ರಾಜಕೀಯ ಪ್ರೇರಿತ ಐಟಿ ದಾಳಿ ಆರೋಪ: ದೋಸ್ತಿ ನಾಯಕರಿಂದ ಪ್ರತಿಭಟನೆ
ಬೆಂಗಳೂರು, ಮಾರ್ಚ್ 28: ನಿನ್ನೆ ತಡರಾತ್ರಿ ಜೆಡಿಎಸ್-ಕಾಂಗ್ರೆಸ್ ಮುಖಂಡರ ಮೇಲೆ ನಡೆಯುತ್ತಿರುವ ಐಟಿ ದಾಳಿ ಖಂಡಿಸಿ ನಗರದ ಆದಾಯ ತೆರಿಗೆ ಇಲಾಖೆ ಕಚೇರಿ ಮುಂದೆ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜೆಡಿಎಸ್-ಕಾಂಗ್ರೆಸ್ ಮುಖಂಡರು ಸಹ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಖುದ್ದು ಸಿಎಂ ಕುಮಾರಸ್ವಾಮಿ ಅವರೇ ಪ್ರತಿಭಟನೆಯಲ್ಲಿ ಭಾಗವಹಿಸಲು ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಹ ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ.
ಚುನಾವಣೆ ಸಮಯದಲ್ಲಿ ಉದ್ದೇಶಪೂರ್ವಕವಾಗಿ ಐಟಿ ದಾಳಿಗಳನ್ನು ಮಾಡಲಾಗಿದೆ ಎಂದು ಜೆಡಿಎಸ್-ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಕುಮಾರಸ್ವಾಮಿ ಅವರು ನಿನ್ನೆ ರಾತ್ರಿಯೇ ಐಟಿ ದಾಳಿ ನಡೆಯುವ ಬಗ್ಗೆ ಮಾಹಿತಿ ನೀಡಿದ್ದರು, ಅಂತೆಯೇ ಇಂದು ದಾಳಿ ಆಗಿರುವುದು ಇನ್ನಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಈಗಾಗಲೇ ನಗರದ ಐಟಿ ಕಚೇರಿ ಎದುರಿಗೆ ನೂರಾರು ಸಂಖ್ಯೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದೆ. ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಐಟಿ ದಾಳಿ ಆದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಾದರಿಯಲ್ಲಿ ಉತ್ತರ ನೀಡುವುದಾಗಿ ನಿನ್ನೆ ರಾತ್ರಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದರು. ಅಂತೆಯೇ ಇಂದು ದಾಳಿ ಆಗಿದ್ದು, ಕುಮಾರಸ್ವಾಮಿ ಅವರು ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು, ಸಿಬಿಐ ಅಧಿಕಾರಿಗಳನ್ನೇ ಬಂಧಿಸಲು ಆದೇಶಿಸಿದ್ದರು, ಆ ನಂತರ ಅಹೋರಾತ್ರಿ ಪ್ರತಿಭಟನೆಯನ್ನೂ ಮಾಡಿದ್ದರು. ಕುಮಾರಸ್ವಾಮಿ ಅವರೂ ಸಹ ಇದನ್ನೇ ಅನುಸರಿಸುವಂತೆ ಕಾಣುತ್ತಿದೆ. ಅವರಿಗೆ ಕಾಂಗ್ರೆಸ್ ಮುಖಂಡರು ಸಹ ಸಾಥ್ ನೀಡುತ್ತಿದ್ದಾರೆ.












Click it and Unblock the Notifications