ಬೆಂಗಳೂರಲ್ಲಿ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ವಿಸರ್ಜನೆಗೆ ಸಂಪೂರ್ಣ ನಿಷೇಧ: ಯಾವುದಕ್ಕೆಲ್ಲ ಜಿಬಿಎ ನಿರ್ಬಂಧ
ಬೆಂಗಳೂರಿನ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಲ್ಲಿ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಣೆ, ಮಾರಾಟ ಹಾಗೂ ವಿಸರ್ಜನೆಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಇದೀಗ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರ ಸಂರಕ್ಷಣೆ, ಜಲಮೂಲಗಳ ರಕ್ಷಣೆ ಹಾಗೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಣೆ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರು ತಿಳಿಸಿದ್ದಾರೆ.
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಹಬ್ಬವನ್ನು ಆಚರಿಸುವ ಉದ್ದೇಶದಿಂದ ಪಾಲಿಕೆ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಗಿದ್ದು, ನಿಷೇಧಿತ ಪಿಓಪಿ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ವಿಸರ್ಜನೆಯ ವಿರುದ್ಧ ನಿರಂತರವಾಗಿ ನಿಗಾ ವಹಿಸುವಂತೆ ಸೂಚಿಸಲಾಗಿದೆ.

ಪಿಓಪಿ ಹಾಗೂ ಥರ್ಮಕೋಲ್ ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದು, ದಾಸ್ತಾನು ಮಾಡುವುದು ಹಾಗೂ ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಸಾರ್ವಜನಿಕ ಸ್ಥಳಗಳು, ಮಾರುಕಟ್ಟೆಗಳು ಹಾಗೂ ಇತರೆ ವಾಣಿಜ್ಯ ಪ್ರದೇಶಗಳಲ್ಲಿ ಪಿಓಪಿ ಗಣೇಶ ಮೂರ್ತಿಗಳ ಮಾರಾಟ ಮತ್ತು ಸಾಗಣೆಗೆ ಅವಕಾಶವಿರುವುದಿಲ್ಲ.
ಅದೇ ರೀತಿ ಗಣೇಶ ಮೂರ್ತಿಗಳಿಗೆ ಸೀಸ, ಪಾದರಸ, ಕ್ಯಾಡ್ಮಿಯಂ ಸೇರಿದಂತೆ ಭಾರ ಲೋಹಗಳನ್ನು ಒಳಗೊಂಡಿರುವ ರಾಸಾಯನಿಕ ಬಣ್ಣಗಳನ್ನು ಬಳಸುವುದನ್ನು ಸಹ ನಿಷೇಧಿಸಲಾಗಿದೆ. ಇಂತಹ ಮೂರ್ತಿಗಳನ್ನು ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ಕಟ್ಟುನಿಟ್ಟಾಗಿ ತಡೆಯಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಮಣ್ಣಿನ ಹಾಗೂ ನೈಸರ್ಗಿಕ ಬಣ್ಣದ ಗಣೇಶ ಮೂರ್ತಿಗಳನ್ನೇ ಬಳಸಿ
ಗಣೇಶ ಚತುರ್ಥಿ ಆಚರಣೆಗೆ ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಲಾದ ಹಾಗೂ ನೈಸರ್ಗಿಕ ಬಣ್ಣಗಳನ್ನು ಬಳಸಿ ಅಲಂಕರಿಸಲಾದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಮಣ್ಣಿನಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ಪೂಜಿಸುವ ಮೂಲಕ ಪರಿಸರ ಸಂರಕ್ಷಣೆಗೆ ಸಾರ್ವಜನಿಕರು ಕೊಡುಗೆ ನೀಡಬೇಕು. ಮೂರ್ತಿಗಳ ವಿಸರ್ಜನೆಗೆ ಪಾಲಿಕೆಯಿಂದ ಗುರುತಿಸಲಾದ ಕಲ್ಯಾಣಿ, ಟ್ಯಾಂಕ್ ಅಥವಾ ಇತರೆ ಅಧಿಕೃತ ವಿಸರ್ಜನಾ ಸ್ಥಳಗಳನ್ನು ಮಾತ್ರ ಬಳಸುವಂತೆ ಆಯುಕ್ತರು ತಿಳಿಸಿದರು.
ಪಿಓಪಿ ಮೂರ್ತಿಗಳ ವಿರುದ್ಧ ಕಟ್ಟುನಿಟ್ಟಿನ ತಪಾಸಣೆ
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ನಡೆಸಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ.
ಮೂರ್ತಿ ತಯಾರಿಕಾ ಘಟಕಗಳು, ಗೋದಾಮುಗಳು, ಅಂಗಡಿಗಳು, ಮಾರುಕಟ್ಟೆಗಳು ಹಾಗೂ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ದಿಢೀರ್ ತಪಾಸಣೆ ನಡೆಸಿ ನಿಷೇಧಿತ ಮೂರ್ತಿಗಳು ಕಂಡುಬಂದಲ್ಲಿ ಅವುಗಳನ್ನು ತಕ್ಷಣ ವಶಪಡಿಸಿಕೊಳ್ಳಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಮಾರಾಟಗಾರರು ಹಾಗೂ ದಾಸ್ತಾನುಗಾರರಿಗೆ ಎಚ್ಚರಿಕೆ
ಗಣೇಶ ಮೂರ್ತಿ ಮಾರಾಟಗಾರರು ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡಬೇಕು. ಪಿಓಪಿ ಮೂರ್ತಿಗಳನ್ನು ಯಾವುದೇ ಕಾರಣಕ್ಕೂ ದಾಸ್ತಾನು ಮಾಡುವುದು, ಸಾಗಣೆ ಮಾಡುವುದು ಅಥವಾ ಮಾರಾಟ ಮಾಡುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಸಿದರು. ಪಿಓಪಿ ಮೂರ್ತಿಗಳ ಮಾರಾಟವಾಗದಂತೆ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ನಿಷೇಧವನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿದಲ್ಲಿ ಮೂರ್ತಿಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು.
ವಿಸರ್ಜನಾ ಸ್ಥಳಗಳಲ್ಲಿ ವಿಶೇಷ ನಿಗಾ
ಗಣೇಶ ಮೂರ್ತಿಗಳ ವಿಸರ್ಜನೆಯ ಸಂದರ್ಭದಲ್ಲಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳದಂತೆ ಪಾಲಿಕೆ ವತಿಯಿಂದ ಗುರುತಿಸಲಾದ ವಿಸರ್ಜನಾ ಸ್ಥಳಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು. ವಿಸರ್ಜನಾ ಸ್ಥಳಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ, ತ್ಯಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನೈಸರ್ಗಿಕ ಜಲಮೂಲಗಳಲ್ಲಿ ಯಾವುದೇ ರೀತಿಯ ನಿಷೇಧಿತ ಮೂರ್ತಿಗಳನ್ನು ವಿಸರ್ಜನೆ ಮಾಡದಂತೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.
ಧಾರ್ಮಿಕ ಆಚರಣೆಯೊಂದಿಗೆ ಪರಿಸರ ಸಂರಕ್ಷಣೆಯೂ ಅಗತ್ಯ
ಗಣೇಶ ಚತುರ್ಥಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರಮುಖ ಹಬ್ಬವಾಗಿದ್ದು, ಧಾರ್ಮಿಕ ಆಚರಣೆಗಳಿಗೆ ಗೌರವ ನೀಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಪಿಓಪಿ ಮೂರ್ತಿಗಳು ಹಾಗೂ ರಾಸಾಯನಿಕ ಬಣ್ಣಗಳಿಂದ ಜಲಮೂಲಗಳಿಗೆ ಉಂಟಾಗಬಹುದಾದ ಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಜಾಗೃತಿ ಹಾಗೂ ನಿಯಮಾನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದು ಆಯುಕ್ತರು ತಿಳಿಸಿದರು.


Click it and Unblock the Notifications
