RSS ಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು: ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 06: ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ (RSS) ಕಚೇರಿಗೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಗೂಳಿಹಟ್ಟಿ ಶೇಖರ್ ಅವರಿಗೆ ನಿರಾಕರಣೆ ವಿಚಾರ ತೀವ್ರ ಚರ್ಚೆಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಶೂದ್ರ ಮತ್ತು ದಲಿತ ಸಮುದಾಯ ಈಗಲಾದರೂ ಕಣ್ತೆರೆದು ನಗ್ನ ಸತ್ಯ ಅರಿತುಕೊಳ್ಳಲಿ ಎಂದು ತಿಳಿಸಿದ್ದಾರೆ.
RSS ಕಚೇರಿಗೆ ಪ್ರವೇಶಾತಿ ನಿರಾಕರಣೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಸಾಮಾಜಿಕ ಜಾಲತಾಣ X ನಲ್ಲಿ ಪೊಸ್ಟ್ ಹಾಕಿದ್ದಾರೆ. ''ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ.
ಮಾಜಿ ಶಾಸಕ ಅನುಭವದಿಂದ ಪಾಠ ಕಲಿಯಲಿ
ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ ಎಂದರು.
ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು ಇಂದು ಗೂಳಿಹಟ್ಟಿ ಶೇಖರ್ ಅವರಿಗಾದ ಅವಮಾನದ ಹೊಣೆ ಹೊರುವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೀಸಲಾತಿ ಪ್ರತಿಪಾದಿಸಿದ ಸಿದ್ದರಾಮಯ್ಯ
ಇದೇ ಕಾರಣಕ್ಕೆ ನಾನು ಹಿಂದೆ ನೂರು ಬಾರಿ ಹೇಳಿದ್ದೇನೆ, ಈಗ ಮತ್ತೆ ಹೇಳುತ್ತೇನೆ 'ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು'. ಜಾತೀಯತೆಯನ್ನು ತೊಡೆದು ಹಾಕಲು ಮೀಸಲಾತಿಯೂ ಒಂದು ಪ್ರಬಲ ಅಸ್ತ್ರ ಎಂದು ಅವರು ಪ್ರತಿಪಾದಿಸಿದರು.
ಆರ್.ಎಸ್.ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ. ಈ ವರೆಗೆ ಒಬ್ಬನೇ ಒಬ್ಬ ತಳ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್.ಎಸ್.ಎಸ್ ತನ್ನ ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು.
ಆರ್‌ಎಸ್‌ಎಸ್‌ಗೆ ಸಿದ್ದರಾಮಯ್ಯ ಸವಾಲು
ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? 'ಹಿಂದುಗಳೆಲ್ಲ ಒಂದು' ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ "ಹಿಂದೂ..ಒಂದು" ಎಂದು ಸುಳ್ಳುಹೇಳಿ ಜನರನ್ನು ನಂಬಿಸಿ ಮೋಸ ಮಾಡುವುದನ್ನು ನಿಲ್ಲಿಸಬೇಕು ಎಂದು ಸವಾಲು ಹಾಕಿದರು.
ತನ್ನ 'ಹೊಡಿ ಬಡಿ' ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಚವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು ನೀಡುವ ಸಮಯ ಬಂದಾಗ ಮನೆ ಗೇಟ್‌ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ ಎಂದು ಅವರು ಟೀಕಿಸಿದ್ದಾರೆ.












Click it and Unblock the Notifications