H.Y.Meti Passes Away: ಕಾಂಗ್ರೆಸ್ ಶಾಸಕ ಎಚ್.ವೈ.ಮೇಟಿ ನಿಧನ
H.Y.Meti Passes Away: ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ.ಮೇಟಿ ಅವರು (79) ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಇಂದು (ನವೆಂಬರ್ 4) ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು. ಇಂದು ಮೇಟಿ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ನಾಳೆ ಅಂದರೆ ನವೆಂಬರ್ 5ರ ಬುಧವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಎಚ್.ವೈ.ಮೇಟಿ ಅವರು 5 ಬಾರಿ ಶಾಸಕ ಹಾಗೂ 2 ಬಾರಿ ಸಚಿವರಾಗಿಯೂ ಆಯ್ಕೆ ಆಗಿದ್ದಾರೆ. ಮೂರು ಬಾರಿ ಬಾರಿ ಗುಳೇದಗುಡ್ಡ, 2 ಬಾರಿ ಬಾಗಲಕೋಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಹಿಂದೆ ಅವರು ಅಬಕಾರಿ ಹಾಗೂ ಅರಣ್ಯ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ಧಾರೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಂಎಲ್‌ಎ ಆಗಿದ್ದ ಎ.ವೈ.ಮೇಟಿ ಅವರು, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ ಅವರು, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆ ಆದರು.
1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ಎಚ್.ಡಿ.ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆ ಆದರು. 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆಲುವು ಸಾಧಿಸಿದರು.
2008ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಎಚ್.ವೈ.ಮೇಟಿ ಅವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ನಂತರ 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆದಿದ್ದ ಅವರು, ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಅವರು, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ನಿಂದ ಸ್ಫರ್ಧಿಸಿ ಗೆಲುವು ಸಾಧಿಸಿದರು.
ಇನ್ನೂ ಅನಾರೋಗ್ಯ ಹಿನ್ನೆಲೆ ಇಂದು ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ನಾಳೆ ನವೆಂಬರ್ 5ರಂದು ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಹಾಗೂ ಎಲ್ಲಾ ಪಕ್ಷಗಳ ಪ್ರಮುಖ ರಾಜಕೀಯ ನಾಯಕರು ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ.
ಇದೀಗ ಎಚ್.ವೈ.ಮೇಟಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಇನ್ನೂ ಇದೇ ವೇಳೆ ಹಲವು ರಾಜಕೀಯ ನಾಯಕರು ಎಚ್.ವೈ.ಮೇಟಿ ಅವರು ತಮ್ಮ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆಯೂ ಮಾತನಾಡಿದ್ದಾರೆ.












Click it and Unblock the Notifications