ಸಿಬಿಐನಲ್ಲೇ ಗಂಡಾಗುಂಡಿ: ಕಾಂಗ್ರೆಸ್‌ನಿಂದ ಬೆಂಗಳೂರಲ್ಲಿ ಪ್ರತಿಭಟನೆ
ಬೆಂಗಳೂರು, ಅಕ್ಟೋಬರ್ 26: ಪ್ರಧಾನಮಂತ್ರಿ ನರೇಂದ್ರ ಮೋದಿ ಶಾಮೀಲಾಗಿದ್ದಾರೆ ಎನ್ನಲಾದ ರಫೇಲ್ ಡೀಲ್ ಹಗರಣ ಸೇರಿದಂತೆ ಪ್ರಮುಖ ಹಗರಣಗಳ ತನಿಖೆ ನಡೆಸುತ್ತಿದ್ದ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕ್ರಮ ವಿರೋಧಿಸಿ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಶುಕ್ರವಾರ ಬೆಂಗಳೂರಿನ ಸಿಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಕರೆ ಮೇರೆಗೆ ದೇಶದ ಎಲ್ಲೆಡೆ ಸಿಬಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ಸಿಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಸಂಗ್ರಹಿಸಿದ್ದರು ಅಲ್ಲದೇ ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಕೆಲವು ಮಹತ್ವದ ಹಗರಣಗಳ ಕುರಿತು ಅಲೋಕ್ ವರ್ಮಾ ದಾಖಲೆಗಳನ್ನು ಸಂಗ್ರಹಿಸಿ ತನಿಖೆ ಆರಂಭಿಸಿದ್ದರು.

ಈ ಕಾರಣಕ್ಕಾಗಿಯೇ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಇಡೀ ಸಿಬಿಐ ಸಂಸ್ಥೆಯನ್ನೇ ಬುಡಮೇಲು ಮಾಡುವಲ್ಲಿ ಮೋದಿ ಶಾಮೀಲಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗಷ್ಟೇ ಹೇಳಿದ್ದರು.
ಇದರ ನಡುವೆಯೇ ಸಿಬಿಐನಲ್ಲಿ ಆಂತರಿಕ ಕಲಹ ಉತ್ತುಂಗಕ್ಕೇರಿರುವ ಹಿನ್ನೆಲೆಯಲ್ಲಿ ಸಿಬಿಐ ಮಹಾ ನಿರ್ದೇಶಕ ಹಾಗೂ ಸಿಬಿಐ ಹೆಚ್ಚುವರಿ ನಿರ್ದೇಶಕ ಇಬ್ಬರನ್ನೂ ರಜೆ ಮೇಲೆ ಕಳುಹಿಸಿ ವಿವಾದವನ್ನು ತಣ್ಣಗಾಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಶುಕ್ರವಾರ ಪ್ರತಿಭಟನೆ ಆರಂಭಿಸಿದೆ. ನರೇಂದ್ರ ಮೋದಿ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications