RCB ಕಾಲ್ತುಳಿತ ದುರಂತಕ್ಕೆ ಅಸಲಿ ಕಾರಣ ತಿಳಿಸಿದ ಸಿಎಂ ಸಿದ್ದರಾಮಯ್ಯ
ಐಪಿಎಲ್‌ನಲ್ಲಿ ಚೊಚ್ಚಲ ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಬೆಂಗಳೂರಿಗೆ ಆಗಮಿಸಿದಾಗ ದೊಡ್ಡ ದುರಂತ ನಡೆದಿದ್ದು ಇನ್ನೂ ಮಾಸಿಲ್ಲ. ಆರ್‌ಸಿಬಿ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಜೀವ ಬಿಟ್ಟಿದ್ದರು. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪವೂ ಕೇಳಿಬಂದಿತ್ತು. ಈ ಬಗ್ಗೆ ಮತ್ತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ಅಂದು ನಡೆದ ಘಟನೆಗೆ ಅಸಲಿ ಕಾರಣವೇನು? ಎಂದು ವಿವರಿಸಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಅವರು ಮಾತನಾಡಿದ್ದಾರೆ. ನಾನು 1983ರಿಂದ ಶಾಸಕನಾಗಿ, ಸಚಿವನಾಗಿ, ಈಗ ಸಿಎಂ ಆಗಿದ್ದೇನೆ. ಬೆಂಗಳೂರಿನಲ್ಲಿ ನಡೆದ ಇಂತಹ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನಾನು ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಇದರ ಪರಿಣಾಮ 11 ಮಂದಿ ಮೃತಪಟ್ಟರು ಎಂದು ಸಿಎಂ ಹೇಳಿದ್ದಾರೆ.

ಕಾಲ್ತುಳಿತ ಘಟನೆ ನಡೆದ ದಿನ ಮಧ್ಯಾಹ್ನ 3:50ಕ್ಕೆ ಸಾವುಗಳು ಸಂಭವಿಸಿದ್ದವು. ಆದರೂ ನಮಗೆ ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವೇ? 5:45ಕ್ಕೆ ನಾನಾಗಿಯೇ ಕೇಳಿದಾಗಲೂ ಒಂದೇ ಸಾವು ಆಗಿದೆ ಎನ್ನುವ ಮಾಹಿತಿ ನೀಡಿದರು. ಆದರೆ ಅಷ್ಟೊತ್ತಿಗಾಗಲೇ 11 ಸಾವು ಆಗಿಬಿಟ್ಟಿತ್ತು. ಹಿರಿಯ ಅಧಿಕಾರಿ ಸರಿಯಾದ ಮಾಹಿತಿಯನ್ನು ತಕ್ಷಣ ನಮಗೆ ನೀಡಿದ್ದರೆ, ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮ ರದ್ದುಗೊಳಿಸಲು ಸೂಚನೆ ನೀಡಬಹುದಿತ್ತು. ಹಿರಿಯ ಅಧಿಕಾರಿಗಳ ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ. ಆದರೆ ತಪ್ಪಾಗಿದ್ದು ನಿಜವಲ್ಲವೇ? ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಪೊಲೀಸರಿಗೆ ಖಡಕ್ ಎಚ್ಚರಿಕೆ
ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಕೂಡ ಹೆಚ್ಚಿಸಬೇಕಿದೆ. ಬೀದರ್‌ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸಲು ಸಾಧ್ಯವಾಗಲಿಲ್ಲ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ಬಿಡಿ ಬಿಡಿ ಪ್ರಕರಣಗಳಲ್ಲಿ ತನಿಖೆಯ ಗುಣಮಟ್ಟ ಹೆಚ್ಚಿದ್ದರೂ ಒಟ್ಟಾರೆಯಾಗಿ ಗಮನಿಸಿದಾಗ ತನಿಖೆಯ ಗುಣಮಟ್ಟ ಕುಸಿದಿರುವುದು ಸ್ಪಷ್ಟವಾಗುತ್ತಿದೆ. ಅಪರಾಧ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತವಾಗಿ, ಪರಿಣಾಮಕಾರಿಯಾಗಿ, ಸರಿಯಾದ ಸಮಯಕ್ಕೆ ಸಲ್ಲಿಸದಿರುವುದೂ ದೊಡ್ಡ ವೈಫಲ್ಯ. ಇಂಥದ್ದನ್ನು ಸಹಿಸಲು ಸಾಧ್ಯವಿಲ್ಲ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.
ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ? ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖಾರವಾಗಿ ಮಾತನಾಡಿದ್ದಾರೆ. ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿದೆ. ಇತರೆ ಜಿಲ್ಲೆಗಳಲ್ಲಿ ಈ ರೀತಿ ಆಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಅವರು ಯಾರೇ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
2 ತಿಂಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿ
ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈಕಟ್ಟಿಕೊಂಡು ಕೂರುವುದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು 2 ತಿಂಗಳ ಬಳಿಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಪೊಲೀಸ್ ಇಲಾಖೆಯ ಬೇಡಿಕೆಗಳಲ್ಲಿ ಬಹುತೇಕ ಈಡೇರಿಸಿ ಸಾಕಷ್ಟು ಹಣ, ಅನುದಾನ ಒದಗಿಸಿದ್ದೇನೆ. ಸಮಾಜದ ನೆಮ್ಮದಿ, ಕಾನೂನು- ಸುವ್ಯವಸ್ಥೆಯನ್ನು ನಿಮ್ಮಿಂದ ನಿರೀಕ್ಷಿಸುತ್ತೇನೆ. ಶಕ್ತರಿಗೂ, ಅಶಕ್ತರಿಗೂ ನ್ಯಾಯ ಒದಗಿಸುವುದು ಪೊಲೀಸ್ ಜವಾಬ್ದಾರಿ. ಕಾನೂನು ಎಲ್ಲರಿಗೂ ಒಂದೇ ಎಂದಿದ್ದಾರೆ.
ನಾವು ಪ್ರಜಾಪ್ರಭುತ್ವ ಒಪ್ಪಿದ್ದೀವಿ. ಸಂವಿಧಾನ ಒಪ್ಪಿಕೊಂಡಿದೀವಿ. ಸಮಾಜದ ಸ್ವಾಸ್ಥ್ಯ ಕಾಪಾಡಿ, ಸಮಾಜದ ಎಲ್ಲರಿಗೂ ನ್ಯಾಯ ಕೊಡಿಸುವ ಭರವಸೆ ನೀಡಿದ್ದೀವಿ. ಇದಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಸಮಾಜದ ನೆಮ್ಮದಿ ಕಾಪಾಡಲು ಪೊಲೀಸ್ ಕಾರ್ಯಕ್ಷಮತೆ ಬಹಳ ಮುಖ್ಯ. ಇದು ಪ್ರಜಾರಾಜ್ಯ- ಅವರ ಕಷ್ಟ ಸುಖ ಕೇಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿ ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.












Click it and Unblock the Notifications