Bengaluru Traffic: ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ‘ಸಂಚಾರ ಮಿಷನ್’; ಬೆಳಗಾವಿ, ಹುಬ್ಬಳ್ಳಿಗೆ GTC ಗುಡ್‌ನ್ಯೂಸ್
ಬೆಂಗಳೂರು ನಗರ ಟ್ರಾಫಿಕ್ ಜಾಮ್ ಕಂಟ್ರೋಲ್‌ಗೆ "ಸಂಚಾರ ಮಿಷನ್' ಯೋಜನೆ ಪರಿಚಯಿಸುವುದಕ್ಕೆ ಕರ್ನಾಟಕ ಸರ್ಕಾರವು ಮುಂದಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರು ನಗರ ಎದುರಿಸುತ್ತಿರುವ ಹೆಚ್ಚುತ್ತಿರುವ ಸಂಚಾರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರೂಪಿಸಲಾಗಿರುವ ನಗರ ಸಂಚಾರ ಮಿಷನ್‌ನ ಪ್ರಗತಿ ಕುರಿತು ಪರಿಶೀಲನೆ ನಡೆದಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಈ ಮಿಷನ್‌ನಲ್ಲಿ ರಾಜ್ಯದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳು, ಖಾಸಗಿ ಸಾರಿಗೆ ಸೇವಾ ಸಂಸ್ಥೆಗಳು ಹಾಗೂ ನಾಗರಿಕರನ್ನು ಒಟ್ಟುಗೂಡಿಸಿ, ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ಸಮಗ್ರ ಪರಿಹಾರ ಕಂಡುಕೊಳ್ಳುವ ಉದ್ದೇಶ ಹೊಂದಲಾಗಿದೆ. ಅಧಿಕಾರಿಗಳು ಈಗಾಗಲೇ ಸಂಬಂಧಿಸಿದ ಪ್ರಮುಖ ಇಲಾಖೆಗಳು, ಸಂಸ್ಥೆಗಳು ಹಾಗೂ ಸಾರಿಗೆ ಸೇವಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಚರ್ಚೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಶೀಘ್ರದಲ್ಲೇ ನಗರ ಸಂಚಾರ ಮಿಷನ್‌ನ ಸಭೆ ಕರೆಯಲಾಗುವುದು.

ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ವಿವಿಧ ಸಂಸ್ಥೆಗಳ ನಡುವೆ ಉತ್ತಮ ಸಮನ್ವಯ, ಮಾಹಿತಿಯ ಹಂಚಿಕೆ, ಪ್ರಯಾಣದ ಕೊನೆಯ ಹಂತದವರೆಗೂ ಸುಗಮ ಸಂಪರ್ಕ ವ್ಯವಸ್ಥೆ ಹಾಗೂ ತ್ವರಿತ ಮತ್ತು ಸಮನ್ವಯಿತ ಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಬೆಂಗಳೂರಿನ ಸಂಚಾರ ಸಮಸ್ಯೆಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ಎಲ್ಲಾ ಇಲಾಖೆಗಳು, ಸಂಸ್ಥೆಗಳು ಮತ್ತು ಸಾರಿಗೆ ಸೇವಾ ಪಾಲುದಾರರು ನಾಗರಿಕರನ್ನು ಕೇಂದ್ರದಲ್ಲಿರಿಸಿಕೊಂಡು, ಒಂದೇ ವ್ಯವಸ್ಥೆಯಾಗಿ ಒಗ್ಗೂಡಿ ಕಾರ್ಯನಿರ್ವಹಿಸಬೇಕು.
ಕರ್ನಾಟಕದ ತಂತ್ರಜ್ಞಾನ ಬೆಳವಣಿಗೆಯನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ವಿಸ್ತರಿಸುವ ಉದ್ದೇಶದೊಂದಿಗೆ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಜಾಗತಿಕ ತಂತ್ರಜ್ಞಾನ ಕೇಂದ್ರಗಳನ್ನು (GTC) ಸ್ಥಾಪಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸ್ಥಳೀಯ ಆರ್ಥಿಕತೆಯನ್ನು ವೇಗಗೊಳಿಸುವ ಸ್ಥಳೀಯ ಆರ್ಥಿಕತೆಯ ವೇಗವರ್ಧಕ ಕಾರ್ಯಕ್ರಮ LEAP ಯೋಜನೆಯಡಿಯಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಬಿಯಾಂಡ್ ಬೆಂಗಳೂರು ತಂತ್ರಜ್ಞಾನ ಪ್ರತಿಭೆ, ನವೋದ್ಯಮಗಳು ಹಾಗೂ ಉದ್ಯಮಶೀಲತೆಗೆ ಅಗತ್ಯವಾದ ಮೂಲಸೌಕರ್ಯ ಮತ್ತು ಅವಕಾಶಗಳನ್ನು ಸ್ಥಳೀಯವಾಗಿಯೇ ಒದಗಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕಿಯೊನಿಕ್ಸ್ ಮೂಲಕ ಮಂಗಳೂರು, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಹೊಸ ಜಾಗತಿಕ ತಂತ್ರಜ್ಞಾನ ಕೇಂದ್ರಗಳನ್ನು 'ಪ್ಲಗ್ ಆ್ಯಂಡ್ ಪ್ಲೇ' ಸೌಲಭ್ಯಗಳೊಂದಿಗೆ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಸುಮಾರು 10,000 ಚದರ ಅಡಿ ವಿಸ್ತೀರ್ಣದಲ್ಲಿ ಪ್ಲಗ್ ಆ್ಯಂಡ್ ಪ್ಲೇ ಸೌಲಭ್ಯಗಳೊಂದಿಗೆ ಜಾಗತಿಕ ತಂತ್ರಜ್ಞಾನ ಕೇಂದ್ರ ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ. ಮೂರು ವರ್ಷಗಳ ಅವಧಿಗೆ ಒಟ್ಟು ₹82.80 ಲಕ್ಷ ವೆಚ್ಚದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಅನುಷ್ಠಾನ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲೇ ಈ ಕೇಂದ್ರ ಸ್ಥಾಪನೆಯಾಗುತ್ತಿರುವುದರಿಂದ ಶಿಕ್ಷಣ ಸಂಸ್ಥೆ, ತಂತ್ರಜ್ಞಾನ ಕ್ಷೇತ್ರ ಮತ್ತು ಉದ್ಯಮಗಳ ನಡುವಿನ ಸಂಪರ್ಕ ಮತ್ತಷ್ಟು ಬಲಪಡಿಸಲು ಅವಕಾಶ ದೊರೆಯಲಿದೆ. ವಿದ್ಯಾರ್ಥಿಗಳು, ನವೋದ್ಯಮಗಳು ಮತ್ತು ತಂತ್ರಜ್ಞಾನ ಆಧಾರಿತ ಉದ್ಯಮಗಳಿಗೆ ಅಗತ್ಯವಾದ ಪರಿಸರವನ್ನು ಸ್ಥಳೀಯವಾಗಿಯೇ ರೂಪಿಸುವುದು ಇದರ ಉದ್ದೇಶವಾಗಿದೆ.
ಹುಬ್ಬಳ್ಳಿಯ ಐಟಿ ಪಾರ್ಕ್‌ನಲ್ಲಿ ಸುಮಾರು 10,000 ಚದರ ಅಡಿ ವಿಸ್ತೀರ್ಣದಲ್ಲಿ ಬಾಡಿಗೆ ರಹಿತ ಸ್ಥಳದಲ್ಲಿ ಜಾಗತಿಕ ತಂತ್ರಜ್ಞಾನ ಕೇಂದ್ರ ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ. ಮೂರು ವರ್ಷಗಳ ಅವಧಿಗೆ ಒಟ್ಟು ₹5.80 ಕೋಟಿ ವೆಚ್ಚವಾಗಲಿದ್ದು, ಇದರಲ್ಲಿ ₹4.90 ಕೋಟಿ ಬಂಡವಾಳ ವೆಚ್ಚ ಮತ್ತು ₹0.90 ಕೋಟಿ ನಿರ್ವಹಣಾ ವೆಚ್ಚ ಸೇರಿದೆ.
