ಸರ್ಕಾರಿ ನೌಕರರ ಮುಷ್ಕರ; ಬೆಂಗಳೂರಲ್ಲಿ ಕಾವೇರಿ ನೀರು ಪೂರೈಕೆ ಮಾಹಿತಿ
ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. ಮುಷ್ಕರದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಕಾವೇರಿ ನೀರಿನ ಪೂರೈಕೆಯ ಮಾಹಿತಿ ಇಲ್ಲಿದೆ.
ಬೆಂಗಳೂರು, ಫೆಬ್ರವರಿ 28; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿಗೆ ಸಹ ಸರ್ಕಾರಿ ನೌಕರರು ಸ್ಪಂದಿಸಿಲ್ಲ. ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರ ಬುಧವಾರದಿಂದ ಉದ್ಯೋಗಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. ಇದರಿಂದಾಗಿ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ನಡೆಯದೇ ಜನರು ಪರದಾಟ ನಡೆಸುವ ಸಾಧ್ಯತೆ ಇದೆ.
ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ವಿವಿಧ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಆದರೆ ಬೆಂಗಳೂರು ನಗರದಲ್ಲಿ ಕಾವೇರಿ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದಿಲ್ಲ ಎಂದು ಬೆಂಗಳೂರು ಜಲಮಂಡಳಿ ಹೇಳಿದೆ. ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ಮಂಗಳವಾರ ಹೇಳಿದ್ದಾರೆ.

ಬೆಂಗಳೂರು ಜಲ ಮಂಡಳಿ ಎಲ್ಲಾ ನೌಕರರು ಮಾರ್ಚ್ 1ರ ಬುಧವಾರ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಈಗಾಗಲೇ ಸೂಚನೆ ನೀಡಿದೆ. ಜಲಮಂಡಳಿ ನೌಕರರು ಮುಷ್ಕರಕ್ಕೆ ನೈತಿಕ ಬೆಂಬಲ ನೀಡಲಿದ್ದು, ಬುಧವಾರ ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಆದ್ದರಿಂದ ಬೆಂಗಳೂರು ನಗರದಲ್ಲಿ ನೀರು ಪೂರೈಕೆ ಎಂದಿನಂತೆ ಇರಲಿದೆ. ಜಲಮಂಡಳಿ ಮುಖ್ಯ ಇಂಜಿನಿಯರ್ ಸುರೇಶ್ ಮಾತನಾಡಿ, ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯ ಕಾರ್ಯದರ್ಶಿಗೆ ಪತ್ರ; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. ಉದ್ಯೋಗಕ್ಕೆ ಗೈರು ಹಾಜರಾಗಿ ಮುಷ್ಕರ ನಡೆಸುತ್ತೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಬರೆದಿರುವ ಪತ್ರದಲ್ಲಿ ವಿವರಣೆ ನೀಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ-ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಸರ್ಕಾರಿ ನೌಕರರು ಮಾರ್ಚ್ 1ರ ಬುಧವಾರದಿಂದ ಉದ್ಯೋಗಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದು ಬೇಡ. ಉದ್ಯೋಗಿಗಳು ತಾಳ್ಮೆಯಿಂದ ಇರಬೇಕು. ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಅಗತ್ಯವಿರುವ ಹಣ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಮುಷ್ಕರ ನಡೆಸಬಾರದು" ಎಂದು ಈಗಾಗಲೇ ಕರೆ ನೀಡಿದ್ದಾರೆ.
ನೌಕರರ ಬೇಡಿಕೆಗಳು; ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 01/07/2022ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ. 40 ಫಿಟ್‌ಮೆಂಟ್ ಸೌಲಭ್ಯವನ್ನು ದಿನಾಂಕ 01/07/2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.
ರಾಜ್ಯದ ಎನ್. ಪಿ. ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್. ಪಿ. ಎಸ್. ನೌಕರರನ್ನು ಓ. ಪಿ. ಎಸ್. ವ್ಯಾಪ್ತಿಗೆ ತರುವುದು. ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸುವುದು.












Click it and Unblock the Notifications