BJP MLA Byrati BasavaraJ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನ
BJP MLA Byrati BasavaraJ: ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿದ್ದು, ಪ್ರಕರಣ ಸಂಬಂಧ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಹತ್ಯೆ ಪ್ರಕರಣದ ತನಿಖೆಯ ಭಾಗವಾಗಿ ಶಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸೈಟ್ ವಿವಾದದ ಹಿನ್ನೆಲೆಯಲ್ಲೇ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಕುರಿತು ಸಹ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕೊಲೆ ಪ್ರಕರಣದಲ್ಲಿ ಹಲವರ ಬಂಧನ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದರಿಂದ, ತನಿಖೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಹೆಚ್ಚಿನ ಅವಕಾಶ ದೊರೆತಿದೆ ಎನ್ನಲಾಗಿದೆ. ಈಗಾಗಲೇ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದ್ದು, ಮುಂದಿನ ಹಂತದಲ್ಲಿ ಮತ್ತಷ್ಟು ವಿಚಾರಣೆ ನಡೆಯಲಿದೆ. ಹತ್ಯೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಪ್ರಕರಣ ಸಂಬಂಧ ಬಿಜೆಪಿ ಶಾಸಕ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಸಂಪರ್ಕಕ್ಕೆ ಸಿಗದ ಸ್ಥಿತಿಯಲ್ಲಿದ್ದರು ಎಂಬ ಮಾಹಿತಿ ಹೊರಬಂದಿತ್ತು. ಅವರು ತನಿಖೆಯಿಂದ ತಪ್ಪಿಸಿಕೊಳ್ಳಲು ಹೊರಟಿದ್ದಾರೆ ಎನ್ನುವ ಮಾತುಗಳು ಕೂಡ ಸಹ ಕೇಳಿಬಂದಿದ್ದವು.
ವಿಮಾನ ನಿಲ್ದಾಣದಲ್ಲೇ ಬಂಧನ
ಈ ನಡುವೆಯೇ ಇಂಡಿಗೋ ವಿಮಾನ (ಫ್ಲೈಟ್ ಸಂಖ್ಯೆ 6E683) ಮೂಲಕ ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವಿಮಾನ ನಿಲ್ದಾಣದಲ್ಲೇ ಶಾಸಕರನ್ನು ತಡೆದು ವಿಚಾರಣೆ ನಡೆಸಿ, ಮುಂದಿನ ಕಾನೂನು ಕ್ರಮಕ್ಕಾಗಿ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.
ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಭೈರತಿ ಬಸವರಾಜ್ ಅವರ ಪಾತ್ರದ ಕುರಿತು ವಿಚಾರಣೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ ಏನು?
ಕಳೆದ ವರ್ಷದ ಜುಲೈ ತಿಂಗಳಲ್ಲಿ ಭಾರತಿ ನಗರ ಪ್ರದೇಶದಲ್ಲಿ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಶಸ್ತ್ರಧಾರಿಗಳ ಗುಂಪೊಂದು ಮಾರಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿತ್ತು. ಪ್ರಾಥಮಿಕ ತನಿಖೆಯಲ್ಲಿ ಇದು ಆಸ್ತಿ ಸಂಬಂಧಿತ ವಿವಾದದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂಬುದು ಬೆಳಕಿಗೆ ಬಂದಿದೆ. ಈ ಸಂಬಂಧ ದಾಖಲಾದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು 5ನೇ ಆರೋಪಿಯಾಗಿ ಉಲ್ಲೇಖಿಸಲಾಗಿದ್ದು, ಜಗದೀಶ್ ಪದ್ಮನಾಭ ಅಲಿಯಾಸ್ ಜಗ (45)ನನ್ನು ಪ್ರಮುಖ ಆರೋಪಿಯಾಗಿ ಗುರುತಿಸಲಾಗಿದೆ.
ಪ್ರಕರಣದಲ್ಲಿ ತಮ್ಮ ವಿರುದ್ಧ ಕಾನೂನು ಕ್ರಮ ಜರುಗದಂತೆ ತಡೆಯಲು ಭೈರತಿ ಬಸವರಾಜ್ ಅವರು ಕಳೆದ ಮಂಗಳವಾರ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ತಿರಸ್ಕರಿಸಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಿ, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಬೆಳವಣಿಗೆಯ ನಂತರ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲು ತನಿಖಾ ಸಂಸ್ಥೆಗಳು ಹುಡುಕಾಟ ನಡೆಸುತ್ತಿತ್ತು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ದೇವನಹಳ್ಳಿ ಪೊಲೀಸರು ಭೈರತಿ ಬಸವರಾಜ್‌ನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಬಂಧಿಸಿ ಕರೆದೊಯ್ದಿದ್ದಾರೆ. ಅವರು, ಕೆಲ ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications