ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ, ಎಸ್‌ಟಿಪಿ ಸಿಬ್ಬಂದಿ ಸುರಕ್ಷತೆ ಬಗ್ಗೆ BWSSB ಭರವಸೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಮುಕ್ಕಾಲು ಭಾಗದಲ್ಲಿ ಮಳೆ ಕೊರತೆ ಉಂಟಾಗಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಮಾತ್ರವೇ ಮಳೆ ಮುಂದುವರಿದಿದೆ. ಕೃಷ್ಣ ರಾಜ ಸಾಗರ (KRS) ಜಲಾಶಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ನೀರು ಸಂಗ್ರಹವಾಗಿಲ್ಲ. ಹೀಗಿರುವಾಗ ಬೆಂಗಳೂರಿಗೆ ಕುಡಿಯುವ ಕಾವೇರಿ ನೀರಿನ ಸಮಸ್ಯೆ ಆಗುತ್ತಾ? ಎಂಬ ಪ್ರಶ್ನೆ, ಗೊಂದಲ ಸಾಮಾನ್ಯವಾಗಿ ಸೃಷ್ಟಿಯಾಗುತ್ತದೆ. ಈ ಕುರಿತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಪ್ರಮುಖ ಭರವಸೆಯೊಂದನ್ನು ನೀಡಿದೆ.
ಬುಧವಾರ ಜಲಮಂಡಳಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಜಲಮಂಡಳಿ ಅಧ್ಯಕ್ಷೆ ಡಾ. ಮಂಜುಳಾ ಮಾತನಾಡಿದರು. ಈ ವೇಳೆ ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ಹಾಗೂ ಕಾವೇರಿ ನೀರು ಪೂರೈಕೆ ಕುರಿತು ಮಂಜುಳಾ ಅವರು ಪ್ರತಿಕ್ರಿಯಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿಲ್ಲ. ಈ ಬಗ್ಗೆ ಚಿಂತೆ ಬೇಡ ಎಂದರು.

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಲ್ಲಿ ಸಮರ್ಪಕ ಪ್ರಮಾಣದ ನೀರು ಲಭ್ಯವಿದೆ. ನಗರಕ್ಕೆ ಅಗತ್ಯವಿರುವ ನೀರು ನಿರಂತರವಾಗಿ ಪೂರೈಕೆಯಾಗುತ್ತಿದೆ. ಮುಂಗಾರು ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಇನ್ನೂ ನಗರದಲ್ಲಿ ಪೈಪ್‌ಲೈನ್ ಮೂಲಕ ನೀರು ಪೂರೈಕೆ ಆಗದ ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ಸಂಚಾರಿ ಕಾವೇರಿ ಟ್ಯಾಂಕರ್‌ಗಳು ಹಾಗೂ ಕೊಳವೆಬಾವಿಗಳ ಮೂಲಕ ಪರ್ಯಾಯ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಪ್ರತಿ ತಿಂಗಳು ಸರಾಸರಿ 2 ರಿಂದ 2.3 ಟಿಎಂಸಿ ಕಾವೇರಿ ನೀರಿನ ಅಗತ್ಯವಿದೆ. ಹೀಗಾಗಿ ಸಂಬಂಧಿತ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ.
ಎಸ್‌ಟಿಪಿ ಸಿಬ್ಬಂದಿ ಮೃತ ಪ್ರಕರಣ, ಸುರಕ್ಷತೆಗೆ ಆದ್ಯತೆ
ಬೆಳ್ಳಂದೂರು ಜಲಮಂಡಳಿಯ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ (STP) ಕಳೆದ ತಿಂಗಳು ನಿರ್ವಹಣಾ ಕಾರ್ಯದ ವೇಳೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಪ್ರಕರಣ ತನಿಖೆ ಮುಂದುವರಿದಿದೆ. ಘಟನೆಯ ಎಲ್ಲ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಸ್‌ಟಿಪಿ ನಿರ್ವಹಣೆಯಲ್ಲಿ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಸ್ತುತ ಜಲಮಂಡಳಿಯ ಎಲ್ಲಾ ಎಸ್‌ಟಿಪಿಗಳಲ್ಲಿ ನಿಗದಿತ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ. ನಿರ್ವಹಣಾ ಕಾರ್ಯಗಳ ನಿಯಮಿತ ಮೇಲ್ವಿಚಾರಣೆ ನಡೆಯುತ್ತಿದೆ. ಆದಾಗ್ಯೂ, ಕಾರ್ಮಿಕರ ಸುರಕ್ಷತೆಗೆ ಯಾವುದೇ ರೀತಿಯ ರಾಜಿ ಇಲ್ಲದಂತೆ ಕಾರ್ಯ ನಿರ್ವಹಿಸುವುದು ಜಲಮಂಡಳಿಯ ಮೊದಲ ಆದ್ಯತೆಯಾಗಿದೆ ಎಂದರು.
ಎಸ್‌ಟಿಪಿ ಸಿಬ್ಬಂದಿಗೆ ತರಬೇತಿ
ಎಸ್‌ಟಿಪಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಸುರಕ್ಷತಾ ಕ್ರಮಗಳು, ಯಂತ್ರೋಪಕರಣಗಳ ಬಳಕೆ, ತುರ್ತು ಪರಿಸ್ಥಿತಿ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
'ಅನ್ನಪೂರ್ಣ ಯೋಜನೆ' ವಿಸ್ತರಣೆ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಮಾತನಾಡಿ, ಜಲಮಂಡಳಿಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಸ್ವಚ್ಛತಾ ಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣಕ್ಕೆ ಒತ್ತು ನೀಡುವಂತೆ ಆಗ್ರಹಸಿದರು. ಕಾರ್ಮಿಕರಿಗೆ ಆರೋಗ್ಯ ವಿಮೆ, ಸುರಕ್ಷತಾ ಉಪಕರಣಗಳು, ಕೌಶಲ್ಯ ತರಬೇತಿ, ಸೇವಾ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಲಮಂಡಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಜೊತೆಗೆ, ಕಾರ್ಮಿಕರ ಕಲ್ಯಾಣಕ್ಕಾಗಿ ಜಾರಿಯಲ್ಲಿರುವ 'ಅನ್ನಪೂರ್ಣ ಯೋಜನೆ' ಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇದಕ್ಕೂ ಮುನ್ನ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಹಾಗೂ ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾ ಅವರು ಜಲಮಂಡಳಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ ಹಾಗೂ ಎಸ್‌ಟಿಪಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳು ಮತ್ತು ಸಲಹೆಗಳನ್ನು ಆಲಿಸಿದರು. ಜಲಮಂಡಳಿಯ ವಿವಿಧ ಯೋಜನೆಗಳು, ಎಸ್‌ಟಿಪಿಗಳ ಕಾರ್ಯನಿರ್ವಹಣೆ ಹಾಗೂ ಕಾರ್ಮಿಕರ ಸುರಕ್ಷತೆಗಾಗಿ ಕೈಗೊಂಡು ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕೊಟ್ಟರು.


Click it and Unblock the Notifications
