Wrestlers Protest: ಕುಸ್ತಿಪಟುಗಳ ಸಮಸ್ಯೆ ಆಲಿಸಲು ಸಮಯ ಇಲ್ಲವೇ? ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿ ಬಂಧಿಸಿರುವ ಕ್ರಮವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ತಕ್ಷಣವೇ ಬಂಧಿಸಿರುವ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮಾಜಿ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ಕುಸ್ತಿಪಟುಗಳು ಪ್ರತಿಭಟನೆ ಮಾಡುತ್ತಿದ್ದರು. ಇಂದು ನೂತನ ಸಂಸತ್ ಭವನದತ್ತ ಮೆರವಣಿಗೆ ಹೊರಟಿದ್ದಾಗ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಸಿದ್ದರಾಮಯ್ಯ ಆಕ್ರೋಶ
ಸಿಎಂ ಸಿದ್ದರಾಮಯ್ಯ ಕೂಡ ದೆಹಲಿ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಟ್ವೀಟ್ ಮಾಡಿದ್ದು, ಕುಸ್ತಿಪಟುಗಳ ಸಮಸ್ಯೆ ಆಲಿಸಲು ಸಮಯ ಇಲ್ಲವೇ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನೆ ಮಾಡಿದ್ದಾರೆ. "ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ.
ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು." ಎಂದು ಒತ್ತಾಯಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ.
— Siddaramaiah (@siddaramaiah) May 28, 2023
ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು.@narendramodi @AmitShah
1/3#WrestlersProtest pic.twitter.com/5IWOTzAmFq
"ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ." ಎಂದು ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
"ಕೇಂದ್ರ ಬಿಜೆಪಿ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು." ಎಂದು ಅವರು ಒತ್ತಾಯ ಮಾಡಿದ್ದಾರೆ.
ಬಂಧನ ಸಮರ್ಥಿಸಿಕೊಂಡ ಪೊಲೀಸರು
ಸಂಸತ್ ಭವನದತ್ತ ತೆರಳಲು ಪ್ರತಿಭಟನಾಕಾರರಿಗೆ ಅವಕಾಶ ನೀಡುವುದಿಲ್ಲ, ಅವರು ನಿಯಮ ಬಾಹಿರವಾಗಿ ಸಂಸತ್ ಭವನದತ್ತ ತೆರಳಲು ಯತ್ನಿಸಿದ ಕಾರಣಕ್ಕೆ ಬಂಧಿಸಲಾಗಿದೆ. ಪ್ರತಿಭಟನಾಕಾರರು ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಲು ಪ್ರಯತ್ನ ಮಾಡಿದರು ಎಂದು ವಿಶೇಷ ಸಿಪಿ, ಕಾನೂನು ಮತ್ತು ಸುವ್ಯವಸ್ಥೆಯ ದೀಪೇಂದ್ರ ಪಾಠಕ್ ಪೊಲೀಸರು ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.












Click it and Unblock the Notifications