ಬಿಜೆಪಿಗೆ ಅಸತ್ಯ, ಹಿಂಸೆಯಲ್ಲಿ ನಂಬಿಕೆಯಿದೆ: ಸಿದ್ದರಾಮಯ್ಯ
ಬೆಂಗಳೂರು, ಅ.2: ಗಾಂಧಿಯವರು ಸತ್ಯ ಮತ್ತು ಹಿಂಸೆಯ ಮಾರ್ಗ ತೋರಿದ್ದರೆ, ಭಾರತೀಯ ಜನತಾ ಪಕ್ಷ ಅಸತ್ಯ ಮತ್ತು ಹಿಂಸೆಯ ಹಾದಿಯಲ್ಲಿ ನಂಬಿಕೆ ಇಟ್ಟಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿಂದು ಆಯೋಜಿಸಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿಯವರ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಬಿಜೆಪಿಯವರು ದೇಶಭಕ್ತ ಎಂದು ಕರೆಯುತ್ತಾರೆ. ಇಂತಹ ಪಕ್ಷ ಅಧಿಕಾರದಲ್ಲಿ ಇದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಉಳಿಯಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಮತ್ತು ನಡೆ ತದ್ವಿರುದ್ಧವಾಗಿವೆ. ಅವರು ಏನು ಹೇಳುತ್ತಾರೋ ಅದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಾರೆ. ಮೋದಿ ಅವರು ಯಾವುದನ್ನು ಉಳಿಸುತ್ತೇನೆ ಎನ್ನುತ್ತಾರೋ ಅದನ್ನು ನಾಶ ಮಾಡಲು ಹೊರಟಿದ್ದಾರೆ ಎಂದರ್ಥ ಎಂದು ಟೀಕಿಸಿದರು.

ಇಂದು ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಉಳಿದಿದೆಯೇ ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವವರಿಗೆ ದೇಶದ್ರೋಹದ ಸುಳ್ಳು ಆಪಾದನೆಯಡಿ ಜೈಲಿಗೆ ಅಟ್ಟಲಾಗುತ್ತಿದೆ. ಕಳೆದು ಹತ್ತು ತಿಂಗಳುಗಳಿಂದ ರೈತರು ದೇಶಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಾತುಕತೆಯ ಬದಲು, ಕ್ರೌರ್ಯ ಮತ್ತು ಬಲಪ್ರಯೋಗದ ಮೂಲಕ ಅವರ ಹೋರಾಟವನ್ನು ಅಂತ್ಯಗೊಳಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದಿಂದ ಗಾಂಧೀಜಿಗೆ ಅಪಮಾನ:
ನೆಲ್ಸನ್ ಮಂಡೇಲಾ ಅವರು ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಟ ನಡೆಸಲು, ದಶಕಗಳ ಕಾಲ ಸೆರೆಮನೆ ವಾಸ ಅನುಭವಿಸಲು ಸ್ಪೂರ್ತಿನೀಡಿದ್ದು ಗಾಂಧೀಜಿಯವರ ವಿಚಾರಧಾರೆ. ಹೀಗೆ ಮಾರ್ಟೀನ್ ಲೂಥರ್ ಕಿಂಗ್ ರಿಂದ ಹಿಡಿದು ಬರಾಕ್ ಒಬಾಮ ವರೆಗೆ ಜಗತ್ತಿನಾದ್ಯಂತ ಹೋರಾಟಗಾರರಿಗೆ ಗಾಂಧಿ ತತ್ವ ಇಂದಿಗೂ ದಾರಿದೀಪವಾಗಿದೆ. ಈ ಕಾಣಕ್ಕಾಗಿಯೇ ಗಾಂಧಿಯವರು ಇಂದು ಕೇವಲ ಭಾರತಕ್ಕಷ್ಟೇ ಸೀಮಿತವಾಗಿರದೆ, ವಿಶ್ವನಾಯಕರಾಗಿದ್ದಾರೆ. ಆದರೆ ನಮ್ಮದೇ ದೇಶದ ಕೇಂದ್ರ ಸರ್ಕಾರ ಗಾಂಧಿ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ, ಅವರ ಬಗ್ಗೆ ಹಗುರಾಗಿ ಮಾತನಾಡುವ ಮೂಲಕ ಮಹಾನ್ ವ್ಯಕ್ತಿಗೆ ಅಪಮಾನ ಮಾಡುತ್ತಿದೆ ಎಂದು ಖಂಡಿಸಿದರು.
ಬಿಜೆಪಿ ಆಡಳಿತದಲ್ಲಿ ದೇಶ ಸಂಕಷ್ಟದ ದಿನಗಳನ್ನು ಎದುರಿಸುತ್ತಿದೆ. ಇಂದು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗಾಂಧಿಯವರ ವಿಚಾರಧಾರೆಗಳು ನಮ್ಮ ಈ ಹೋರಾಟದ ಹಾದಿಗೆ ಬೆಳಕಾಗಲಿ ಎಂದು ಹಾರೈಸುತ್ತೇನೆ. ಗಾಂಧೀಜಿಯವರನ್ನು ಸಂಪೂರ್ಣವಾಗಿ ಅನುಸರಿಸಲು ಸಾಧ್ಯವಿಲ್ಲದಿದ್ದರೂ, ಅವರ ದಾರಿಯಲ್ಲಿ ಸಾಗುವ ಪ್ರಯತ್ನ ಮಾಡೋಣ. ಇದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂಬುದು ನನ್ನ ಭಾವನೆ ಎಂದರು.
