Bengaluru Waste FIR: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆದರೆ ಗಂಭೀರ ಕ್ರಮ: ರಾತ್ರಿ ಕಸ ಎಸೆದವರ ಮೇಲೆ ಎಫ್‌ಐಆರ್!
Bengaluru Waste FIR: ಬೆಂಗಳೂರಿನಲ್ಲಿ ಕೆಲವರು ಎಲ್ಲೆಂದರಲ್ಲಿ ಕಸ ಎಸೆಯುವುದು ಮುಂದುವರಿದಿದೆ. ಇದರಿಂದ ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದ್ದು, ಕಸದ ಸಮಸ್ಯೆಯನ್ನು ತಪ್ಪಿಸುವುದಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮಹತ್ವದ ಕ್ರಮ ತೆಗೆದುಕೊಂಡಿದೆ. ಬೆಂಗಳೂರು ನಗರದಲ್ಲಿ ಕಸದ ಬ್ಲಾಕ್ ಸ್ಪಾಟ್ ತೆರವುಗೊಳಿಸಿದ ಸ್ಥಳದಲ್ಲಿ ಪುನಃ ಕಸ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಪಾಠ ಕಲಿಸುವುದಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಗಳು ಮುಂದಾಗಿದ್ದಾರೆ.
ಬೆಂಗಳೂರು ಉತ್ತರ ನಗರ ಪಾಲಿಕೆಯ ಸರ್ವಜ್ಞನಗರ ವಿಭಾಗದ ವಾರ್ಡ್ ಸಂಖ್ಯೆ 27ರ ಬಾಣಸವಾಡಿ 7ನೇ ಮುಖ್ಯರಸ್ತೆಯಲ್ಲಿದ್ದ ಕಸದ ಬ್ಲಾಕ್ ಸ್ಪಾಟ್ ಅನ್ನು ಇತ್ತೀಚೆಗೆ ಸಂಪೂರ್ಣವಾಗಿ ತೆರವುಗೊಳಿಸಲಾಗಿತ್ತು. ಅಲ್ಲದೆ ಸ್ಥಳದ ಸೌಂದರ್ಯೀಕರಣ (Beautification) ಕೈಗೊಳ್ಳಲಾಗಿತ್ತು. ಬಳಿಕ ಸಾರ್ವಜನಿಕರು ಮತ್ತೆ ಕಸ ಎಸೆಯದಂತೆ ಸ್ಥಳೀಯ ನಿವಾಸಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ನಡೆಸಲಾಗಿದ್ದು, ಈ ಸ್ಥಳದಲ್ಲಿ ಕಸ ಎಸೆಯುವವರ ವಿರುದ್ಧ ನಿಗಾವಹಿಸಿ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದ ವಾರ್ಡ್ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ 2026ರ ಜುಲೈ 16ರಂದು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾರ್ಡ್ ಮಾರ್ಷಲ್‌ಗಳು, ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ತ್ಯಾಜ್ಯ ಎಸೆಯುತ್ತಿರುವುದನ್ನು ಗಮನಿಸಿ ಸಂಬಂಧಪಟ್ಟ ವ್ಯಕ್ತಿಗಳನ್ನು ತಡೆದು ನಿಯಮಾನುಸಾರ ದಂಡ ವಿಧಿಸಲು ಮುಂದಾದರು. ಆದರೆ, ಸಂಬಂಧಪಟ್ಟ ನಾಲ್ವರು ವ್ಯಕ್ತಿಗಳು ದಂಡ ಪಾವತಿಸಲು ನಿರಾಕರಿಸಿ, ಕಸವನ್ನು ಅದೇ ಸ್ಥಳದಲ್ಲಿ ಬಿಸಾಡಿ ಹೋಗಿದ್ದಾರೆ. ಹೀಗಾಗಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮದ ಸರ್ವಜ್ಞನಗರ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರು ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಜಿಬಿಎ ಎಚ್ಚರಿಕೆ
ಮುಂದುವರಿದು ಸಲ್ಲಿಸಲಾದ ದೂರಿನ ಮೇರೆಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (Bharatiya Nyaya Sanhita - BNS), 2023ರ ಕಲಂ 280ರಡಿ ನಾಲ್ವರು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆಯನ್ನು ಪೊಲೀಸ್ ಇಲಾಖೆ ಕೈಗೊಂಡಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶಾಶ್ವತವಾಗಿ ತೆರವುಗೊಳಿಸಿ ಸೌಂದರ್ಯೀಕರಿಸಿರುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಲ್ಲದೆ ಕಸದ ಬ್ಲಾಕ್ ಸ್ಪಾಟ್‌ಗಳಲ್ಲಿ ಪುನಃ ಕಸ ಎಸೆಯುವುದು, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದು ಹಾಗೂ ಸಾರ್ವಜನಿಕ ಸ್ವಚ್ಛತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ನಿಯಮಾನುಸಾರ ದಂಡಾತ್ಮಕ ಹಾಗೂ ಅಗತ್ಯ ಕಾನೂನು ಕ್ರಮವನ್ನು ಮುಂದುವರಿಯಲಿದೆ ಎಂದೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.


Click it and Unblock the Notifications
