ಸಿಇಟಿ ಪರೀಕ್ಷೆ ದಿನ ಪ್ರಮಾಣ ವಚನ; ಸಿದ್ದರಾಮಯ್ಯ ಕಾಲೆಳೆದ ಬಿಎಲ್ ಸಂತೋಷ್
ರಾಜ್ಯದಾದ್ಯಂತ ಶನಿವಾರ (ಮೇ 20) ಮತ್ತು ಭಾನುವಾರ (ಮೇ 21) ವೃತ್ತಿಪರ ಕೋರ್ಸ್‌ಗಳಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತಿವೆ. ಇದೇ ವೇಳೆ ಶನಿವಾರ, ಮೇ 20ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Not many days has passed after our designate CM tweeted this . Tomorrow is CET exams across state & Bengaluru. What would have happened Sri @siddaramaiah & Sri @DKShivakumar if your oath taking was deferred by a day or two so that students will not be troubled . https://t.co/IXqrvAaGjp
— B L Santhosh (@blsanthosh) May 19, 2023
ಸಿದ್ದರಾಮಯ್ಯನವರ ಪ್ರಮಾಣ ವಚನ ಸಮಾರಂಭಕ್ಕೆ ರಾಜ್ಯದ ಮೂಲೆಮೂಲೆಯಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸುವುದರಿಂದ ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಜನದಟ್ಟಣೆ ಹೆಚ್ಚಾಗಲಿದೆ. ಇದರಿಂದ ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆಯ ಆತಂಕ ಎದುರಾಗಿದೆ.

ಇದೇ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಿಎಂ ಸಿದ್ದರಾಮಯ್ಯನವರ ಹಳೆ ಟ್ವೀಟ್ ಅನ್ನು ರೀ ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.
ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷದ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6 ಮತ್ತು 7ರಂದು ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ್ದರು. ಮೇ 7ರಂದು ನೀಟ್ (NEET Exam) ನಿಗದಿಯಾಗಿತ್ತು. ಇದಕ್ಕೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸ್ಥಳದ ಸುತ್ತಮುತ್ತಲಿನ ಕಾಲೇಜು ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಇರುವುದರಿಂದ ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರು ಬೇಜವಾಬ್ದಾರಿ ಹಾಗು ಬೆಂಗಳೂರಿನ ಜನರ ವಿರೋಧವನ್ನು ಲೆಕ್ಕಿಸದೆ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ ಎಂದು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದರು.
ಇದೀಗ ಅದನ್ನೇ ರೀಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿರುವ ಬಿ.ಎಲ್. ಸಂತೋಷ್, ನರೇಂದ್ರ ಮೋದಿ ರೋಡ್ ಶೋ ಮಾಡುವಾಗ ಮಾತ್ರ ನಿಮಗೆ ವಿದ್ಯಾರ್ಥಿಗಳು ಕಾಣುತ್ತಾರಾ? ಸಿಇಟಿ ಪರೀಕ್ಷೆ ದಿನವೇ ಪ್ರಮಾಣ ವಚನ ಸಮಾರಂಭ ಆಯೋಜಿಸಿ ವಿದ್ಯಾರ್ಥಿಗಳಿಗೆ ತೊಂದರೆ ಕೊಡುತ್ತಿದ್ದೀರಿ. ಈಗ ನೀವು ಮಾಡುತ್ತಿರುವುದು ಸರೀನಾ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ಗೆ ಪ್ರಶ್ನೆಸಿದ್ದಾರೆ.
ಶನಿವಾರ, ಮೇ 20ರಂದು ಬೆಳಗ್ಗೆ 10.30ಕ್ಕೆ ಸಿಇಟಿ ಪರೀಕ್ಷೆಗಳು ಆರಂಭವಾಗಲಿದ್ದು, ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.
ಬೆಂಗಳೂರಿನಲ್ಲೇ 121 ಪರೀಕ್ಷಾ ಕೇಂದ್ರಗಳು
ಈ ಬಾರಿಯ ಸಿಇಟಿ ಪರೀಕ್ಷೆಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ರಾಜ್ಯದ ಸುಮಾರು 562 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ 121 ಪರೀಕ್ಷಾ ಕೇಂದ್ರಗಳಿದ್ದು, ನಗರದ ಹೃದಯ ಭಾಗದ ಹಲವು ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ ಮಾಡಲಾಗಿದೆ.
85 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದಾರೆ. ಸಿಎಂ ಹಾಗು ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭ ನಡೆಯುವ ಕಂಠೀರವ ಕ್ರೀಡಾಂಗಣ ಸುತ್ತಮುತ್ತಲಿನ ಕೆಲವು ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿಸಿದೆ.
ಆದ್ದರಿಂದ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಭಾರೀ ಸಂಚಾರ ಹಾಗೂ ಜನದಟ್ಟಣೆ ಸಮಸ್ಯೆಯಿಂದ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲು ಸಾಧ್ಯವಾಗದಿರಬಹುದು ಎಂಬ ಆತಂಕದಲ್ಲಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಸಿ, ವಿದ್ಯಾರ್ಥಿಗಳು ಆರಾಮವಾಗಿ ಪರೀಕ್ಷಾ ಕೇಂದ್ರ ತಲುಪಲು ಮತ್ತು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು.












Click it and Unblock the Notifications