ಇಂದು ಮಹಾತ್ಮ ಗಾಂಧಿಯವರ ಅವರ ಜೊತೆಗೆ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಣೆ ಮಾಡಿದ್ದೇವೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರು "ಜೈ ಜವಾನ್, ಜೈ ಕಿಸಾನ್" ಎಂಬ ಕರೆ ನೀಡಿದರು. ರೈಲು ದುರಂತ ಸಂಭವಿಸಿದಾಗ ಘಟನೆಯ ನೈತಿಕ ಹೊಣೆ ಹೊತ್ತು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಎಂದರೆ ತಪ್ಪಿಲ್ಲ. ಈಗಿನ ರಾಜಕಾರಣದಲ್ಲಿ ನೈತಿಕತೆ ಎಂಬುದು ಕಣ್ಮರೆಯಾಗಿದೆ. ಶಾಸ್ತ್ರಿ ಅವರು ಪ್ರಧಾನಿಯಾದ ಮೇಲೆ ಅವರ ಮಗ ಕೆಲಸ ಮಾಡುತ್ತಿದ್ದ ಕಂಪನಿ ಮುಂಬಡ್ತಿ ನೀಡಿತು ಎಂಬ ಕಾರಣಕ್ಕೆ ಕೆಲಸಕ್ಕೆ ರಾಜೀನಾಮೆ ನೀಡುವಂತೆ ಹೇಳಿ, ಕೆಲಸ ಬಿಡುವಂತೆ ಮಾಡಿದ್ದರು. ಇಂತಹ ಪ್ರಾಮಾಣಿಕತೆ ಈಗಿನ ರಾಜಕಾರಣಗಳಲ್ಲಿ ಕಾಣಲು ಸಾಧ್ಯವೇ? ಎಂದು ಸ್ಮರಿಸಿದರು.
ರೈತರ ಕಷ್ಟ ಕೇಳದ ಮೋದಿ
'ರೈತರ ಸಂಕಷ್ಟಕ್ಕೆ ಎಂದೂ ಸ್ಪಂದಿಸದ ಗುಜರಾತ್ ಮೂಲದ ಪ್ರಧಾನಿ ನರೇಂದ್ರ ಮೋದಿ ಅವರು ರೈತಪರ ಹೋರಾಟ ನಡೆಸಿದ್ದ ಮಹಾತ್ಮ ಗಾಂಧೀಜಿ ಅವರನ್ನು ತಮ್ಮವರು ಎಂದು ಬಿಂಬಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ. ಗಾಂಧೀಜಿ ಅವರು ರೈತರಿಗಾಗಿ ಭಾರತದಲ್ಲಿ ತಮ್ಮ ಹೋರಾಟ ಆರಂಭಿಸಿದ್ದರು. ಆದರೆ ದೇಶದ ಅನ್ನದಾತ ಕಳೆದ 10 ತಿಂಗಳಿಂದ ಗಾಂಧಿ ಆದರ್ಶವಾದ ಅಹಿಂಸೆ ಮೂಲಕ ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೂ ಪ್ರಧಾನಿ ಅವರು ಅವರ ಕಷ್ಟ ಕೇಳುವ ಮನಸ್ಸು ಮಾಡಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದರು.
ನಮಗೆ ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೆ ನಾವು ಕಾಂಗ್ರೆಸ್ಸಿಗನಾಗಿ ಗುರುತಿಸಿಕೊಳ್ಳುವುದೇ ಒಂದು ಹೆಮ್ಮೆ. ಕಾಂಗ್ರೆಸ್ ಸದಸ್ಯತ್ವವೇ ನಮಗೆ ಪವಿತ್ರ ಸ್ಥಾನ. ಹೀಗಾಗಿ ನಮ್ಮ ಹಿರಿಯರ ಮಾರ್ಗದರ್ಶನವನ್ನು ನಾವು ಪಾಲಿಸಬೇಕು. ಬೆಳಗಾವಿಯಲ್ಲಿ ಬೃಹತ್ ಕಾಂಗ್ರೆಸ್ ಕಚೇರಿ ನಿರ್ಮಿಲಾಗಿದ್ದು, ಡಿಸೆಂಬರ್ 28ರ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಇದಕ್ಕೆ ಗಾಂಧಿ ಭವನ ಎಂದು ಹೆಸರಿಡಲು ಚಿಂತನೆ ನಡೆದಿದೆ. ಈ ಬಗ್ಗೆ ಪಕ್ಷದ ಎಲ್ಲ ಹಿರಿಯ ನಾಯಕರೂ ಚರ್ಚಿಸುತ್ತೇವೆ ಎಂದರು.
ಇದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ನಿಮಿತ್ತ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಎಚ್. ಆಂಜನೇಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.












Click it and Unblock the Notifications