಗಳನ್ನು ಹಾಕಿದ್ದಾರೆ. ಹೆಲ್ಮೆಟ್ ರಹಿತ ಪ್ರಯಾಣ, ಸಿಗ್ನಲ್ ಜಂಪ್ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಯನ್ನು ಈ ಕ್ಯಾಮರಾ ಮೂಲಕ ಪತ್ತೆ ಹಚ್ಚಿ ದಂಡವನ್ನು ವಿಧಿಸುತ್ತಿದ್ದಾರೆ.
ಈ ಸುಧಾರಿತ ಕ್ರಮಗಳಿಂದ, ಕ್ಯಾಮೆರಾಗಳಿಂದ ಪತ್ತೆಯಾದ ಸಂಚಾರಿ ನಿಯಮ ಉಲ್ಲಂಘನೆಗಳಿಗೆ ದಂಡ ವಿಧಿಸುತ್ತಿರುವುದರಿಂದ ಸಂಚಾರಿ ನಿಯಮ ಉಲ್ಲಂಘನೆ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಪೊಲೀಸರು ಎಐ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದರು. ಅಲ್ಲಿ ಅತಿ ವೇಗದ ವಾಹನ ಸವಾರರನ್ನು ಗುರುತಿಸಿ ಅವರಿಗೆ ದಂಡ ವಿಧಿಸಲಾಗುತ್ತಿತ್ತು. ಈಗ ಇದೇ ಮಾದರಿಯನ್ನು ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ ಅಳವಡಿಕೆ ಮಾಡಲಾಗಿದೆ.
ದಿನದಿಂದ ದಿನಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಪ್ರಯಾಣಿಕರ, ವಾಹನಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕ್ಯಾಬ್, ಬಸ್, ಖಾಸಗಿ ವಾಹನ ಸೇರಿದಂತೆ ಹಲವು ವಾಹನಗಳು ಏರ್‌ಪೋರ್ಟ್‌ಗೆ ಸಂಚಾರ ನಡೆಸುತ್ತವೆ. ಇವುಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.












Click it and Unblock the Notifications