ಬೆಂಗಳೂರು ಮತದಾರರ ಪಟ್ಟಿ ಪರಿಷ್ಕರಣೆಗೆ ಭರ್ಜರಿ ಸಿದ್ಧತೆ: ಮನೆ-ಮನೆ ಸಮೀಕ್ಷೆಗೆ ಬಿಎಲ್‌ಒ ತಂಡ ರೆಡಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ಗಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೇ ಶೇ.72ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ಉಳಿದಿರುವ ಮ್ಯಾಪಿಂಗ್ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಮೂನೆಗಳ ಮೂಲಕ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಇದಕ್ಕೆ ನಾಗರಿಕರು ಸಂಪೂರ್ಣ ಸಹಕಾರ ನೀಡಬೇಕು. ಬಳಿಕ ದತ್ತಾಂಶವನ್ನು ಪರಿಶೀಲಿಸಿ, ತಾಳೆ ಮಾಡಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದಿದ್ದಾರೆ. ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಿಂದ ವಂಚಿತರಾಗಬಾರದು ಹಾಗೂ ಯಾವುದೇ ಅನರ್ಹ ಹೆಸರುಗಳು ಮತದಾರರ ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳುವ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರ ಪರಿಷ್ಕರಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ನಮೂನೆಗಳ ವಿಲೇವಾರಿಗೆ ಕ್ರಮ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪೂರ್ವಭಾವಿ ಚಟುವಟಿಕೆಯ ಅಂಗವಾಗಿ 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಅವರ ನಿರ್ದೇಶನದಂತೆ ದಿನಾಂಕ 16.06.2026ರಂದು E-Roll freeze ಆಗಲಿರುವುದರಿಂದ, ಅವಧಿಯೊಳಗೆ ಬಾಕಿ ಉಳಿದಿರುವ ನಮೂನೆ-6, 6ಎ, 7 ಹಾಗೂ 8ರ ಅರ್ಜಿಗಳನ್ನು ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
ಬಿಎಲ್‌ಒ, ಬಿಎಲ್‌ಎಗಳೊಂದಿಗೆ ಸಭೆ
ಮನೆ-ಮನೆ ಸಮೀಕ್ಷೆ ಕಾರ್ಯ ಆರಂಭಿಸುವ ಮುನ್ನ ಮತದಾರರ ನೋಂದಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಬೂತ್ ಮಟ್ಟದ ಏಜೆಂಟ್‌ಗಳೊಂದಿಗೆ ಸಭೆ ನಡೆಸಿ, ಎಸ್‌ಐಆರ್ ವೇಳಾಪಟ್ಟಿ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಲಿದ್ದಾರೆ. ರಾಜಕೀಯ ಪಕ್ಷಗಳು ಎಸ್‌ಐಆರ್ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಯೋಗವು ಅವಕಾಶ ಕಲ್ಪಿಸಿದೆ. ಕರಡು ಮತದಾರರ ಪಟ್ಟಿ ಪ್ರಕಟಿಸುವವರೆಗೆ ಪ್ರತಿದಿನ 50 ನಮೂನೆಗಳನ್ನು ಬಿಎಲ್‌ಒಗಳಿಗೆ ಸಲ್ಲಿಸಲು ಅವಕಾಶವಿದ್ದು, ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ದಿನಕ್ಕೆ 10 ನಮೂನೆಗಳನ್ನು ಮೀರದಂತೆ ಸಲ್ಲಿಸಲು ಅವಕಾಶವಿರುತ್ತದೆ.
ಬೂತ್ ಲೆವಲ್ ಏಜೆಂಟ್‌ಗಳ ಪಟ್ಟಿ ನೀಡಿ
ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವಲ್ ಏಜೆಂಟ್‌ಗಳನ್ನು (ಬಿಎಲ್‌ಎ) ನೇಮಕ ಮಾಡಿ, ಅವರ ಪಟ್ಟಿಯನ್ನು ಕೂಡಲೇ ಸಲ್ಲಿಸಬೇಕು. ಮತಗಟ್ಟೆ ಅಧಿಕಾರಿಗಳಿಗೆ ಎಲ್ಲಾ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಸಹಕಾರ ನೀಡುವಂತೆ ಕೋರಲಾಗಿದೆ. ಬೆಂಗಳೂರು ನಗರದಲ್ಲಿ ಎಸ್‌ಐಆರ್ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಲು ಎಲ್ಲಾ ನಗರ ಪಾಲಿಕೆಗಳಲ್ಲಿ ಐಇಸಿ ಹಾಗೂ ಸ್ವೀಪ್ ಚಟುವಟಿಕೆಗಳನ್ನು ಆರಂಭಿಸಲು ನಿರ್ದೇಶನ ನೀಡಲಾಗುವುದು. ಅಲ್ಲದೆ, ಆಟೋ ಟಿಪ್ಪರ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ವ್ಯಾಪ್ತಿಯಲ್ಲಿ ಮ್ಯಾಪಿಂಗ್ ಮಾಡಿರುವ ವಿವರ
* ಬೆಂಗಳೂರು ಜಿಲ್ಲೆ : 78.93%
* ಕೇಂದ್ರ ನಗರ ಜಿಲ್ಲೆ : 67.53%
* ದಕ್ಷಿಣ ನಗರ ಜಿಲ್ಲೆ : 67.93%
* ಉತ್ತರ ನಗರ ಜಿಲ್ಲೆ : 69.23%
ಒಟ್ಟು ಮ್ಯಾಪಿಂಗ್ : ಶೇ.72
ಎಸ್‌ಐಆರ್ ವೇಳಾಪಟ್ಟಿಯ ವಿವರ:
* ಎಸ್‌ಐಆರ್‌ಗೆ ಅರ್ಹತಾ ದಿನಾಂಕ : 1.10.2026
* ಸಿದ್ಧತೆ, ತರಬೇತಿ ಹಾಗೂ ಮುದ್ರಣ: 20. 6.2026 ರಿಂದ 29.6.2026ರವರೆಗೆ
* ಬಿಎಲ್‌ಒಗಳಿಂದ ಮನೆ-ಮನೆ ಭೇಟಿ: 30.6.2026 ರಿಂದ 29.7.2026ರವರೆಗೆ
* ಮತಗಟ್ಟೆಗಳ ಮರುಹೊಂದಾಣಿಕೆ : 29.7.2026
* ಕರಡು ಮತದಾರರ ಪಟ್ಟಿಯ ಪ್ರಕಟಣೆ: 5.8.2026
* ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ: 5.8.2026 ರಿಂದ 4.9.2026ರವರೆಗೆ
* ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ: 5.8.2026 ರಿಂದ 3.10.2026ರವರೆಗೆ
* ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ: 7.10.2026
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಜಗದೀಶ್, ಸಹಾಯಕ ಆಯುಕ್ತರಾದ ಎಂ. ಶ್ರೀನಿವಾಸ ಸೇರಿದಂತೆ ಹಲವರು ಇದ್ದರು.












Click it and Unblock the Notifications