ಉದ್ಯಮಿ ಪ್ರದೀಪ್ ಆತ್ಮಹತ್ಯೆ: ಸಿದ್ದರಾಮಯ್ಯ ಹಂಚಿಕೊಂಡ ವಿಡಿಯೊದಲ್ಲಿ ಕುಟುಂಬಸ್ಥರು ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 03: ಬೆಂಗಳೂರಿನ ಕಗ್ಗಲಿಪುರದಲ್ಲಿ ಉದ್ಯಮಿ ಪ್ರದೀಪ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾವಿ ರಾಜಕಾರಣಿ ಹಾಗೂ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಪ್ರಕರಣ ದಾಖಲಾಗಿದೆ. ಲಿಂಬಾವಳಿ ಸೇರಿದಂತೆ ಇನ್ನೂ ಐವರು ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದಡಿ ಅರವಿಂದ ಲಿಂಬಾವಳಿ ವಿರುದ್ಧ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಮ್ಮದೇ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರದೀಪ್ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಬಿಜೆಪಿ ಶಾಸಕ ಹಾಗೂ ಅವರ ಬೆಂಬಗಲಿಗರು ತಮ್ಮನ್ನು ಬ್ಲಾಕ್‌ಮೇಲ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಕೋಟ್ಯಂತರ ಹಣವನ್ನು ಬಿಜೆಪಿ ಶಾಸಕರು ಹಾಗೂ ಬೆಂಬಲಿಗರು ತಮ್ಮಿಂದ ಕಬಳಿಸಿ, ತಿರುಗಿ ಕೊಡಲಿಲ್ಲ ಎಂದು ಪ್ರದೀಪ್ ಆರೋಪಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಪಾರದರ್ಶನಕವಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆದರೆ, ಪ್ರದೀಪ್ ಸಾವಿಗೆ ವಿಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯನ್ನು ತಕ್ಷಣವೇ ಬಂಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇಂದು ಬೆಳಿಗ್ಗೆ ಕಾಂಗ್ರೆಸ್ ಪಕ್ಷದ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ಅವರು ಪ್ರದೀಪ್ ಮನೆಗೆ ಭೇಟಿ ನೀಡಿದರು. ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.
ಈ ಕುರಿತು ವಿಡಿಯೊವೊಂದನ್ನು ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ @RLR_BTM ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು. pic.twitter.com/wMalfFvYey
— Siddaramaiah (@siddaramaiah) January 3, 2023
'ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು' ಎಂದು ಟ್ವೀಟ್ ಮಾಡಿದ್ದಾರೆ.
ಪ್ರದೀಪ್ ಕುಟುಂಬಸ್ಥರು ರೋಧಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications