ಶನಿವಾರದ ಜನತಾ ದರ್ಶನ ಈ ಬಾರಿ ಬೆಂಗಳೂರಿನ ಬದಲು ಬೆಳಗಾವಿಯಲ್ಲಿ!
Recommended Video

ಬೆಂಗಳೂರು, ಸೆಪ್ಟೆಂಬರ್ 14: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಸೆಪ್ಟೆಂಬರ್ 15 ರಂದು ಬೆಳಗಾವಿಯಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಧ್ಯಾಹ್ನ 3ರಿಂದ 5ಗಂಟೆವರೆಗೆ ಜನತಾ ದರ್ಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಮಹಾದಾಯಿ ವಿವಾದ ಹಾಗೂ ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಬೆಳಗಾವಿಯಲ್ಲಿ ಸಭೆ ನಡೆಯಲಿದ್ದು, ಕುಮಾರಸ್ವಾಮಿ, ರಾಜ್ಯಪಾಲ ವಿಆರ್ ವಾಲಾ ಪಾಲ್ಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ವಿಭಜನೆ ಕರಿತು ಶುಕ್ರವಾರ ಸಿಎಂ ಕುಮಾರಸ್ವಾಮಿ ಹಲವು ಇಲಾಖೆಗಳ ಅಧಿಕಾರಿಗಳ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ.
ಕುಮಾರಸ್ವಾಮಿ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವುದರಿಂದ ಶನಿವಾರ ಬೆಂಗಳೂರಿನಲ್ಲಿ ನಡೆಸುತ್ತಿದ್ದ ಜನತಾ ದರ್ಶನವನ್ನು ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಿದ್ದಾರೆ, ಜನತಾದರ್ಶನ ಸಂದರ್ಭದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಕರ್ನಾಟಕ ಲಾ ಸೊಸೈಟಿಯ ಅಮೃತ ಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಭಾಗವಹಿಸುತ್ತಿದ್ದಾರೆ. ಆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿಗಳನ್ನು ಬೀಳ್ಕೊಟ್ಟ ನಂತರ ಬೆಳಗಾವಿಯಲ್ಲಿ ನಿರ್ಮಿಸಿರುವ ಕನ್ನಡ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.












Click it and Unblock the Notifications