Breaking News: ನಮ್ಮ ಮೆಟ್ರೋ ದರ ಕಡಿತಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಫೆಬ್ರವರಿ 13: ಬೆಂಗಳೂರು ನಗರದ ಜೀವನಾಡಿಯಾದ ನಮ್ಮ ಮೆಟ್ರೋ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ಸಹ ನಡೆಯುತ್ತಿದೆ. ಜನರ ವಿರೋಧದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಧ್ಯ ಪ್ರವೇಶ ಮಾಡಿದ್ದು. ಬಿಎಂಆರ್‌ಸಿಎಲ್‌ಗೆ ಮಹತ್ವದ ಸೂಚನೆ ನೀಡಲಾಗಿದೆ.
ಬೆಂಗಳೂರು ಜನರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿದಿದ್ದು ನಮ್ಮ ಮೆಟ್ರೋ ದರ ಕಡಿತಗೊಳಿಸಲು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಗುರುವಾರ ಹೊರಬಿದ್ದಿದೆ. ಆದರೆ ಬಿಎಂಆರ್‌ಸಿಎಲ್ ಯಾವಾಗ ದರ ಕಡಿತ ಮಾಡಲಿದೆ? ಎಂಬುದು ಇನ್ನೂ ಖಚಿತವಾಗಿಲ್ಲ.

ನಮ್ಮ ಮೆಟ್ರೋ ಪ್ರಯಾಣ ದರ ಕಡಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್)ಕ್ಕೆ ಸೂಚನೆ ನೀಡಿದ್ದಾರೆ. ಎಷ್ಟು ದರ ಕಡಿತ ಮಾಡಲಾಗುತ್ತದೆ ಎಂಬುದು ಇನ್ನೂ ಅಂತಿಮವಾಗಿಲ್ಲ.
ಸಿದ್ದರಾಮಯ್ಯ ಪೋಸ್ಟ್: ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, 'ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ' ಎಂದು ಹೇಳಿದ್ದಾರೆ.
'ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ' ಎಂದು ತಿಳಿಸಿದ್ದಾರೆ.
ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಬಳಿಕ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ. ಬಿಎಂಟಿಸಿ ಬಸ್‌ಗಳ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದೆ. ಪರಿಷ್ಕರಣೆ ಬಳಿಕ 0-2 ಕಿ. ಮೀ. ಪ್ರಯಾಣಕ್ಕೆ 10 ರೂ. ಮತ್ತು 30 ಕಿ. ಮೀ. ಪ್ರಯಾಣಕ್ಕೆ 90 ರೂ. ಪಾವತಿಸಬೇಕು.
ಪ್ರಯಾಣ ದರ ಏರಿಕೆ ಬಳಿಕ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ ಸುಮಾರು 79,643 ಕುಸಿತ ಕಂಡಿದೆ. ಫೆಬ್ರವರಿ 4ರಂದು ಮೆಟ್ರೋದಲ್ಲಿ 8,58,417 ಲಕ್ಷ ಪ್ರಯಾಣಿಕರು ಸಂಚಾರ ನಡೆಸಿದ್ದರು. ಫೆಬ್ರವರಿ 11ರಂದು ಈ ಸಂಖ್ಯೆ 7,78,774 ಲಕ್ಷಕ್ಕೆ ಇಳಿಕೆಯಾಗಿದೆ. ಮೆಟ್ರೋ ಪ್ರಯಾಣ ದರ ಇಳಿಕೆ ಮಾಡಬೇಕು ಎಂದು ಬಿಜೆಪಿ ನಾಯಕರು, ಮೆಟ್ರೋ ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ.
ಪ್ರಯಾಣ ದರ ಏರಿಕೆ ಬಳಿಕ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, '2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು?' ಎಂದು ಪ್ರಶ್ನೆ ಮಾಡಿದ್ದರು.
ಬಿಎಂಆರ್‌ಸಿಎಲ್ ರಚನೆ ಮಾಡಿದ್ದ ದರ ಪರಿಷ್ಕರಣೆ ಸಮಿತಿಯ ಶಿಫಾರಸ್ಸಿನಂತೆ ನಮ್ಮ ಮೆಟ್ರೋ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗಿದ್ದು, ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ 5ರಷ್ಟು ರಿಯಾಯಿತಿ ಮುಂದುವರಿಯುತ್ತದೆ ಎಂದು ಹೇಳಿದೆ. ದರ ಏರಿಕೆ ಬಳಿಕ ಜನರು, ಮೆಟ್ರೋಗಿಂತ ಬಿಎಂಟಿಸಿ ಬಸ್, ಖಾಸಗಿ ವಾಹನಗಳೇ ಉತ್ತಮ ಎಂದು ಹೇಳುತ್ತಿದ್ದಾರೆ.












Click it and Unblock the Notifications