Bengaluru Water Crisis: ನೀರಿನ ಟ್ಯಾಂಕರ್ ನೋಂದಣಿ ಮಾಡಿಕೊಳ್ಳದವರಿಗೆ 'ಡಿಕೆಶಿ' ಖಡಕ್ ಎಚ್ಚರಿಕೆ
ಬೆಂಗಳೂರು, ಮಾರ್ಚ್ 04: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಇತ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಒಟ್ಟು ನೀರಿನ ಟ್ಯಾಂಕರ್‌ಗಳ ಪೈಕಿ ಅತೀ ಕಡಿಮೆ ಟ್ಯಾಂಕರ್‌ಗಳು ನೀರು ಪೂರೈಕೆಗೆ ನೋಂದಣಿ ಮಾಡಿಕೊಂಡಿವೆ. ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಟ್ಯಾಂಕರ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಶೇಕಡಾ 10ರಷ್ಟು ಟ್ಯಾಂಕರ್‌ಗಳು ಮಾತ್ರವೇ ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರು ಪೂರೈಕೆಗಾಗಿ ನೋಂದಣಿ ಮಾಡಿಕೊಂಡಿವೆ. ಮಾರ್ಚ್ 7ರೊಳಗೆ ಉಳಿದ ಟ್ಯಾಂಕರ್‌ಗಳು ನೋಂದಾಯಿಸಿಕೊಳ್ಳದಿದ್ದರೆ ಅವುಗಳನ್ನು 'ಸೀಜ್' ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು ನೀರಿನ ಸಮಸ್ಯೆ ಕುರಿತು ಸೋಮವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇದ್ದು, ಕೇವಲ 219 ಟ್ಯಾಂಕರ್‌ಗಳು ಅಂದರೆ ಕೇವಲ ಶೇಕಡಾ 10 ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ.
ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧಿಕಾರಿಗಳು 210 ಟ್ಯಾಂಕರ್‌ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ ಎಂದು ಅವರು ವಿವರಿಸಿದರು.
ನೀರನ್ನು ಸರ್ಕಾರ ನಿಯಂತ್ರಣಕ್ಕೆ ಪಡೆಯಬಹುದು
ನೀರು ಸರ್ಕಾರಕ್ಕೆ ಸೇರಿದ್ದು. ಯಾವುದೇ ವೈಯಕ್ತಿಕ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ನೀರಿನ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ ಎಂದು ತಿಳಿಸಿದರು.

ಸಮಸ್ಯೆ ಬಗೆಹರಿಸಲು ರೂ. 556 ಕೋಟಿ ಮೀಸಲು
ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು 10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ 148 ಕೋಟಿ, ಬೆಂಗಳೂರು ಜಲಮಂಡಳಿಯಿಂದ 128 ಕೋಟಿ ಸೇರಿ ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ.
ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಹಿರಿಯ ಅಧಿಕಾರಿಗಳು ಸೇರಿದಂತೆ ನಾನು ಸಹ ಪದೇ, ಪದೇ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.
ನಗರದಲ್ಲಿವೆ 15 ಸಾವಿರ ಕೊಳವೆಬಾವಿಗಳು
ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ.
ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು ಇದನ್ನು ಶೀಘ್ರ ಬಗೆಹರಿಸಲಾಗುವುದು.
ಹಾಲಿನ ಟ್ಯಾಂಕರ್‌ಗಳಿಂದಲೂ ನೀರು ಪೂರೈಕೆ
ನಗರದಲ್ಲಿರುವ ನಿರುಪಯುಕ್ತ ಹಾಲಿನ ಟ್ಯಾಂಕರ್ ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸೂಚಿಸಲಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್‌ಗಳನ್ನು ತರಿಸಿ ಸ್ವಚ್ಚಗೊಳಿಸಿ ಬಲಸಬೇಕು ಎಂದು ಹೇಳಲಾಗಿದೆ. ಈ ಟ್ಯಾಂಕರ್ ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸಬೇಕು ಎಂದು ಸೂಚಿಸಲಾಗಿದೆ.
ಟ್ಯಾಂಕರ್ ನೀರು ಪೂರೈಕೆಗೆ ರೂ.500 ರಿಂದ 2 ಸಾವಿರದ ವರೆಗೂ ವಸೂಲಿ ಮಾಡುತ್ತಿದ್ದಾರೆ. ಈ ಗೊಂದಲವನ್ನು ಅಸೋಸಿಯೇಷನ್ ಬಳಿ ಮಾತನಾಡಿ ನೀರಿನ ದರವನ್ನು ಕಿ.ಮೀಗೆ ಇಂತಿಷ್ಟು ಎಂದು ನಿಗದಿ ಮಾಡಲಾಗುವುದು. 110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುಸು. 775 ಎಂಎಲ್ ಡಿ ನೀರು ಆದಷ್ಟು ಬೇಗ ಜನರಿಗೆ ಪೂರೈಸಲಾಗುವುದು.
ನೀರಿನ ಮಿತ ಬಳಕೆಗೆ ಡಿಸಿಎಂ ಸಲಹೆ
ನಿಷ್ಕ್ರಿಯವಾಗಿರುವ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳು ಚಾಲನೆ ಕೊಡಲು ಸೂಚಿಸಲಾಗಿದೆ. ಸಮಸ್ಯೆ ನಿವಾರಣೆಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಗರವಾಸಿಗಳು ಸಹ ಅನಗತ್ಯವಾಗಿ ನೀರನ್ನು ಬಳಕೆ ಮಾಡಬಾರದು. ಉದ್ಯಾನಗಳಿಗೆ, ಇತರೇ ಬಳಕೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು. ಬೀಕರ ಬರಗಾಲದಲ್ಲಿ ನೀರಿನ ಮಿತ ಬಳಕೆ ಮಾಡಬೇಕು ಎಂದು ಜನರಿಗೆ ಡಿಸಿಎಂ ಸಲಹೆ ನೀಡಿದರು.












Click it and Unblock the Notifications