ನಿನ್ನೆವರೆಗೂ ಈಶ್ವರಪ್ಪ ರಾಜೀನಾಮೆ ಆಗ್ರಹಿಸಿದ್ದ ಕಾಂಗ್ರೆಸ್ ಈಗ ಬಂಧನಕ್ಕೆ ಪಟ್ಟು
ಬೆಂಗಳೂರು ಏಪ್ರಿಲ್ 15: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆಹೊತ್ತು ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಸದ್ಯ ಕೆಎಸ್ ಈಶ್ವರಪ್ಪ ಅವರನ್ನ ಬಂಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಜೊತೆಗೆ ಕೇವಲ ಈಶ್ವರಪ್ಪ ಅವರು ರಾಜಿನಾಮೆ ನೀಡಿದರೆ ಸಾಕಾಗುವುದಿಲ್ಲ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿದೆ. ಕಾಂಗ್ರೆಸ್ ಶಾಸಕರು, ಎಂಎಲ್‌ಸಿಗಳು ಸದನದಲ್ಲೇ ಕಳೆದಿದ್ದಾರೆ. ಅಹೋರಾತ್ರಿ ಧರಣಿ ಮುಂದುವರೆಸುವುದಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,' ನಾವು ಈಶ್ವರಪ್ಪ ಅವರನ್ನು ರಾಜೀನಾಮೆಗೆ ಒತ್ತಾಯಿಸುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದೇವೆ' ಎಂದು ಅವರು ಹೇಳಿದ್ದಾರೆ. ಇಲ್ಲವಾದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಡಿಕೆಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಸಂತೋಷ್ ಆತ್ಮಹತ್ಯೆ ಪ್ರಕಣದ ವಿಚಾರವಾಗಿ ಮೂರು ವಿಚಾರಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಈಶ್ವರಪ್ಪ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಪ್ರಕರಣ ದಾಖಲಾಗಬೇಕು, ಅವರು ಕೂಡಲೇ ಬಂಧಿಸಬೇಕು, ಜೊತೆಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ನಾವು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ.
ಆರೋಪಗಳ ನಡುವೆ ಈಶ್ವರಪ್ಪ ಇಂದು ಸಂಜೆ ರಾಜೀನಾಮೆ ನೀಡುತ್ತಾರೆ ಎಂದು ಹೇಳಿದ್ದಾರೆ. ಇಂದು ಸಂಜೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಬಹುದು ಎನ್ನಲಾಗುತ್ತಿದೆ.
ಮುಖ್ಯಮಂತ್ರಿಗಳು ಈ ಎಲ್ಲ ವಿಚಾರದಲ್ಲೂ ಭಾಗಿಯಾಗಿದ್ದಾರೆ ಎಂದು ನಾವು ನೇರ ಆರೋಪ ಮಾಡಬೇಕಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಇದ್ದರೂ ಈ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಮೃತನ ಮರಣ ಸಂದೇಶ, ಮೃತನ ಸಹೋದರ, ಪತ್ನಿ, ತಾಯಿ ಎಲ್ಲರೂ ಭ್ರಷ್ಟಾಚಾರ ಕಿರುಕುಳದ ಆರೋಪ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎನ್ನುವಂತೆ ಆರೋಪಿ ಸಚಿವರಿಂದಾಗಿಯೇ ಈ ಪ್ರಕರಣ ನಡೆದಿವೆ. ಹೀಗಾಗಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು, ಜತೆಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತದೆ.

ರಾಜ್ಯದಾದ್ಯಂತ ಸಂಚರಿಸಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಧ್ರುವನಾರಾಯಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಎಂಟು ತಂಡಗಳನ್ನು ರಚನೆ ಮಾಡಲಾಗಿದೆ.
ಈ ತಂಡಗಳು ಜಿಲ್ಲೆಗಳಿಗೆ ಭೇಟಿ ನೀಡಿ ಏ.15 ರಿಂದ ಏ.20 ರವರೆಗೆ ಪ್ರತಿಭಟನಾ ಸಭೆಗಳನ್ನು ಹಮ್ಮಿಕೊಳ್ಳಲಿವೆ. ಜೊತೆಗೆ ಗುತ್ತಿಗೆದಾರರ ಸಂಘ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದಿರುವ 40% ಕಮಿಷನ್ ಪತ್ರ, ಈಶ್ವರಪ್ಪ ಅವರ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಮೃತಪಟ್ಟಿರುವ ಗುತ್ತಿಗೆದಾರ ಸಂತೋಷ್ ಹಾಗೂ ಈ ಹಿಂದೆ ಈಶ್ವರಪ್ಪ ವಿರುದ್ಧ ಸಂತೋಷ್ ಮಾಡಿರುವ ಆರೋಪಗಳು, ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳು ಈ ಬಗ್ಗೆ ವಹಿಸಿರುವ ಮೌನದ ಬಗ್ಗೆ ಜನಾಭಿಪ್ರಾಯ ಮೂಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಏ. 15 ರಿಂದ 19 ರವರೆಗೆ ಕ್ರಮವಾಗಿ ಹಾವೇರಿ, ಗದಗ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ ನಗರ, ಧಾರವಾಡ ಗ್ರಾಮೀಣ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ತಂಡವು ಹೋರಾಟ ನಡೆಸಲಿದೆ. ಜೊತೆಗೆ ಏ.15 ರಿಂದ 20ರವರೆಗೆ ಚಾಮರಾಜನಗರ, ಮೈಸೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ತಂಡ ಪ್ರವಾಸ ಮಾಡಲಿದೆ. ಇನ್ನೂ ಎಂ.ಬಿ. ಪಾಟೀಲ್ ಅವರ ನೇತೃತ್ವದ ತಂಡ ಏ.15 ರಿಂದ 18ರವರೆಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆ, ರಾಮಲಿಂಗಾರೆಡ್ಡಿ ನೇತೃತ್ವದ ತಂಡ ಏ.15 ರಿಂದ 18ರವರೆಗೆ ಬಳ್ಳಾರಿ ನಗರ ಮತ್ತು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಭೇಟಿ ನೀಡಲಿದೆ.
ಏ.15 ರಿಂದ 17ರವರೆಗೆ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು ಜಿಲ್ಲೆಯಲ್ಲಿ ಸಲೀಂ ಅಹಮದ್ ಅವರ ನೇತೃತ್ವದ ತಂಡ, ಸತೀಶ್ ಜಾರಕಿಹೊಳಿ ಅವರ ತಂಡ ಏ.15 ರಿಂದ 17ರವರೆಗೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಆರ್. ಧ್ರುವನಾರಾಯಣ ಅವರ ನೇತೃತ್ವದ ತಂಡ ಏ.15 ರಿಂದ 17ರವರೆಗೆ ಕೊಪ್ಪಳ, ದಾವಣಗೆರೆ, ಶಿವಮೊಗ್ಗ ಜಿಲ್ಲೆ, ಈಶ್ವರಖಂಡ್ರೆ ತಂಡ ಏ.15 ರಿಂದ 17ರವರೆಗೆ ಬೆಳಗಾವಿ ನಗರ ಹಾಗೂ ಗ್ರಾಮಾಂತರ, ಚಿಕ್ಕೋಡಿ, ವಿಜಯಪುರ ಜಿಲ್ಲೆಗಳಲ್ಲಿ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಘಟನೆ ಏನು?
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ. ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.












Click it and Unblock the Notifications