Namma Metro: ಮೆಟ್ರೋ ದರ ಏರಿಕೆಗೆ ಅಸಲಿ ಕಾರಣ ಕೊಟ್ಟ ಸಿಎಂ ಸಿದ್ದರಾಮಯ್ಯ, ಏನದು?

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ದಿಢೀರ್‌ ಏರಿಕೆ ಮಾಡಿರುವುದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಕೂಡ ಇದೇ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇನ್ನು ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ, ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ. ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.ಆದರೆ, ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

CM Siddaramaiah Clarifies On Namma Metro Fare Hike In Bengaluru

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮ ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ ಎಂದು ವಿವರಿಸಿದ್ದಾರೆ.

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರಡಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದಿದ್ದಾರೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ, ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ.

CM Siddaramaiah Clarifies On Namma Metro Fare Hike In Bengaluru

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್.ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು. ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿಗೆ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಪತ್ರದಲ್ಲಿ ತಿಳಿಸಿತ್ತು. ಮೂರು ತಿಂಗಳ ಅವಧಿಯಲ್ಲಿ ದರ ಪರಿಷ್ಕರಣ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ, ದೆಹಲಿ ಮತ್ತು ಚನ್ನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು ಎಂದು ವಿವರಿಸಿದ್ದಾರೆ.

2017ರ ಜೂನ್‌ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣ ದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್‌ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಂಬರ್ 16ರಂದು ಸಮಿತಿ ತನ್ನ ವರದಿ ಸಲ್ಲಿಸಿತ್ತು ಎಂದಿದ್ದಾರೆ.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶಃ ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್‌ಗೆ ವಿಸ್ತರಣೆಯಾಗಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ ಎಂದಿದ್ದಾರೆ.

ಮುಂಬೈಗೆ ಹೋಲಿಸಿದರೆ ಕಡಿಮೆ: ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ 10 ರೂಪಾಯಿ ಮತ್ತು ಗರಿಷ್ಠ 60 ರೂಪಾಯಿ ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣ ದರವು 10 ರೂಪಾಯಿ ಮತ್ತು ಗರಿಷ್ಠ ಪ್ರಯಾಣ ದರ 80 ರೂಪಾಯಿ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೆಹಲಿ ಮೆಟ್ರೋ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣ ದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಬಿಎಂಆರ್‌ಸಿಎಲ್ ಸೇರಿದಂತೆ ಎಲ್ಲ ಮೆಟ್ರೋ ರೈಲು ನಿಗಮಗಳು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+