ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ: ಅರುಣ್ ಸಿಂಗ್ ಸ್ಪಷ್ಟನೆ, ಕಾಂಗ್ರೆಸ್ ವಿರುದ್ಧ ಬಿಜೆಪಿಗರು ಕೆಂಡಾಮಂಡಲ
ಬೆಂಗಳೂರು, ಏಪ್ರಿಲ್ 04: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023ರಲ್ಲಿ ಬಿಜೆಪಿಯಿಂದ ಸ್ಪರ್ಧಿಸುವವರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಅಭ್ಯರ್ಥಿಗಳ ಪಟ್ಟಿ ಕುರಿತು ಸುಳ್ಳು ಸುದ್ದಿ ಪ್ರಕಟಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಪ್‍ಗಳಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಈ ಬಿಜೆಪಿ ನಕಲಿ ಪಟ್ಟಿಗಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಐಟಿ ಬಿಟಿ ಖಾತೆ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು, ನಕಲಿ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ ಎಂದು ಆರೋಪಿಸಿದರು. ಪೊಲೀಸರಿಗೆ ಕಾಂಗ್ರೆಸ್ ವಿರುದ್ಧ ದೂರು ನೀಡಿರುವುದಾಗಿ ಅವರು ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯು ನಮ್ಮ ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಹೆಸರು ಮತ್ತು ಸೀಲಿನೊಂದಿಗೆ ಬಿಜೆಪಿಯ 100 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂದು ಅವರು ಕಿಡಿ ಕಾರಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದು ಕಾಂಗ್ರೆಸ್ ದಿವಾಳಿತನಕ್ಕೆ ಸಾಕ್ಷಿ ಎಂದು ಟೀಕಿಸಿದರು. ಇದು ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ. ಅವರು ಹೀಗೆ ಮಾಡಿಲ್ಲವಾದರೆ ದೂರು ಕೊಡಬೇಕಿತ್ತು ಎಂದು ತಿಳಿಸಿದರು.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯನ್ನು ಮಣಿಸಲು ಸಾಧ್ಯವಾಗದೆ ಈ ರೀತಿ ಹತಾಶರಾಗಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ನಮ್ಮಲ್ಲಿ ಗೊಂದಲ ಸೃಷ್ಟಿಸಲು ಹೀಗೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದ ಘನತೆಗೆ ಈ ಮೂಲಕ ಅವರು ಧಕ್ಕೆ ತಂದುಕೊಳ್ಳುತ್ತಿದ್ದಾರೆ ಎಂದು ನುಡಿದರು.
ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ವಿರುದ್ಧ ದೂರು
ಇತ್ತೀಚೆಗಷ್ಟೇ ಚುನಾವಣೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದ್ದು, ಇದಿನನ್ನು ಚುನಾವಣೆ ಪ್ರಾರಂಭದ ಹಂತ. ಚುನಾವಣೆಯ ಅಂತಿಮ ಕಾಲದಲ್ಲಿ ಇನ್ನೂ ಯಾವ್ಯಾವ ತಳಮಟ್ಟಕ್ಕೆ ಇಳಿಯಬಹುದು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಈ ರೀತಿ ಮಾಡಿದ್ದರೆ ಇದರ ಸಂಬಂಧ ಹೇಳಿಕೆ ಬಿಡುಗಡೆ ಮಾಡಿ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲವಾದರೆ ಸಂಬಂಧಿತರಿಗೆ ದೂರು ಕೊಡಬೇಕು ಎಂದು ಅಶ್ವಥ್ ನಾರಾಯಣ ಆಗ್ರಹಿಸಿದರು.
ಈ ಸಂಬಂಧ ಈಗಾಗಲೇ ಕಾಂಗ್ರೆಸ್ ಪಕ್ಷದ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ, ದೆಹಲಿಯ ಚುನಾವಣಾ ಕಮೀಷನರ್‍ಗೆ ದೂರಿನ ಪ್ರತಿಯನ್ನು ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಈ ತೃತೀಯ ದರ್ಜೆಯ ರಾಜಕಾರಣವನ್ನು ಬಿಜೆಪಿ ಖಂಡಿಸುವುದಾಗಿ ಅವರು ಹೇಳಿದರು.

ಬಿಜೆಪಿ ಪಟ್ಟಿ ಬಿಡುಗಡೆ: ಸಿಟಿ ರವಿ ಕೆಂಡ
ಮಂಗಳವಾರ ಮಧ್ಯಾಹ್ನ ಬಿಜೆಪಿಯ 100 ಮಂದಿ ಚುನಾವಣಾ ಅಭರ್ಥಿಗಳ ಪಟ್ಟಿ ಬಿಡುಗಡೆಯಾಗಿತ್ತು. ಆದರೆ ಇದು ನಿಜವಲ್ಲ ಫೆಕ್ ಎಂದು ಬಿಜೆಪಿ ಟ್ವೀಟ್ ಮಾಡಿ ಸ್ಪಷ್ಟಪಡಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಕಾಂಗ್ರೆಸ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಫೇಕ್ (ನಕಲಿ) ಫ್ಯಾಕ್ಟರಿಯಿಂದ ಇನ್ನೊಂದು ಫೇಕ್ ಸುದ್ದಿ ಹೊರ ಬಿದ್ದಿದೆ. ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಬಿಜೆಪಿ ನಾಯಕತ್ವ ನಡೆಸುತ್ತಿದೆ.
ಪ್ರಜಾತಂತ್ರವೆಂದರೆ ಏನೆಂದು ತಿಳಿಯದ ಗುಲಾಮಿ ಮನಸ್ಥಿತಿಯ ಕಾಂಗ್ರೆಸ್ ಸುಳ್ಳು ಸುದ್ದಿಯನ್ನು ಹರಡುವುದೇ ರಾಜಕೀಯ ಎಂದುಕೊಂಡಿದೆ. ಕಾಂಗ್ರೆಸ್‌ನಿಂದ ಈ ಪಟ್ಟಿ ಬಿಡುಗಡೆಯಾಗಿದೆ ಎಂದು ಅವರು ಗುಡುಗಿದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ, ಈಗ ಹರಿದಾಡುತ್ತಿರುವುದು ನಕಲಿ ಪಟ್ಟಿ ಎಂದು ಅವರು ಸ್ಪಷ್ಟಪಡಿಸಿದರು.












Click it and Unblock the Notifications