Cleanliness Drive: ಬೆಂಗಳೂರಲ್ಲಿ ದೇವಾಲಯ - ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗೆ ಮುಂದಾದ ಜಿಬಿಎ!
ಬೆಂಗಳೂರಲ್ಲಿ ದೇವಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.
22 ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ, 344 ಕೆ.ಜಿ. ತ್ಯಾಜ್ಯ ತೆರವು, 172 ಪೌರಕಾರ್ಮಿಕರು ಹಾಗೂ 56 ಸ್ವಚ್ಛತಾ ಸಿಬ್ಬಂದಿ ಭಾಗಿಯಾಗಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಂಪೂರ್ಣ ಮಾಹಿತಿ ಇಲ್ಲಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ - ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯಮುಕ್ತ ಹಾಗೂ ಸುಂದರ ನಗರವನ್ನಾಗಿ ರೂಪಿಸುವುದು ಮತ್ತು ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸುವ ಉದ್ದೇಶದಿಂದ ಕೇಂದ್ರ ನಗರ ಪಾಲಿಕೆಯ ವತಿಯಿಂದ 4ನೇ ಹಂತದ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಭೇಟಿ ನೀಡುವುದರಿಂದ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು ಹಾಗೂ ಈಗಾಗಲೇ ರೂಪಿಸಿರುವ ಸ್ವಚ್ಛತಾ ಕಾರ್ಯ ವೇಳಾಪಟ್ಟಿಯಂತೆ (ಆ್ಯಕ್ಷನ್ ಪ್ಲಾನ್) ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 5 ವಿಭಾಗಗಳಲ್ಲಿನ ದೇವಾಲಯಗಳ ಸುತ್ತಮುತ್ತ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ. ಅವರು ತಿಳಿಸಿದ್ದಾರೆ.
22 ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಸುಮಾರು 344 ಕೆ.ಜಿ. ತ್ಯಾಜ್ಯ ತೆರವು
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಾಂತಿನಗರ, ಸಿ.ವಿ. ರಾಮನ್ ನಗರ, ಶಿವಾಜಿನಗರ, ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ಸೇರಿದಂತೆ ಆರು ವಿಭಾಗಗಳಲ್ಲಿನ ಒಟ್ಟು 22 ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಸ್ವಚ್ಛ ಹಾಗೂ ಉತ್ತಮ ಪರಿಸರ ಕಲ್ಪಿಸುವ ಉದ್ದೇಶದಿಂದ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸಮಗ್ರವಾಗಿ ಸ್ವಚ್ಛಗೊಳಿಸಿ, ಸಾರ್ವಜನಿಕರ ಬಳಕೆಗೆ ಮತ್ತಷ್ಟು ಅನುಕೂಲಕರವಾಗುವಂತೆ ಕ್ರಮ ಕೈಗೊಳ್ಳಲಾಗಿದ್ದು, ಸುಮಾರು 344 ಕೆ.ಜಿ. ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಭಾಗವಾರು ಸ್ವಚ್ಛತಾ ಕಾರ್ಯ ಕೈಗೊಂಡಿರುವ ವಿವರ :
1. ಶಾಂತಿನಗರ ವಿಭಾಗ ವ್ಯಾಪ್ತಿಯಲ್ಲಿ - 6
2. ಸಿ.ವಿ. ರಾಮನ್ ನಗರ ವಿಭಾಗ ವ್ಯಾಪ್ತಿಯಲ್ಲಿ - 4
3. ಶಿವಾಜಿನಗರ ವಿಭಾಗ ವ್ಯಾಪ್ತಿಯಲ್ಲಿ - 5
4. ಚಾಮರಾಜಪೇಟೆ ವಿಭಾಗ ವ್ಯಾಪ್ತಿಯಲ್ಲಿ - 6
5. ಚಿಕ್ಕಪೇಟೆ ವಿಭಾಗ ವ್ಯಾಪ್ತಿಯಲ್ಲಿ - 1
ಒಟ್ಟು - 22 ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ
ಸ್ವಚ್ಛತಾ ಕಾರ್ಯಾಚರಣೆಯಲ್ಲಿ 172 ಪೌರಕಾರ್ಮಿಕರು ಭಾಗಿ
ಈ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಸುಮಾರು 172 ಪೌರಕಾರ್ಮಿಕರು ಹಾಗೂ 56 ಸ್ವಚ್ಛತಾ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಗೊಳಿಸಿದ್ದಾರೆ. ದೇವಾಲಯಗಳಿಗೆ ಭೇಟಿ ನೀಡುವ ಭಕ್ತಾದಿಗಳಿಗೆ ಸ್ವಚ್ಛ, ಶುಚಿತ್ವಯುತ ಹಾಗೂ ಉತ್ತಮ ಪರಿಸರ ಕಲ್ಪಿಸುವ ಉದ್ದೇಶದಿಂದ ನಗರದ ಧಾರ್ಮಿಕ ಸ್ಥಳಗಳ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದೆ.
ನಗರದ ಧಾರ್ಮಿಕ ಸ್ಥಳಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಕಾಪಾಡುವುದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಪ್ರಮುಖ ಆದ್ಯತೆಯಾಗಿದ್ದು, ಸ್ವಚ್ಛ ಸರ್ವೇಕ್ಷಣ 2025-26ರಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಇಂತಹ ವಿಶೇಷ ಸ್ವಚ್ಛತಾ ಕಾರ್ಯಾಚರಣೆಗಳನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ. ಅವರು ತಿಳಿಸಿದ್ದಾರೆ.
Cleanliness Drive: ತ್ಯಾಜ್ಯ ವಿಂಗಡಣೆ ಹಾಗೂ ಸಮಗ್ರ ಸ್ವಚ್ಛತಾ ಕಾರ್ಯಾಚರಣೆ
ಸ್ವಚ್ಛತಾ ಕಾರ್ಯಾಚರಣೆಯ ವೇಳೆ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಪೂಜಾ ಸಾಮಗ್ರಿಗಳ ಅವಶೇಷಗಳು, ಹೂವುಗಳು, ಆಹಾರ ತ್ಯಾಜ್ಯ, ಕಾಗದ, ನೀರಿನ ಬಾಟಲಿಗಳು, ಒಣ ಎಲೆಗಳು ಹಾಗೂ ಇತರೆ ಘನ ತ್ಯಾಜ್ಯವನ್ನು ಸಂಗ್ರಹಿಸಿ, ಒಣ ಮತ್ತು ಹಸಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಣೆ (Segregation) ಮಾಡಲಾಗಿದೆ.
ಬಳಿಕ ವಿಂಗಡಿಸಲಾದ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಸಂಬಂಧಿಸಿದ ಘಟಕಗಳಿಗೆ ರವಾನಿಸಲಾಯಿತು. ಈ ಕಾರ್ಯಾಚರಣೆಯ ಮೂಲಕ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛ ಹಾಗೂ ಸುಂದರಗೊಳಿಸುವುದರೊಂದಿಗೆ, ಭಕ್ತರು ಹಾಗೂ ಸಾರ್ವಜನಿಕರು ಸುರಕ್ಷಿತ, ಆರೋಗ್ಯಕರ ಮತ್ತು ಶುಚಿತ್ವಯುತ ವಾತಾವರಣದಲ್ಲಿ ದೇವಾಲಯಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.


Click it and Unblock the Notifications
