ಕಾಂಗ್ರೆಸ್‌ನ ಹಿನ್ನಡೆ : ಸಿ.ವಿ.ರಾಮನ್ ನಗರದ ಪಿ.ರಮೇಶ್ ಜೆಡಿಎಸ್‌ಗೆ ಸೇರ್ಪಡೆ
ಬೆಂಗಳೂರು, ಏಪ್ರಿಲ್ 13 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಮೊದಲೇ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ಸಿ.ವಿ.ರಾಮನ್ ನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪಿ.ರಮೇಶ್ ಜೆಡಿಎಸ್ ಸೇರಿದ್ದಾರೆ.
ಶುಕ್ರವಾರ ಪಿ.ರಮೇಶ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಹೊಸ್ತಿಲಲ್ಲಿ ಹಿನ್ನಡೆ ಉಂಟಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತರಾದ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸಿ.ವಿ.ರಾಮನ್ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಪಿ.ರಮೇಶ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ರಮೇಶ್ ಮಹದೇವಪ್ಪ ಹೆಸರು ಕೇಳಿ ಬಂದಾಗ ಅಸಮಾಧಾನ ಹೊರ ಹಾಕಿದ್ದರು. ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಆದ್ಯತೆ ನೀಡಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ಆದ್ದರಿಂದ, ಪಿ.ರಮೇಶ್ ಅವರು ಜೆಡಿಎಸ್ ಪಕ್ಷ ಸೇರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರು ಸಿ.ವಿ.ರಾಮನ್ ನಗರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಸಿ.ವಿ.ರಾಮನ್ ಕ್ಷೇತ್ರ ಸದ್ಯ ಬಿಜೆಪಿಯ ವಶದಲ್ಲಿದೆ. ಬಿಜೆಪಿಯ ಎಸ್.ರಾಘು 2013ರ ಚುನಾವಣೆಯಲ್ಲಿ 53,444 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್‌ನ ಪಿ.ರಮೇಶ್ 44,982ಮತಗಳನ್ನು ಪಡೆದಿದ್ದರು. ಜೆಡಿಎಸ್‌ನ ಜೆ.ಹೇಮಲತಾ ಸುರೇಶ್ ರಾಜ್ 3,179 ಮತಗಳನ್ನು ಪಡೆದಿದ್ದರು.












Click it and Unblock the Notifications