ದೀಪಾವಳಿ ಹಬ್ಬ; ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ
ಬೆಂಗಳೂರು, ನವೆಂಬರ್ 05: ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬ 2023ರ ಹಿನ್ನಲೆಯಲ್ಲಿ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಸಿರು ಪಟಾಕಿ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ. ದಯಾನಂದ್ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. "ದೀಪಾವಳಿ ಹಬ್ಬವನ್ನು ನವೆಂಬರ್ 11 ರಿಂದ 15ರವರೆಗೆ ಆಚರಿಸಲಾಗುತ್ತಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಈ ಬಾರಿಯೂ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಬಳಸುವಂತಿಲ್ಲ" ಎಂದರು.

"ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿನ್ನೆಯಿದ್ದು ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು" ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
10 ಗಂಟೆ ತನಕ ಸಿಡಿಸಲು ಅವಕಾಶ; ದೀಪಾವಳಿ ಹಬ್ಬದ ಸಂಧರ್ಭದಲ್ಲಿ ರಾತ್ರಿ 8 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ ಮತ್ತು 125 ಡೆಸಿಬಲ್ ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ನಿಷೇಧಿಸಲಾಗಿದೆ. 100 ಡೆಸಿಬಲ್‌ಗಳಿಗಿಂತ ಹೆಚ್ಚು ಇದ್ದರೆ ಅವುಗಳು ಹಸಿರು ಪಟಾಕಿ ಎನಿಸಿಕೊಳ್ಳುವುದಿಲ್ಲ ಅದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ಧ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದದಿದ್ದಲ್ಲಿ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು ಎಂದು ಕರೆ ನೀಡಿದರು.
ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆಯಾ ಭಾಗದ ಮುಖ್ಯಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿ, ತಹಶೀಲ್ದಾರ್, ಜಿಲ್ಲಾ ಪರಿಸರ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಅಧಿಕಾರಿಗಳು, ಆಸಕ್ತ ನಾಗರೀಕರು ಹಾಗೂ ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪತ್ರಿನಿಧಿಗಳ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚನೆ ಮಾಡಬೇಕು ಎಂದು ಸಲಹೆ ನೀಡಿದರು.
ತಹಶೀಲ್ದಾರ್, ಪಿಡಿಓಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕು ಎಂದು ಹೇಳಿದರು.
ಪಟಾಕಿ ಬಳಕೆ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್‌ಗಳಲ್ಲಿ ಕರಪತ್ರ/ ಭಿತ್ತಿಪತ್ರಗಳನ್ನು ಹಂಚುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವಂತೆ ಸೂಚಿಸಿದರು.
ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುವ ನಿರೀಕ್ಷೆಯಿದ್ದು ದೀಪಾವಳಿ ಹಬ್ಬ ಮುಗಿಯುವವರೆಗೂ ಜಿಲ್ಲೆಯ ಎಲ್ಲಾ ಗಡಿಭಾಗಗಲ್ಲಿ ಚೆಕ್‌ಪೋಸ್ಟ್ ಗಳನ್ನು ನಿರ್ಮಿಸುವಂತೆ ತಿಳಿಸಿದರು.












Click it and Unblock the Notifications