ಅಂಬಾನಿ-ಅದಾನಿ ಜೇಬಿನಲ್ಲಿ ಮಾತ್ರ ಹಣ ಇದ್ದರೆ ದೇಶಕ್ಕೆ, ಜನರಿಗೆ ಏನೂ ಲಾಭ ಇಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 25: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಗರದ ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ ಎಂದರು.

ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಸಾಮಾನ್ಯ ಜನರ ಜೇಬಿಗೆ ಹಣ ಹಾಕಲು ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆಗೆ ಉತ್ತೇಜನ ಸಿಗಲಿದೆ ಎಂದು ಹೇಳಿದರು.
ಸಂವಿಧಾನ ವಿರೋಧಿಗಳ ಕೈಯಲ್ಲಿ ಅಧಿಕಾರ
ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ಎಂದ ಅವರು, ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗುತ್ತಾ ಎಂದು ಪ್ರಶ್ನೆ ಮಾಡಿದರು.
ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದರು.
ಸಿದ್ದಲಿಂಗಯ್ಯನವರ ಕವನಗಳು ಸಮಾಜದ ವಸ್ತು ಸ್ಥಿತಿಗೆ ಕನ್ನಡಿ ಹಿಡಿದಿವೆ ಎಂದ ಸಿದ್ದರಾಮಯ್ಯ ಅವರು, ಅಸಮಾನತೆ, ತಾರತಮ್ಯದ ವಿರುದ್ಧ ಸಮಾಜವನ್ನು ಎಚ್ಚರಿಸುವ ಧ್ವನಿ ಸಿದ್ದಲಿಂಗಯ್ಯ ಅವರ ಕವನಗಳಲ್ಲಿವೆ. ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಚಳವಳಿಗಳನ್ನು ಹುಟ್ಟುಹಾಕಿದವರು, ತಮ್ಮ ಬಜೆಟ್ ನಲ್ಲಿ ಕೊಟ್ಟಿರುವ ಕಾರ್ಯಕ್ರಮಗಳು, ದಲಿತರ ಪರವಾದ ಕಾಯ್ದೆ ಮತ್ತು ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದ್ದ, ಅವರು ಸಂವಿಧಾನದ ನಿಜವಾದ ರಕ್ಷಕರು ಮತ್ತು ಪಾಲಕರು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದರು.












Click it and Unblock the Notifications