ಚಾಮರಾಜನಗರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಸಮಗ್ರ ಯೋಜನೆ: ವಿ.ಸೋಮಣ್ಣ
ಬೆಂಗಳೂರು, ನವೆಂಬರ್ 5: ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಉದ್ದೇಶದಿಂದ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯ ಸಮಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಗಳ ಸಂಬಂಧ ನಡೆದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವ ಒಟ್ಟು 7 ಯೋಜನೆಗಳ ಪೈಕಿ 3 ಯೋಜನೆಗಳಿಗೆ 745 ಕೋಟಿ ರೂ. ಅಂದಾಜು ಮೊತ್ತಗಳಾಗಿವೆ. ಸದರಿ ಯೋಜನೆಗೆ ಈಗಾಗಲೇ ಅಂದಾಜು ಪರಿಶೀಲನಾ ಸಭೆಯಲ್ಲಿ ಮಂಡಿಸಿ ತೆರವು ಪಡೆಯಲಾಗಿದೆ. ಉಳಿದ 4 ಯೋಜನೆಗಳಿಗೆ ಹೊಸದಾಗಿ ಒಟ್ಟು 749 ಕೋಟಿ ರೂ. ವೆಚ್ಚದ ಅಂದಾಜು ಮೊತ್ತದ ಲೈನ್ ಡಿಪಿಆರ್ ಆಗಿದೆ. ಇದಕ್ಕೆ ವಿಸ್ತೃತ ಯೋಜನೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಸರ್ವಾಂಗೀಣ ಪ್ರಗತಿ ದೃಷ್ಠಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳ ಅನುಷ್ಠಾನ ತೀರಾ ಅಗತ್ಯವಾಗಿದೆ. ಯೋಜನೆಯ ಜಾರಿ ತುರ್ತಾಗಿ ಆಗಬೇಕಿದೆ. ಆರ್ಥಿಕ ಇಲಾಖೆ ಅನುಮೋದನೆ, ಟೆಂಡರ್ ಪ್ರಕ್ರಿಯೆ ಇನ್ನಿತರ ಅವಶ್ಯಕ ಕ್ರಮಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿಕೊಂಡು ಶೀಘ್ರವೇ ಯೋಜನೆ ಚಾಲನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರಾದ ವಿ. ಸೋಮಣ್ಣ ಹೇಳಿದರು.
ಯೋಜನೆ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಬಾಕಿಯಿರುವ ಎಲ್ಲಾ ರೂಪುರೇಷೆಗಳನ್ನು ಅಂತಿಮಗೊಳಿಸಿ ಅನುಮೋದನೆ ಪಡೆದುಕೊಳ್ಳಬೇಕು. ವಿಳಂಬ ಮಾಡದೇ ಯೋಜನೆ ಜಾರಿಗೆ ಮುಂದಾಗಲು ಹಿರಿಯ ಅಧಿಕಾರಿಗಳೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಇದೇ ವೇಳೆ ಆನೆಮಡುವಿನ ಕೆರೆಗೆ ನೀರು ತುಂಬಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ವಿವರವಾಗಿ ಚರ್ಚಿಸಿದ ಸಚಿವರು ಯಾವುದೇ ತೊಂದರೆಯಿಲ್ಲದೇ ಆನೆಮಡುವಿನ ಕೆರೆಗೆ ನೀರು ತುಂಬಿಸಲು ಅಗತ್ಯವಿರುವ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಈಗಾಗಲೇ ಪ್ರಗತಿಯಲ್ಲಿರುವ ಸುತ್ತೂರು ಏತ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲು ಅಗತ್ಯ ಕ್ರಮ ವಹಿಸಬೇಕು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ರಾಮನಗುಡ್ಡ, ಹುಬ್ಬೆ ಹುಣಸೆ ಯೋಜನೆ ಕಾಮಗಾರಿಗಳನ್ನು ಕೈಗೊಂಡು ಕೆರೆಗಳನ್ನು ತುಂಬಿಸುವ ಯೋಜನೆಯ ಪ್ರಗತಿಗೂ ಮುಂದಾಗಬೇಕು. ಜಿಲ್ಲೆಯಲ್ಲಿ ಬಾಕಿ ಇರುವ ಕೆರೆ ತುಂಬಿಸುವ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನ್ ಕುಮಾರ್, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ.ನಿಜಗುಣ ರಾಜು, ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‍ಸಿಂಗ್, ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮೃತ್ಯುಂಜಯಸ್ವಾಮಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಂಕರೇಗೌಡ, ಕಾವೇರಿ ನೀರಾವರಿ ನಿಗಮದ ಮೈಸೂರು ವಿಭಾಗದ ಮುಖ್ಯ ಎಂಜಿನಿಯರ್ ವೆಂಕಟೇಶ್, ಅಧೀಕ್ಷಕ ಎಂಜಿನಿಯರ್ ಶಿವಮಾದಯ್ಯ, ಕಾರ್ಯಪಾಲಕ ಎಂಜಿನಿಯರ್ ಎಂ.ಬಿ. ಪಾಟೀಲ್, ವೆಂಕಟೇಶ್ ಪ್ರಭು, ಕಿಶೋರ್, ಈಶ್ವರ್, ಮಂಜುನಾಥ್, ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.












Click it and Unblock the Notifications