ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಆತಂಕದ ಮಧ್ಯೆ ಮೆಟ್ರೊ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

|
Google Oneindia Kannada News

ಬೆಂಗಳೂರು, ಮೇ 25: ಕೊರೊನಾ ಆತಂಕದ ಮಧ್ಯೆ ಮೆಟ್ರೋ ಪ್ರಯಾಣಿಕರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದಾರೆ. ನಮ್ಮ ಮೆಟ್ರೊ 2ನೇ ಹಂತದ ರೀಚ್ 2 ಮೈಸೂರು ರಸ್ತೆ ವಿಸ್ತರಿತ ಮೆಟ್ರೋ ಮಾರ್ಗವನ್ನು ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದು, ನೂತನ ಮೆಟ್ರೋ ಮಾರ್ಗದ ಕುರಿತು ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇದೇ ಜುಲೈನಲ್ಲಿ ಈ ಮೆಟ್ರೋ ಮಾರ್ಗ ಆರಂಭವಾಗುವುದಾಗಿ ತಿಳಿಸಿದ್ದಾರೆ.

Recommended Video

Namma Metro ಮಾರ್ಗದ ಮಾಹಿತಿ ಕೊಟ್ಟ ಮುಖ್ಯಮಂತ್ರಿ BSY | Oneindia Kannada

ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಸಂಚರಿಸಿ ಮೆಟ್ರೋ ಮಾರ್ಗ, ನಿಲ್ದಾಣಗಳಲ್ಲಿನ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, "ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ರೀಚ್ 2ರ ವಿಸ್ತರಣಾ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪೂರ್ವಭಾವಿಯಾಗಿ ನಾನು ಇಂದು ಈ ಮಾರ್ಗದ ಪರಿವೀಕ್ಷಣೆ ನಡೆಸಿದ್ದೇನೆ. ಜುಲೈನಲ್ಲಿ ಪೂರ್ವ-ಪಶ್ಚಿಮ ಕಾರಿಡಾರ್‌ನ ಈ ನೂತನ ನೇರಳೆ ಮಾರ್ಗ ಪ್ರಯಾಣಿಕರಿಗೆ ಮುಕ್ತವಾಗಲಿದೆ" ಎಂದು ಹೇಳಿದ್ದಾರೆ.

ಸಚಿವರಾದ ವಿ. ಸೋಮಣ್ಣ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಶಾಸಕ ಎಸ್. ಮುನಿರತ್ನ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ನಮ್ಮ ಮೆಟ್ರೊ ರೈಲು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್ ಅವರು ಉಪಸ್ಥಿತರಿದ್ದರು. ಮುಂದೆ ಓದಿ...

 ವಿಸ್ತರಣೆ ಕಾಮಗಾರಿಗೆ 1,560 ಕೋಟಿ ರೂ. ವೆಚ್ಚ

ವಿಸ್ತರಣೆ ಕಾಮಗಾರಿಗೆ 1,560 ಕೋಟಿ ರೂ. ವೆಚ್ಚ

ಒಟ್ಟು 7.53 ಕಿ.ಮೀ. ಉದ್ದದ ಈ ವಿಸ್ತರಣೆ ಕಾಮಗಾರಿಗೆ 1,560 ಕೋಟಿ ರೂ. ವೆಚ್ಚ ತಗುಲಿದೆ. ಭೂ-ಸ್ವಾಧೀನಕ್ಕೆ 360 ಕೋಟಿ ರೂ. ವೆಚ್ಚವಾಗಿದೆ. ಇದರಿಂದಾಗಿ ಪೂರ್ವ-ಪಶ್ಚಿಮ ಕಾರಿಡಾರ್ ಮಾರ್ಗದ ಉದ್ದ 18.1 ಕಿ.ಮೀ. ಗೆ ಹೆಚ್ಚಳವಾಗಿದೆ. ಇದರಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್-ಟರ್ಮಿನಲ್ ಹಾಗೂ ಕೆಂಗೇರಿ - ಒಟ್ಟು 6 ನಿಲ್ದಾಣಗಳಿವೆ. ಇದರಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ನಿಲ್ದಾಣಗಳಲ್ಲಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಕೆಂಗೇರಿ ಬಸ್-ಟರ್ಮಿನಲ್ ನಿಲ್ದಾಣದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕೆಂಗೇರಿವರೆಗೆ ನಮ್ಮ ಮೆಟ್ರೋ ಸಂಚಾರ ಯಾವಾಗ, ದರ ಎಷ್ಟು?, ನಿಲ್ದಾಣಗಳ ಮಾಹಿತಿಕೆಂಗೇರಿವರೆಗೆ ನಮ್ಮ ಮೆಟ್ರೋ ಸಂಚಾರ ಯಾವಾಗ, ದರ ಎಷ್ಟು?, ನಿಲ್ದಾಣಗಳ ಮಾಹಿತಿ

