ಪ್ರಧಾನಿ ಸಂಚರಿಸುವ ಹಾದಿಯಲ್ಲೇ ಸ್ಫೋಟಕ ಪತ್ತೆ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ
ಬೆಂಗಳೂರು: ದೇಶದ ಪ್ರಧಾನಮಂತ್ರಿಗಳು ಸಂಚರಿಸುವ ಹಾದಿಯಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರವಾಗಿ ಖಂಡಿಸಿದ್ದಾರೆ. ಇದು ರಾಜ್ಯದ ಕಾಂಗ್ರೆಸ್ ಸರ್ಕಾರದ ಗಂಭೀರ ಭದ್ರತಾ ಲೋಪ ಮತ್ತು ಅಕ್ಷಮ್ಯ ವೈಫಲ್ಯ ಎಂದು ಅವರು ಟೀಕಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕುಸಿತ
ಕಾಂಗ್ರೆಸ್ ಆಳ್ವಿಕೆಯಲ್ಲಿ ರಾಜ್ಯದ, ಅದರಲ್ಲೂ ಮುಖ್ಯವಾಗಿ ರಾಜಧಾನಿ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆ ಸಂಪೂರ್ಣವಾಗಿ ಕುಸಿದಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ದೇಶದ ಪ್ರಧಾನಮಂತ್ರಿಗಳ ನಿಗದಿತ ಸಂಚಾರದ ರಸ್ತೆಯಲ್ಲೇ ಸ್ಫೋಟಕಗಳು ಪತ್ತೆಯಾಗಿರುವುದು ಸರ್ಕಾರದ ಭದ್ರತಾ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ತನಿಖೆಗೆ ಆಗ್ರಹ
ಈ ಸೂಕ್ಷ್ಮ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಶೀಘ್ರವಾಗಿ ಕೂಲಂಕುಶ ತನಿಖೆ ನಡೆಸಿ, ಈ ಕೃತ್ಯದ ಹಿಂದಿರುವ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಶಿಕ್ಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪ್ರಧಾನಿಗಳ ಸುರಕ್ಷತೆಯ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ರಾಮನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಒಬ್ಬ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಆದರೂ, ಈ ಘಟನೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರದ ಆರ್ಟ್ ಆಫ್ ಲಿವಿಂಗ್ ಕೇಂದ್ರಕ್ಕೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಸ್ಫೋಟಕಗಳು ಪತ್ತೆಯಾಗಿರುವುದು ಭಾರಿ ಸಂಚಲನ ಮೂಡಿಸಿದೆ. ಈ ಭದ್ರತಾ ಲೋಪದ ಬೆನ್ನಲ್ಲೇ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಒಬ್ಬ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.
ಆರ್ಟ್ ಆಫ್ ಲಿವಿಂಗ್ ಫೌಂಡೇಶನ್‌ನ 45ನೇ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ಆಗಮಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ನಡೆಸುತ್ತಿದ್ದ ಕಡ್ಡಾಯ ಮುನ್ನೆಚ್ಚರಿಕಾ ತಪಾಸಣೆ ವೇಳೆ, ಕಾರ್ಯಕ್ರಮದ ಮುಖ್ಯ ಸ್ಥಳದಿಂದ ಕೇವಲ 3 ಕಿಲೋಮೀಟರ್ ದೂರದಲ್ಲಿರುವ ಫುಟ್‌ಪಾತ್ ಬದಿಯಲ್ಲಿ ಒಂದು ಪ್ಯಾಕೆಟ್ ಪತ್ತೆಯಾಗಿದೆ. ಅದನ್ನು ಪರಿಶೀಲಿಸಿದಾಗ ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳಿರುವುದು ಪತ್ತೆಯಾಗಿ ಭದ್ರತಾ ಏಜೆನ್ಸಿಗಳಲ್ಲಿ ನಡುಕ ಹುಟ್ಟಿಸಿತ್ತು. ಈ ಸ್ಫೋಟಕ ಭೀತಿಯ ನಡುವೆಯೂ ಪ್ರಧಾನಿಯವರ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆಗಳಾಗಲಿಲ್ಲ. ನಿಗದಿತ ಸಮಯದಂತೆ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ನಗರ ಹಾಗೂ ರಾಮನಗರ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದರು. ಖಚಿತ ಮಾಹಿತಿಯ ಮೇರೆಗೆ ಕೋರಮಂಗಲದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಅಲ್ಲಿ ಅಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಶಂಕಿತನನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಸ್ಫೋಟಕಗಳನ್ನು ಇಟ್ಟಿದ್ದರ ಹಿಂದಿನ ಉದ್ದೇಶವನ್ನ ಪತ್ತೆಹಚ್ಚಲಾಗುತ್ತಿದೆ. ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಟವರ್ ಡೇಟಾಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.













Click it and Unblock the Notifications