ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿರುವ ಕಾಂಗ್ರೆಸ್: ಬೊಮ್ಮಾಯಿ
ಬೆಂಗಳೂರು, ಮೇ 24: ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ಉಪಮುಖ್ಯಮಂತ್ರಿಗಳು ಮಂಗಳವಾರ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಪೊಲೀಸ್ ಇಲಾಖೆ ಜೊತೆಗೆ ಸಭೆ ನಡೆಸಿದ್ದರು. ಸಭೆಯಲ್ಲಿ ಪೊಲೀಸರಿಗೆ ಕೇಸರೀಕರಣ ಮಾಡುವ ಅವಕಾಶ ಕೊಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಉತ್ತಮ ಹೆಸರು ಮಾಡಿದೆ. ನಮ್ಮ ಪೊಲೀಸರು ಕೇಸರಿಕರಣ ಯಾವತ್ತೂ ಮಾಡಿಲ್ಲ ಎಂದು ಅವರು ಪೊಲೀಸರ ನಡೆಯನ್ನು ಸಮರ್ಥಿಸಿಕೊಂಡರು.

ಕಾಂಗ್ರೆಸ್ ನಾಯಕರು ತಮ್ಮ ಅಜೆಂಡಾ ಜಾರಿ ಮಾಡಲು ಹೀಗೆ ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದರು. ಈ ಮೂಲಕ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ.
ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ತುಷ್ಟೀಕರಣ ರಾಜಕಾರಣ ಮಾಡಲು ಮುಂದಾಗುತ್ತಿದೆ. ಇದು ಸರಿಯಲ್ಲ ಎಂದು ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದರು.
ಪೊಲೀಸರೊಂದಿಗಿನ ಸಭೆಯಲ್ಲಿ ಆಗಿದ್ದೇನು?
ಮಂಗಳವಾರ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆ ಜತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಸಭೆ ನಡೆಸಿದೆ. ಈ ವೇಳೆ ಮತನಾಡಿದ ಅವರು ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಕಾಂಗ್ರೆಸ್ ಸರ್ಕಾರ ಅವಕಾಶ ಕೊಡುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕಿದ್ದೀರಿ. ಹೀಗಾದರೆ ಹೇಗೆ?. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡೇ ಬರಬಹುದಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಿಎಸ್ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಕೈವಾಡ ಸಾಬೀತಾಗಿದೆ. ಇದರಿಂದ ಇಲಾಖೆ ಕೆಟ್ಟ ಹೆಸರು ಬಂದಿದೆ. ಪೊಲೀಸ್ ಇಲಾಖೆಯ ಘನತೆಯನ್ನು ನೀವು ಹಾಳು ಮಾಡುತ್ತಿದ್ದೀರಿ ಇದನ್ನು ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಡಿಕೆಶಿಯವರ ಈ ಮಾತುಗಳು ಇದೀಗ ಬಿಜೆಪಿ ವಲಯದಲ್ಲಿ ಚರ್ಚೆ ಏಳಲು ಕಾರಣವಾಗಿದೆ. ಈ ಸಂಬಂಧ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.












Click it and Unblock the Notifications