ಒಕ್ಕಲಿಗ ಸಮುದಾಯ ನಾಯಕರ ಮುಗಿಸಲು ಕಾಂಗ್ರೆಸ್ ಪ್ಲಾನ್: ಆರ್.ಅಶೋಕ್
ಬೆಂಗಳೂರು, ಮೇ 19: ಕರ್ನಾಟಕದಲ್ಲಿ ಕೊಲೆ, ದರೋಡೆ ಸೇರಿದಂತೆ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ಈ ಕುರಿತಂತೆ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಮೇಲೆ ಬಿಜೆಪಿ ವಾಗ್ದಾಳಿ ನಡೆಸಿದೆ. ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್ ಮಾಡಿ ನಡೆಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ದೂರಿದೆ.
ಭಾನುವಾರ ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ ಇದಕ್ಕೆಲ್ಲ ಕಾಂಗ್ರೆಸ್ ನೇರ ಕಾರಣ ಎಂದು ಅವರು ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ ಎಂದರು.
ಒಕ್ಕಲಿಗರನ್ನು ಮುಗಿಸಲು 'ಕೈ' ನಾಯಕರು ಪ್ಲಾನ್
ವಕೀಲ ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್ ಅವರಿಗಿದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಡಿಸಿಎಂ ಡಿಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ.

ಗೃಹ ಇಲಾಖೆಯನ್ನು ಹೈಜಾಕ್ ಮಾಡಲಾಗಿದೆ
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದು ಆರೋಪಿಸಿದರು.
ಪ್ರಜ್ವಲ್ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ ಏಕೆ ಎಂದು ಪ್ರಶ್ನಿಸಿರು. ಹೀಗೆ ಕಾಂಗ್ರೆಸ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದು ದೂರಿದರು.
ಮಾಜಿ ಪ್ರಧಾನಿ ಭೇಟಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.












Click it and Unblock the Notifications