ಈ ಕೇಂದ್ರದ ಅನುಷ್ಠಾನ ಸಂಸ್ಥೆಯಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಕಾರ್ಯನಿರ್ವಹಿಸಲಿದ್ದು, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಕೈಗೊಳ್ಳಲಿದೆ.
ಕರ್ನಾಟಕದ ತಂತ್ರಜ್ಞಾನ ಸಾಮರ್ಥ್ಯವನ್ನು ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸದೆ, ರಾಜ್ಯದ ವಿವಿಧ ಪ್ರದೇಶಗಳಲ್ಲಿರುವ ಪ್ರತಿಭೆ ಮತ್ತು ಉದ್ಯಮಶೀಲತೆಯನ್ನು ಬೆಳೆಸುವ ಅಗತ್ಯವಿದೆ. ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಜಾಗತಿಕ ತಂತ್ರಜ್ಞಾನ ಕೇಂದ್ರಗಳ ಸ್ಥಾಪನೆಯಿಂದ ಉತ್ತರ ಕರ್ನಾಟಕದ ಯುವಜನತೆ, ನವೋದ್ಯಮಗಳು ಹಾಗೂ ತಂತ್ರಜ್ಞಾನ ಆಧಾರಿತ ಉದ್ಯಮಗಳಿಗೆ ಹೊಸ ಅವಕಾಶಗಳು ದೊರೆಯಲಿವೆ. ಲೀಪ್ ಕಾರ್ಯಕ್ರಮದಡಿ ಐದು ವರ್ಷಗಳ ಅವಧಿಗೆ ಒಟ್ಟು ₹1,000 ಕೋಟಿ ಅನುದಾನ ಮೀಸಲಿಡಲಾಗಿದ್ದು,ಮೊದಲ ವರ್ಷ ₹200 ಕೋಟಿ ವೆಚ್ಚ ಮಾಡಲು ಸರ್ಕಾರ ಅನುಮೋದಿಸಿದೆ. ಇದರಡಿ ನವೋದ್ಯಮ ಹಾಗೂ ವೇಗವರ್ಧಕ ಕೇಂದ್ರಗಳ ಸೃಷ್ಟಿಗೂ ಆದ್ಯತೆ ನೀಡಲಾಗಿದೆ.
ಸ್ಥಳೀಯ ಪ್ರತಿಭೆಯನ್ನು ಸ್ಥಳೀಯವಾಗಿಯೇ ಬೆಳೆಸುವುದು, ತಂತ್ರಜ್ಞಾನ ಉದ್ಯಮಗಳಿಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಬೆಳಗಾವಿ ಮತ್ತು ಹುಬ್ಬಳ್ಳಿಯ ಜಿಟಿಸಿಗಳು ಈ ದಿಕ್ಕಿನಲ್ಲಿ ಮಹತ್ವದ ವೇದಿಕೆಗಳಾಗಿ ಕಾರ್ಯನಿರ್ವಹಿಸಲಿವೆ.
ರಾಜ್ಯದ ತಂತ್ರಜ್ಞಾನ ಆರ್ಥಿಕತೆಯ ವಿಕೇಂದ್ರೀಕರಣಕ್ಕೆ ಒತ್ತು ನೀಡುವ ಮೂಲಕ ಬೆಂಗಳೂರಿನಿಂದ ಹೊರಗಡೆ ಕರ್ನಾಟಕವನ್ನು ತಂತ್ರಜ್ಞಾನ, ನವೋದ್ಯಮ ಮತ್ತು ಉದ್ಯಮಶೀಲತೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈ ಕ್ರಮ ಸಹಕಾರಿಯಾಗಲಿದೆ ಎಂದೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.


Click it and Unblock the Notifications
