Train Accident: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರಿಗೆ ಸಹಾಯ ಹಸ್ತ ಚಾಚಿದವರನ್ನು ಶ್ಲಾಘಿಸಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್. 04: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಕಾರಣ ಬೆಂಗಳೂರಿನ ಕೆಲವು ರೈಲುಗಳು ರದ್ದಾಗಿದೆ. ಇದೇ ಕಾರಣದಿಂದ ಶನಿವಾರದಿಂದ ಅನೇಕ ಪ್ರಯಾಣಿಕರು ನಗರದ ವಿವಿಧ ರೈಲ್ವೇ ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಿಗೆ ರಾಜ್ಯ ಸರ್ಕಾರದ ಜೊತೆಗೆ ಹಲವು ಸಂಸ್ಥೆಗಳು ಮತ್ತು ಸಂಘಟನೆಗಳು ಸಹಾಯ ಹಸ್ತ ಚಾಚಿವೆ.
ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಪ್ರಯಾಣಿಸಬೇಕಾದ ನೂರಾರು ಪ್ರಯಾಣಿಕರು ತಮ್ಮ ಪ್ರಯಾಣ ರದ್ದಾದ ಕಾರಣ ರೈಲು ನಿಲ್ದಾಣಗಳಲ್ಲಿ ಉಳಿದುಕೊಂಡಿದ್ದಾರೆ. ಈ ಬಿಕ್ಕಟ್ಟಿನ ಸಮಯದಲ್ಲಿ, ಬೆಂಗಳೂರಿನ ಅನೇಕ ಸಂಸ್ಥೆಗಳು ಪ್ರಯಾಣಿಕರಿಗೆ ಸಹಾಯವನ್ನು ನೀಡಿದೆ. ಅವರಿಗೆ ಆಹಾರ, ನೀರು ಮತ್ತು ಇತರ ಉಪಹಾರಗಳನ್ನು ಒದಗಿಸಿವೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಬೆಂಗಳೂರಿನಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಸಹಾಯ ಮಾಡಿದ ಕೆಲವು ಸಂಸ್ಥೆಗಳಿಗೆ ಸಿಎಂ ಸಿದ್ದರಾಮಯ್ಯ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಸರ್ಕಾರವೂ ಸ್ವಯಂಸೇವಕರೊಂದಿಗೆ ಕೈಜೋಡಿಸಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದವರಿಗೆ ನೆರವು ನೀಡಿದೆ.
ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1500 ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೆರವಿಗೆ ನಿಂತಿದ್ದೇವೆ.… pic.twitter.com/Y4rIMF1SU8
— CM of Karnataka (@CMofKarnataka) June 4, 2023
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಪುಟ ಟ್ವೀಟ್ ಮಾಡಿದೆ. "ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1500 ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೆರವಿಗೆ ನಿಂತಿದ್ದೇವೆ" ಎಂದಿದ್ದಾರೆ.
"ನಮ್ಮ ಈ ಕಾರ್ಯಕ್ಕೆ ಜೊತೆಯಾದ ಜೆಎಂಸಿ, ಕೆ2ಕೆ, ಡಿಮಾರ‍್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳಿಗೆ ಹಾಗೂ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಮರ್ಸಿ ಫೌಂಡೇಷನ್, ತೌಸೀಫ್ ಮತ್ತು ತನ್ವೀರ್, ಕ್ಲಿಫ್ಟಿನ್ ಹಾಗೂ ಮೈತ್ರಿ ಮತ್ತು ತಂಡದವರಿಗೆ ಧನ್ಯವಾದಗಳು. ಇಂಥ ಸಂಕಷ್ಟದ ಸಮಯದಲ್ಲಿ ತಾವು ತೋರಿದ ಮಾನವೀಯ ಕಾಳಜಿ ಶ್ಲಾಘನೀಯವಾದುದ್ದು" ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1500 ಕೂಲಿ ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಮೊಬೈಲ್ ಶೌಚಾಲಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರದ ಜೊತೆಗೆ ಪರಿಹಾರ ಚಟುವಟಿಕೆಯಲ್ಲಿ ತೊಡಗಿರುವ ಇತರ ಸಂಸ್ಥೆಗಳನ್ನು ಶ್ಲಾಘಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲು ಅಪಘಾತದಲ್ಲಿ 288 ಮಂದಿ ಸಾವನ್ನಪ್ಪಿದ್ದು, 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇನ್ನು, ಈ ಭೀಕರ ರೈಲು ಅಪಘಾತಕ್ಕೆ 'ಕೋಮು ಬಣ್ಣ' ನೀಡುವವರರ ವಿರುದ್ಧ ಒಡಿಶಾ ಪೊಲೀಸರು ಭಾನುವಾರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಅಪಘಾತದ ಕುರಿತು "ಕೆಟ್ಟ ಪ್ರೇರಿತ" ಪೋಸ್ಟ್‌ಗಳನ್ನು ಪ್ರಸಾರ ಮಾಡಲಾಗುತ್ತಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
"ಬಾಲಸೋರ್‌ನಲ್ಲಿ ಸಂಭವಿಸಿದ ದುರಂತ ರೈಲು ಅಪಘಾತಕ್ಕೆ ಕೆಲವು ಸಾಮಾಜಿಕ ಮಾಧ್ಯಮಗಳು ಕಿಡಿಗೇಡಿತನದಿಂದ ಕೋಮು ಬಣ್ಣವನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ದುರದೃಷ್ಟಕರ. ಅಪಘಾತದ ಕಾರಣ ಮತ್ತು ಇತರ ಎಲ್ಲ ಅಂಶಗಳ ಕುರಿತು ಒಡಿಶಾದ ಜಿಆರ್‌ಪಿಯಿಂದ ತನಿಖೆ ನಡೆಯುತ್ತಿದೆ. ಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದನ್ನು ತಡೆಯಲು ನಾವು ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇವೆ. ವದಂತಿಗಳನ್ನು ಹಬ್ಬಿಸುವ ಮೂಲಕ ಕೋಮು ಸೌಹಾರ್ದತೆ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications