ಚುನಾವಣೆ ಹೊತ್ತಲ್ಲೇ ಎದುರಾಗಿದ್ದ ಸಂಕಷ್ಟದಿಂದ ಸಂಸದ ರಾಘವೇಂದ್ರಗೆ ಬಿಗ್ ರಿಲೀಫ್
ಬೆಂಗಳೂರು, ಏಪ್ರಿಲ್ 17: ಚಿತ್ರದುರ್ಗದ ಭೋವಿ ಮಠದಲ್ಲಿ ರಾಜಕೀಯ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ವಿಧಿಸಿದೆ. ಹೀಗಾಗಿ ಸಂಸದರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಲ್ಲವಾದರೆ ಚುನಾವಣೆ ಸಮಯದಲ್ಲಿ ಬಂಧನಕ್ಕೆ ಒಳಗಾಗುವ ಅಪಾಯವಿತ್ತು.
ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಬಿ.ವೈ.ರಾಘವೇಂದ್ರ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ಪೀಠ ಪ್ರಕರಣಕ್ಕೆ ತಡೆ ನೀಡಿ ಆದೇಶಿಸಿದೆ.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಎಫ್‌ಐಆರ್‌ಗೆ ತಡೆ ನೀಡಿ ಆದೇಶಿಸಿದೆ. ಜೊತೆಗೆ ಪ್ರಕರಣ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಮತ್ತು ದೂರುದಾರರಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ.ಅವಿನಾಶ್ ಅವರಿಗೆ ಆಕ್ಷೇಪಣೆ ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಏಸಗಿದ್ದಾರೆ ಎನ್ನಲಾದ ಅಪರಾಧಗಳ ಕುರಿತು ಎಫ್‌ಐಆರ್‌ನಲ್ಲಿ ಮಾಹಿತಿ ನೀಡಿಲ್ಲ. ಹಾಗಾಗಿ, ಕ್ರಿಮಿನಲ್ ಪ್ರಕ್ರಿಯೆ ಮುಂದುವರಿಸಿದರೆ ಕಾನೂನಿಗೆ ವಿರುದ್ಧ ನಡೆದಂತಾಗುತ್ತದೆ. ಈ ಕಾರಣದಿಂದ ತಮ್ಮ ವಿರುದ್ಧ ಎಫ್‌ಐಆರ್ ಹಾಗೂ ಪ್ರಕರಣ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಬೇಕು ಎಂದು ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ ಏನು..?
2024ರ ಮಾ.23ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಚಿತ್ರದುರ್ಗದ ಸಿದ್ದೇಶ್ವರ ಭೋವಿ ಸಮಾಜ ಗುರುಪೀಠದಲ್ಲಿ ಸಭೆ ನಡೆಸಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದ ರಾಘವೇಂದ್ರ 'ಒಂದು ರಾಜಕೀಯ ಪಕ್ಷವನ್ನು ಅಧಿಕಾರಕ್ಕೆ ತರಲು ಚುನಾವಣೆ ನಡೆಯುತ್ತಿಲ್ಲ. ಬದಲಿಗೆ ಅದು ರಾಷ್ಟ್ರೀಯವಾದಿಗಳು ಮತ್ತು ರಾಷ್ಟ್ರ ವಿರೋಧಿಗಳ ನಡುವಿನ ಚುನಾವಣೆಯಾಗಿದೆ' ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು.
ತದನಂತರದ ಸಂಸದರು ಮತದಾರರ ಮೇಲೆ ಪ್ರಭಾವ ಬೀರಲು ದ್ವೇಷ ಭಾಷಣ ಮಾಡುವ ಮೂಲಕ ಧಾರ್ಮಿಕ ಸ್ಥಳವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಅಲ್ಲದೇ ಅವರು ಸಭೆ ನಡೆಸಲು ಚುನಾವಣಾ ಆಯೋಗದಿಂದ ಪೂರ್ವಾನುಮತಿ ಪಡೆದಿಲ್ಲ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ.ಅವಿನಾಶ್ ಚಿತ್ರದುರ್ಗ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದನ್ನು ಪರಿಗಣಿಸಿದ್ದ ಪೊಲೀಸರು, ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications