ಕರ್ನಾಟಕದಲ್ಲಿ ಮುಂದಿನ ಸಿಎಂ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಉತ್ತರ
ನವದೆಹಲಿ, ಜುಲೈ 26: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ನವದೆಹಲಿಯಲ್ಲಿ ಕರ್ನಾಟದ ಮುಂದಿನ ಸಿಎಂ ಯಾರು ಎನ್ನುವ ಬಗ್ಗೆ ಪ್ರಶ್ನೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉತ್ತರಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಸಲಾಗುವುದು. ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿ ಸಭೆಯನ್ನು ಯಾವಾಗ ನಡೆಸಬೇಕು ಎನ್ನುವುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಈ ಸಭೆ ನಡೆಸಿದ ನಂತರದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಕುರಿತು ಸ್ಪಷ್ಟ ಚಿತ್ರಣ ಹೊರ ಬೀಳಲಿದೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ರೇಸ್ ನಲ್ಲಿ ಇರುವವರು?:
ಕರ್ನಾಟಕದಲ್ಲಿ ಬಿ ಎಸ್ ಯಡಿಯೂರಪ್ಪ ನಂತರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಹಲವು ನಾಯಕರ ಹೆಸರು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಸೋಮವಾರ ಸಂಜೆ ಅಥವಾ ಮಂಗಳವಾರ ಬೆಳಗ್ಗೆ ಹೊತ್ತಿಗೆ ಬಿಜೆಪಿಯು ರಾಜ್ಯಕ್ಕೆ ವೀಕ್ಷಕರನ್ನು ಕಳುಹಿಸಲಿದ್ದು, ಆನಂತರದಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಸಂದೇಶ ರವಾನಿಸಲಿದ್ದಾರೆ. ಇದರ ಮಧ್ಯೆ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ ಅಲ್ಲದೇ ಇತ್ತೀಚಿನ ಬೆಳವಣಿಗೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶಿವಕುಮಾರ್ ಉದಾಸಿ ಹೆಸರು ಮುಂದಿನ ಮುಖ್ಯಮಂತ್ರಿ ರೇಸ್ ನಲ್ಲಿ ಕೇಳಿ ಬರುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.












Click it and Unblock the Notifications