ಕರ್ನಾಟಕದ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ
ಬೆಂಗಳೂರು, ಮೇ 31 : "ಕರ್ನಾಟಕದ ಜನರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿರುವುದು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೆ ಒಟ್ಟಾಗಿ ಕೆಲಸ ಮಾಡುತ್ತೇವೆ" ಎಂದು ನೂತನ ಕೇಂದ್ರ ಸಚಿವರು ಕರ್ನಾಟಕ ಜನರಿಗೆ ಭರವಸೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ನಾಲ್ವರು ಸಚಿವರಿಗೆ ಶುಕ್ರವಾರ ಅದ್ದೂರಿ ಸ್ವಾಗತ ದೊರೆಯಿತು. ವಿಮಾನ ನಿಲ್ದಾಣದಿಂದ ಅರಮನೆ ಮೈದಾನದ ತನಕ ಸಚಿವರ ಮೆರವಣಿಗೆ ಮಾಡುವ ಮೂಲಕ ನೂತನ ಸಚಿವರನ್ನು ಸ್ವಾಗತಿಸಿದರು.[ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ?]
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿದ ರೈಲ್ವೆ ಸಚಿವ ಡಿ.ವಿ.ಸದಾನಂದಗೌಡ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್, ನಾಗರಿಕ ವಿಮಾನಯಾನ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ್ ಮತ್ತು ರಾಜ್ಯ ರಾಜ್ಯಸಭೆಗೆ ಆಯ್ಕೆಯಾಗಿರುವ ನಗರಾಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯನಾಯ್ಡು ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು.

ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇವೆ
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ ಎಲ್ಲಾ ನೂತನ ಕೇಂದ್ರ ಸಚಿವರು, ಕರ್ನಾಟಕದ ಜನರು ಬಿಜೆಪಿಯ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದ್ದೀರಿ. ರಾಜ್ಯಸ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೆ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಹಣೆಪಟ್ಟಿ ಕಳಚಲು ಪ್ರಯತ್ನಿಸುವೆ
ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಡಿವಿ ಸದಾನಂದ ಗೌಡ, ರೈಲ್ವೆ ಸೌಲಭ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದಿದೆ ಎಂಬ ಹಣೆಪಟ್ಟಿ ಕಳಚಲು ಶಕ್ತಿ ಮೀರಿ ಪ್ರಯತ್ನಿಸುವೆ. ಬಾಕಿ ಹಾಗೂ ಹೊಸ ಯೋಜನೆಗಳ ಜಾರಿಗೂ ಗಮನ ಹರಿಸಲಾಗುವುದು ಎಂದು ಹೇಳಿದರು.

ಜನ ಔಷಧ ಅಭಿಯಾನ ಆರಂಭಿಸಲಿದ್ದೇವೆ
ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್, ಬಡವರಿಗೆ ಕಡಿಮೆ ದರದಲ್ಲಿ ಅತ್ಯಾವಶ್ಯಕ ಹಾಗೂ ಜೀವ ರಕ್ಷಕ ಔಷಧ ವಿತರಿಸಲು 'ಜನ ಔಷಧ ಅಭಿಯಾನ' ಆರಂಭಿಸುವುದಾಗಿ ತಿಳಿಸಿದರು. ಜನರಿಕ್ ಗುಂಪಿಗೆ ಸೇರಿದ 500 ಔಷಧಗಳನ್ನು ಗುರುತಿಸಿದ್ದು, ಅವುಗಳನ್ನು ಶೇ.40ರಷ್ಟು ಕಡಿಮೆ ದರದಲ್ಲಿ ರೋಗಿಗಳಿಗೆ ವಿತರಿಸಲಾಗುವುದು ಎಂದರು.

ಪಕ್ಷ ಸಂಘಟನೆಗೆ ಕರೆ
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನಾಯಕರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳ್ಳಲಿದ್ದು, ಅವಧಿಗೂ ಮುನ್ನವೇ ವಿಧಾನಸಭಾ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಮುಖಂಡರೊಂದಿಗೆ ಸೇರಿ ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ನಿಮ್ಮ ಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ
ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಕಾರ್ಯಕರ್ತರ ಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಕಾರ್ಯಕರ್ತರು ವೈಯಕ್ತಿಕ ಆಸೆ ಪೂರೈಕೆ ಬದಲು ತಮ್ಮ ಮತಕ್ಷೇತ್ರಗಳಿಗೆ ಹೆಚ್ಚಿನ ಲಾಭ ಮಾಡಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 136 ವಿಧಾನಸಭೆ ಕ್ಷೇತ್ರಗಳಲ್ಲಿ ಮುನ್ನಡೆ ದೊರೆತಿದೆ. ತಕ್ಷಣವೇ ವಿಧಾನಸಭೆಗೆ ಚುನಾವಣೆ ನಡೆದರೆ ಪಕ್ಷಕ್ಕೆ ಅಧಿಕಾರ ಬರುವುದು ನಿಶ್ಚಿತ. ಮುಂದಿನ 2-3 ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.

ಯಾವ ನಾಯಕರು ಭಾಗವಹಿಸಿದ್ದರು
ಸಮಾರಂಭದಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯ ಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸೇರಿದಂತೆ ಹಲವಾರು ನಾಯಕರು ಪಾಲ್ಗೊಂಡಿದ್ದರು.












Click it and Unblock the Notifications