ಬೆಂಗಳೂರಿನ ಈ ಭಾಗದಲ್ಲಿ ಆಸ್ತಿ ತೆರಿಗೆ ಸಂಗ್ರಹ & ಇ ಖಾತಾಗೆ ಸಂಬಂಧಿಸಿದಂತೆ ಮಹತ್ವದ ಸೂಚನೆ
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿಗಳ ಖರೀದಿ ಹಾಗೂ ಮಾರಾಟಕ್ಕೆ ರಾಜ್ಯ ಸರ್ಕಾರವು ಇ - ಖಾತಾ ಕಡ್ಡಾಯ ಮಾಡಿದೆ. ಅಲ್ಲದೇ ಇ ಖಾತಾ ಕಡ್ಡಾಯ ಮಾಡಿದ ಮೇಲೆ ಆಸ್ತಿಗಳ ಮಾಲೀಕತ್ವಕ್ಕೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗಿದೆ. ಇದೀಗ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಆಸ್ತಿದಾರರು ಇ - ಖಾತಾ ಪಡೆಯುವುದನ್ನು ಸುಲಭ ಮಾಡಿದೆ. ಆದರೆ, ಬೆಂಗಳೂರಿನಲ್ಲಿ ಹಲವರಿಗೆ ಇನ್ನೂ ಇ ಖಾತಾ ಸೌಲಭ್ಯ ಸಿಕ್ಕಿಲ್ಲ.
ಇದೀಗ ಬೆಂಗಳೂರಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇ - ಖಾತಾ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಗಿದೆ. ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆಯನ್ನು ನಡೆಸಲಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ ಸೋಮಶೇಖರ್ ಅವರೊಂದಿಗೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ.

ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಸೂಚನೆ: ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಎಲ್ಲಾ ರಸ್ತೆ ಗುಂಡಿಗಳು ಹಾಗೂ ರಸ್ತೆ ಮೇಲ್ಮೈ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಮುಚ್ಚಿ ವಾಹನ ಸವಾರರಿಗೆ ಅನುಕೂಲವಾಗುವಂತಹ ರಸ್ತೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಇ ಖಾತಾ ಸಮಸ್ಯೆಯ ಬಗ್ಗೆಯೂ ಚರ್ಚೆ ನಡೆದಿದೆ.
ಅಪಾಯ ಹಂತದಲ್ಲಿರುವ ಮರಗಳಿಂದಾಗಿ ಸಮಸ್ಯೆ ಆಗದಂತೆ ಕ್ರಮ: ಇನ್ನು ಯಶವಂತಪುರ ವ್ಯಾಪ್ತಿಯಲ್ಲಿ ಒಣಗಿದ ಮರ ಹಾಗೂ ಅಪಾಯದ ಹಂತದಲ್ಲಿರುವ ಮರಗಳಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲು ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ಭಾಗದಲ್ಲಿ ಕಸ ವಿಲೇವಾರಿ ಸಮಸ್ಯೆ ಪರಿಹಾರಕ್ಕೆ ಸೂಚನೆ: ಯಶವಂತಪುರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್ ಗಳಲ್ಲಿ ವ್ಯವಸ್ಥಿತ ತ್ಯಾಜ್ಯ ನಿರ್ವಹಣೆ ಮಾಡಬೇಕು. ಬ್ಲಾಕ್ ಸ್ಪಾಟ್‌ಗಳ ನಿರ್ಮೂಲನೆಗಾಗಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಹಾಗೂ ರಸ್ತೆ ಪಕ್ಕದಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜಕಾಲುವೆಯಲ್ಲಿ ಹೂಳೆತ್ತಲು ಸೂಚನೆ: ಇನ್ನು ಈ ಭಾಗದ ರಾಜಕಾಲುವೆಗಳಲ್ಲಿ ಹೂಳು ನಿರಂತರವಾಗಿ ತೆರವುಗೊಳಿಸಬೇಕು. ಈ ಸಂಬಂಧ ಹೂಳೆತ್ತೆ ನೀರು ಸರಾಗ ಹರಿದು ಹೋಗುವುದಕ್ಕೆ ಅನುವು ಮಾಡಿ ಕೊಡುವಂತೆ ಕ್ರಮ ತೆಗೆದುಕೊಳ್ಳಿ ಎಂದು ಸೂಚನೆ ನೀಡಲಾಗಿದೆ. ನಗರ ಯೋಜನೆ, ಕಂದಾಯ ಹಾಗೂ ಜಾಹೀರಾತು ವಿಭಾಗಗಳ ಕಾರ್ಯವೈಖರಿಯನ್ನು ಪರಿಶೀಲಿಸಿ, ಅಗತ್ಯ ನಿರ್ದೇಶನ ನೀಡಲಾಗಿದೆ.
ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು:
* ಯಶವಂತಪುರ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಸುಧಾರಣೆ ಮಾಡಿ ಅಭಿವೃದ್ಧಿಗೆ ತುರ್ತಾಗಿ ಕ್ರಮ ಕೈಗೊಳ್ಳಲು ಸೂಚನೆ.
* ಉದ್ಯಾನಗಳನ್ನು ಸರಿಯಾಗಿ ನಿರ್ವಹಣೆ ಮಾಡಲು ಸೂಚನೆ.
* ಸಮುದಾಯ ಭವನಗಳು ಪೂರ್ಣಗೊಂಡಿದ್ದರೂ ಅವುಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ, ಅವುಗಳನ್ನು ಸರಿಯಾಗಿ ಬಳಕೆ ಆಗುವಂತೆ ಕ್ರಮ ಕೈಗೊಳ್ಳಲು ಸೂಚನೆ.
* ನಿಗದಿತ ಆಸ್ತಿ ತೆರಿಗೆ ಸಂಗ್ರಹಿಸಬೇಕು.
* ಇ-ಖಾತಾಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲು ಸೂಚನೆ ಕೊಡಲಾಗಿದೆ. ಈ ಮೂಲಕ ಈ ಭಾಗದಲ್ಲಿ ಇ ಖಾತಾ ಸಮಸ್ಯೆ ಪರಿಹಾರವಾಗುವ ಮುನ್ಸೂಚನೆ ಸಿಕ್ಕಿದೆ.












Click it and Unblock the Notifications