CM Siddaramaiah: ನಮ್ಮದು ಗಾಂಧಿಯ ಹಿಂದುತ್ವ, ಬಿಜೆಪಿಯವರದ್ದು ಗೋಡ್ಸೆ ಸಿದ್ಧಾಂತ
ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ನೆರವೇರಿತು. ಇದರ ಅಂಗವಾಗಿ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕಾಂಗ್ರೆಸ್ ನಾಯಕರು ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ರಾಮ ಭಕ್ತರಾಗಿದ್ದ, ಶುದ್ಧಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರವು ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಹಾಗೂ ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರವು ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ. ನಾವು ಮಹಾತ್ಮ ಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನವನ್ನು ಮುನ್ನಡೆಸುತ್ತೇವೆ ಎಂದು ಹೇಳಿದರು. ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ನೆನೆದರು.
ಇದೇ ಕಾರ್ಯಕ್ರಮದಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡಿರುವ "ಗಾಂಧಿ ಭಾರತ ಮರು ನಿರ್ಮಾಣ" ಹಾಗೂ ರಿಕ್ಲೇಮಿಂಗ್ ಗಾಂಧಿ ಭಾರತ್ ಎನ್ನುವ ಕನ್ನಡ ಹಾಗೂ ಇಂಗ್ಲಿಷ್ ಪುಸ್ತಕಗಳನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
1924ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು, ಕೋಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ, ಅಕಾಲಿಗಳಿಗೆ ಅಭಿನಂದನೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು, ಅಸ್ಪೃಶ್ಯತೆ ನಿವಾರಣೆ, ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ ಎಂದರು.

ರಾಷ್ಟ್ರದ ಇಂದಿನ ಅಗತ್ಯವೆಂದರೆ, ಗಾಂಧಿ ಆದರ್ಶಗಳನ್ನು ಅನುಸರಿಸುವುದು, ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು, ಗಾಂಧಿ ಕನಸನ್ನು ನನಸಾಗಿಸುವುದು ಎಂದು ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದೆ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್‌ಸಿಂಗ್ ಸುರ್ಜೇವಾಲಾ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಕೆ.ಪಾಟೀಲ, ಡಾ.ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ ಹಾಗೂ ಇತರರು ಇದ್ದರು.












Click it and Unblock the Notifications