ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ಖಂಡಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಲಿರುವ ಕಾಂಗ್ರೆಸ್
ಮಂಡ್ಯದಲ್ಲಿ ಮಾತನಾಡಿದ್ದ ಸಚಿವ ಅಶ್ವತ್ಥ ನಾರಾಯಣ್, ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಹೇಳಿದ್ದರು.
ಬೆಂಗಳೂರು, ಫೆಬ್ರವರಿ. 17: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನೆ ಅವರಂತೆಯೇ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿ ತೀವ್ರ ಮುಜುಗರಕ್ಕೆ ಒಳಗಾಗಿರುವ ಅಶ್ವತ್ಥ ನಾರಾಯಣ್ ವಿರುದ್ಧ ಕಾಂಗ್ರೆಸ್ ಬೀದಿಗಿಳಿದಿದೆ.
ಗುರುವಾರ ಕಾಜ್ಯದ ಹಲವೆಡೆ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ಮಂಡ್ಯದಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಕರೆ ನೀಡಿದ್ದಾರೆ ಎಂದು ಅವರ ಹೇಳಿಕೆ ಖಂಡಿಸಿ ಶುಕ್ರವಾರ ಕಾಂಗ್ರೆಸ್ನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಮೆರವಣಿಗೆ ಆಯೋಜಿಸಲಾಗಿದೆ.

ಕಾಂಗ್ರೆಸ್ ಭವನದಿಂದ ಮೆರವಣಿಗೆ ಹೊರಟು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಹಾಗೂ ಬೆಂಗಳೂರು ದಕ್ಷಿಣ, ಉತ್ತರ ಕೇಂದ್ರ ಜಿಲ್ಲಾ ಅಧ್ಯಕ್ಷರುಗಳ ನೇತೃತ್ವದಲ್ಲಿ ಸಿಎಂ ಮನೆಗೆ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ.
ಅಶ್ವತ್ಥ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, "ವಿಪಕ್ಷ ನಾಯಕ ಹಾಗೂ ನಮ್ಮ ನಾಯಕರಾದ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನರಂತೆ ಮೇಲಕ್ಕೆ ಕಳುಹಿಸಿ ಎಂದು ಆಡಿರುವ ಮಾತುಗಳು ಅವರ ಗೋಡ್ಸೆ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ರಾಜ್ಯದ ಮಹಾಜನತೆಯ ಮುಂದೆ ಕ್ಷಮೆಯಾಚಿಸಬೇಕು" ಎಂದು ಆಗ್ರಹಿಸಿದ್ದಾರೆ.

ತಮ್ಮ ಮಾತುಗಳ ಬಗ್ಗೆ ಸ್ಪಷ್ಟನೆ ನಿಡಿದ್ದ ಸಚಿವ ಅಶ್ವತ್ಥ ನಾರಾಯನ್, "ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ" ಎಂದು ಗುರುವಾರ ಟ್ವೀಟ್ ಮಾಡಿದ್ದಾರೆ.
"ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ" ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.












Click it and Unblock the Notifications