"ಪ್ರತಿದಿನ 75 ಸಾವಿರ ಪ್ರಯಾಣಿಕರಿಗೆ ಅನುಕೂಲ"

ಕೆಂಗೇರಿ ಬಸ್-ಟರ್ಮಿನಲ್ ನಿಲ್ದಾಣ ಹೊರತುಪಡಿಸಿ ಉಳಿದ ಎಲ್ಲಾ ನಿಲ್ದಾಣಗಳನ್ನು ರಸ್ತೆ ದಾಟಲು ಪಾದಚಾರಿಗಳು ಬಳಸಬಹುದಾಗಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ಪ್ರಯಾಣಿಸಲು 56 ರೂ. ದರ ನಿಗದಿಪಡಿಸಲಾಗಿದೆ. ಮೆಟ್ರೋ ಜಾಲದ ಅತಿ ಉದ್ದದ ಮಾರ್ಗ, ಕೆಂಗೇರಿಯಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್‌ವರೆಗೆ 60 ರೂಪಾಯಿ ದರ ನಿಗದಿಪಡಿಸಲಾಗಿದೆ. ಈ ವಿಸ್ತರಣೆಯ ಕಾರ್ಯಾಚರಣೆಯಿಂದ ಪ್ರತಿದಿನ ಸರಾಸರಿ 75,000 ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

"ಒನ್ ನೇಷನ್ ಒನ್ ಕಾರ್ಡ್ ಯೋಜನೆಗೆ ತಕ್ಕ ವ್ಯವಸ್ಥೆ"

ಈ ಮಾರ್ಗದಲ್ಲಿ ಒನ್-ನೇಷನ್-ಒನ್-ಕಾರ್ಡ್ ಯೋಜನೆಯ ಅನುಷ್ಠಾನಕ್ಕೆ ಪೂರಕವಾಗಿ ಆಟೊಮ್ಯಾಟಿಕ್ ಫೇರ್ ಕಲೆಕ್ಷನ್ ವ್ಯವಸ್ಥೆ ಅಳವಡಿಸಲಾಗಿದೆ. ರೈಲಿನ ಪರೀಕ್ಷಾರ್ಥ ಓಡಾಟವೂ ಪೂರ್ಣವಾಗಿದೆ. ಪ್ರತಿ ನಿಲ್ದಾಣದ ಚಾವಣಿಯಲ್ಲಿ 250 ಕಿಲೋ ವ್ಯಾಟ್ ಸೌರವಿದ್ಯುತ್ ಪ್ಯಾನೆಲ್ ಅಳವಡಿಸಲು ಅವಕಾಶ ಕಲ್ಪಿಸಲಾಗಿದೆ. ಕೆಂಗೇರಿಯಿಂದ ಚಲ್ಲಘಟ್ಟವರೆಗಿನ ವಿಸ್ತರಣೆ ಕಾಮಗಾರಿಯೂ ಪ್ರಗತಿಯಲ್ಲಿದೆ. ಮಾರ್ಚ್-2022ರ ಅಂತ್ಯದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಭರವಸೆ ವ್ಯಕ್ತಪಡಿಸಿದರು.

"ನಮ್ಮ ಮೆಟ್ರೋ ಬೆಂಗಳೂರಿಗೆ ವರದಾನ"

ಬೆಂಗಳೂರು ನಗರದ ಸಂಚಾರ ವ್ಯವಸ್ಥೆ ಸುಗಮಗೊಳ್ಳಲು ಹಾಗೂ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸುಲಭವಾಗಿ ಸಂಚರಿಸಲು ನಮ್ಮ ಮೆಟ್ರೋ ರೈಲು ವರದಾನವಾಗಲಿದೆ. ಈ ಯೋಜನೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ನಮ್ಮ ಸರ್ಕಾರ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ. ಇದೀಗ ಕೇಂದ್ರ ಸರ್ಕಾರವು ಹಂತ-2ರ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದವರೆಗೂ ನಮ್ಮ ಮೆಟ್ರೋ ರೈಲು ಮಾರ್ಗ ನಿರ್ಮಾಣವಾಗಲಿದೆ. ಪ್ರಯಾಣಿಕರ ಅನುಕೂಲ ಹಾಗೂ ಸಮಯದ ಉಳಿತಾಯವಾಗುವುದರೊಂದಿಗೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಬಳಕೆಗೆ ಉತ್ತೇಜನ ನೀಡಲು ಸಹ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

English summary
CM BS Yediyurappa on tuesday inspected Namma metro phase 2 reach 2 extension nayandahalli to kengeri line
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X