ಬೆಂಗಳೂರಲ್ಲಿ 'ಡೆಂಗ್ಯೂ' ನಿಯಂತ್ರಣಕ್ಕೆ ಸರ್ಕಾರದ ಕ್ರಮಗಳು ಇವು: ದಿನೇಶ್ ಗುಂಡೂರಾವ್
ಬೆಂಗಳೂರು, ಸೆಪ್ಟಂಬ್ 07: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಾಗಿದ್ದು, ಅದರ ಮೇಲ್ವಿಚಾರಣೆಗಾಗಿ 'ಡೆಂಗ್ಯೂ ಮೇಲ್ವಿಚಾರಣ ತಂತ್ರಾಂಶ' ವನ್ನು ಅನಾವರಣಗೊಳಿಸುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಯುವುದು ಸೇರಿದಂತೆ ಹಲವು ಆರೋಗ್ಯ ವಿಚಾರಗಳ ಬಿಬಿಎಂಪಿಯಲ್ಲಿ ಗುರುವಾರ ಅವರು ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನಗರದಲ್ಲಿ ಕಳೆದ 2 ತಿಂಗಳಿಂದ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಔಷಧಿ ಸಿಂಪಡಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಜುಲೈ ನಲ್ಲಿ 1649, ಆಗಸ್ಟ್ ನಲ್ಲಿ 1589, ಸೆಪ್ಟಂಬರ್ ನಲ್ಲಿ 416 ಪ್ರಕರಣಗಳು ವರದಿ ಆಗಿವೆ. ಮಳೆನೀರು ನಿಂತ ಕಾರಣ ಸೊಳ್ಳೆಗಳ ಲಾರ್ವಾ ಉತ್ಪತ್ತಿ ಆಗುವುದರಿಂದ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ. ಈ ಸಂಬಂಧ ಎಲ್ಲಾ ಕಡೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಈ ಸಂಬಂಧ ವೈಧ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪಾಲಿಕೆಯ ವ್ಯಾಪ್ತಿಯಲ್ಲಿ 6 ಹೈಟೆಕ್ ಲ್ಯಾಬ್ ಗಳಿವೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್ ಗಳಲ್ಲಿ ಸಂಗ್ರಹ ಮಾಡುವ ಬ್ಲಡ್ ಸ್ಯಾಂಪಲ್ ಗಳನ್ನು ಲ್ಯಾಬ್ ಗಳಿಗೆ ಕಳುಹಿಸಲು ರವಾನೆ (ಹಬ್ ಅಂಡ್ ಸ್ಪೋಕ್ ಮಾಡಲ್) ಹಾಗೂ ಇನ್ನಿತರೆ ಸೌಲಭ್ಯಗಳ ಅವಶ್ಯಕತೆ ಇದೆ. ಅದಕ್ಕೆ ಅನುದಾನ ಬೇಕಾಗಿದ್ದು, ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಾಲಿಕೆ ಸಹಯೋಗದೊಂದಿಗೆ NHM ಅನುದಾನದಿಂದ ಒದಗಿಸಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಪ್ರತ್ಯೇಕ ಜಿಲ್ಲೆಯಾಗಿ ಪರಿಗಣನೆ?
ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರ ಸಂಖ್ಯೆಯನ್ನು ಹೆಚ್ಚಿಸುವ ಜೊತೆಗೆ ಅವರ ವೇತನವನ್ನು ಸಹ ಕಾರ್ಮಿಕ ಇಲಾಖೆ ಕಾಯ್ದೆ ಕನಿಷ್ಟ ವೇತನ ಹೆಚ್ಚಳ ಮಾಡಬೇಕಿದೆ.
ನಗರದಲ್ಲಿ ಎಲ್ಲಾ ಆರೋಗ್ಯ ಸೇವೆಗಳನ್ನು ಸಮನಾಂತರವಾಗಿ ತರುವ ಉದ್ದೇಶದಿಂದ ಬಿಬಿಎಂಪಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಪರಿಗಣಿಸಲು ನಿರ್ಧಾರ ಮಾಡಲಾಗಿದೆ, ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಲೋಕಾರ್ಪಣೆ
ಡೆಂಗ್ಯೂ ಪ್ರಕರಣಗಳನ್ನು ಒಂದು ತಿಂಗಳ ಮುಂಚಿತವಾಗಿಯೇ ತಿಳಿಯುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಒಂದು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಲಿದ್ದು, ಕೂಡಲೆ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು.
ನಮ್ಮ ಕ್ಲಿನಿಕ್ ಸೇವೆ
ಬಿಬಿಎಂಪಿ ವ್ಯಾಪ್ತಿಯಲ್ಲಿ 50 ನಮ್ಮ ಕ್ಲಿನಿಕ್ ಗಳು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ. ಈ ಸಮಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಲ್ಯಾಬ್ ಟೆಕ್ನಿಷಿಯನ್ ಗಳು ಹಾಗೂ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು, ನರ್ಸ್‌ಗಳಿರವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಎನ್.ಹೆಚ್.ಎಂ ನ ಅಭಿಯಾನ ವೀಕ್ಷಕರಾದ ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.












Click it and Unblock the Notifications