ಬೆಂಗಳೂರು: ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಜಾರಿಗೆ ಒತ್ತಾಯ, ಮಾ.24ಕ್ಕೆ ಕಾಂಗ್ರೆಸ್‌ನಿಂದ ಮೆರವಣಿಗೆ
ಬೆಂಗಳೂರು, ಮಾರ್ಚ್ 23: ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ನೀಡಿದ್ದ ಮೀಸಲಾತಿ ಹೆಚ್ಚಳವನ್ನು ಜಾರಿಗೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿ ಮಾಡಲಿದೆ.
ಚುನಾವಣೆ ಸಮೀಪಿಸುತ್ತಿರುವ ಸಂಬಂಧ ಬಿಜೆಪಿ ಎಸ್‌ಸಿ ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಕಾಂಗ್ರೆಸ್ ವಿರುದ್ಧ ಪ್ರಚಾರಕ್ಕೆ ಬಳಸಿಕೊಳ್ಳುತ್ತಿತ್ತು. ಅದಕ್ಕೆ ಸದ್ಯ ಕಾಂಗ್ರೆಸ್ ನಾಯಕರು ಬ್ರೇಕ್ ಹಾಕಲು ಸಜ್ಜಾಗಿದ್ದಾರೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ವತಿಯಿಂದ ಶುಕ್ರವಾರ ಮಾರ್ಚ್ 24 ರಂದು ರಾಜಭವನವರೆಗೆ ಮೆರವಣಿಗೆ ನಡೆಯಲಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು, ನೂರಾರು ಕೈ ಕಾರ್ಯಕರ್ತರು ಪಾಲ್ಗೊಂಡು ಬಿಜೆಪಿ ವಿರುದ್ಧ ಘೋಷಣೆ ಕೂಗಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಳಿ, ಬಿಜೆಪಿ ಸರ್ಕಾರದ ಭರವಸೆಯಂತೆ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಜಾರಿಗೆ ಒತ್ತಾಯಿಸಿ ಮನವಿ ಮಾಡಲಿದ್ದಾರೆ.
ಬಿಜೆಪಿ ಸರ್ಕಾರ ನೀಡಿದ ಭರವಸೆಯಂತೆ ನಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಸಂಬಂಧ ಸಂಸತ್ತಿನಲ್ಲಿ ಭಾರಿ ಚರ್ಚೆಯಾಗಿದೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಅವರು ಮೀಸಲಾತಿ ಕುರಿತು ಬಿಜೆಪಿ ಘೋಷಿಸಿದ ಕಾಯ್ದೆ ಬರೀ ಬೋಗಸ್ ಎಂದು ಜರಿದಿದ್ದರು.

ಬಿಜೆಪಿಯಿಂದ ಮೀಸಲಾತಿ ಘೋಷಣೆ ಬಳಿಕ ಆಗಿದ್ದೇನು?
ಕರ್ನಾಟಕ ರಾಜ್ಯ ಆಡಳಿತಾರೂಢ ಬಿಜೆಪಿ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಘೋಷಿಸಿತ್ತು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇಕಡಾ 15 ರಿಂದ ಶೇಕಡಾ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3 ರಿಂದ ಶೇಕಡಾ 7ಕ್ಕೆ ಹೆಚ್ಚಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಿತ್ತು.
ಆದರೆ ಬಿಜೆಪಿ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ ಎಂದು ತಿಳಿದು ಬಂದಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ನೀಡಿದ ಘೋಷಣೆಯಂತೆ ಮೀಸಲಾತಿ ಹೆಚ್ಚಿಸಿ ಅದರ ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಿಲ್ಲ ಎನ್ನಲಾಗಿದೆ. ಈ ಸಂಬಂಧ ಇತ್ತೀಚೆಗೆ ಸಂಸತ್ತಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆಗ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರು, ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು.
ಆಗ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಕೆಂಡಾಮಂಡಲವಾದರು. ಬಿಜೆಪಿ ಅತ್ಯಂತ ಮೋಸದ ಪಕ್ಷ. ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಮೋಸ ಮಾಡುತ್ತಿದೆ. ಕೇವಲ ರಾಜಕೀಯವಾಗಿ ಆಶ್ವಾಸನೆ ನೀಡಿದೆ. ನಾವು ಅವರಿಗೆ ಮೀಸಲಾತಿ ಹೆಚ್ಚಿಸುತ್ತಿದ್ದೇವೆ ಎಂದು ಸುಳ್ಳು ಹೇಳಿದ್ದಾರೆ ಎಂದು ಸರ್ಕಾರದ ವಿರುದ್ಧ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುಜೇವಾಲ್ ಕಿಡಿ ಕಾರಿದ್ದರು.
ಇತ್ತೀಚೆಗೆ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಗುಡುಗಿದ್ದರು. ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ಹೇಗೆ ದ್ರೋಹ ಬಗೆಯುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದರು. ಬಳಿಕ ಈ ಸಂಬಂಧ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಶುಕ್ರವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ರಾಜಭವನ ವರೆಗೆ ಮೆರವಣಿ ಹಮ್ಮಿಕೊಳ್ಳಲಾಗಿದೆ.












Click it and Unblock the Notifications