M.Chinnaswamy Stampede: ಕಾಲ್ತುಳಿತ ಸಂಬಂಧ ಬಂಧಿತರಾದವರಿಗೆ ಷರತ್ತುಬದ್ಧ ಜಾಮೀನು ಮಂಜೂರು
M.Chinnaswamy Stadium Stampede: ಆರ್‌ಸಿಬಿಯು ಐಪಿಎಲ್ 2025 ಟ್ರೋಫಿ ಗೆದ್ದ ಹಿನ್ನೆಲೆ ಬೆಂಗಳೂರಿನಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು. ಈ ಸಂಬಂಧ ಬಂಧನಕ್ಕೊಳಗಾಗಿದ್ದ ಆರ್‌ಸಿಬಿ ಫ್ರಾಂಚೈಸಿಯ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಮತ್ತು ಡಿಎನ್‌ಎ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಸುನೀಲ್ ಮ್ಯಾಥ್ಯೂಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕಾಲ್ತುಳಿತ ಪ್ರಕರಣದಲ್ಲಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜೂನ್ 12) ವಿಚಾರಣೆ ನಡೆಸಿದ ನ್ಯಾ.ಕೃಷ್ಣಕುಮಾರ್ ಅವರಿದ್ದ ಪೀಠ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್, ಶಮಂತ್ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ, ದೇಶ ಬಿಟ್ಟು ಹೋಗದಂತೆ ಷರತ್ತು ವಿಧಿಸಿದೆ. ಅರ್ಜಿದಾರರ ಪರ ವಕೀಲ ಸಂದೇಶ್ ಚೌಟ ವಾದ ಮಂಡನೆ ಮಾಡಿದರು.

ಕರ್ನಾಟಕ ಹೈಕೋರ್ಟ್‌ನಲ್ಲಿ ಪತಿ ನಿಖಿಲ್ ಸೋಸಲೆ ಬಂಧನ ಪ್ರಶ್ನಿಸಿ ಪತ್ನಿ ಮಾಳವಿಕಾ ನಾಯ್ಕ್ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಎಜಿ ಶಶಿಕಿರಣ್ ಶೆಟ್ಟಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಚಾರಣೆ ವೇಳೆ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರೇ ನೇರ ಹೊಣೆ. ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ ವಿಕ್ಟರಿ ಪರೇಡ್, ಉಚಿತ ಪಾಸ್ ಎಂದು ಹೇಳಿಕೊಂಡಿತ್ತು. ಈ ಹಿನ್ನೆಲೆ ಲಕ್ಷಾಂತರ ಜನ ಸೇರಿದ್ದರು ಎಂದು ವಾದ ಮಂಡನೆ ಮಾಡಿದ್ದರು.
ಈ ವೇಳೆ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಇಂದಿಗೆ ಆದೇಶ ಕಾಯ್ದಿರಿಸಿದ್ದು, ಕೊನೆಗೂ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿ ಆರ್‌ಸಿಬಿ ಮತ್ತು ಡಿಎನ್ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪದಾಧಿಕಾರಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಪರ ಅವರ ಪತ್ನಿ ಮಾಳವಿಕಾ ನಾಯಕ್, ಡಿಎನ್ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಡೆಟ್ ಕಂಪನಿ ನಿರ್ದೇಶಕ ಆರ್ ಸುನೀಲ್ ಮ್ಯಾಥ್ಯೂ ಪರವಾಗಿ ಅವರ ಪತ್ನಿ ರೋಷನಿ ಸುನೀಲ್, ಎಸ್ ಕಿರಣ್ ಕುಮಾರ್ ಪರವಾಗಿ ಅವರ ಪತ್ನಿ ಕೆ ನಂದಿನಿ ಮತ್ತು ಶಮಂತ್ ಎನ್‌ಪಿ ಮಾವಿನಕೆರೆ ಅವರ ತಾಯಿ ನಿರ್ಮಲಾ ರಿಟ್ ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದರು.












Click it and Unblock the Notifications