ಡಿ. ಜೆ. ಹಳ್ಳಿ ಗಲಭೆ; ಆರೋಪಿ ನವೀನ್‌ಗೆ ಜಾಮೀನು ಮಂಜೂರು
ಬೆಂಗಳೂರು, ಅಕ್ಟೋಬರ್ 22 : ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಪಿ. ನವೀನ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಗಲಭೆಯ ಕುರಿತು ಹಲವು ಪ್ರಕರಣ ದಾಖಲಾಗಿದ್ದು, ಎರಡು ಎಫ್‌ಐಆರ್ ಕುರಿತು ಎನ್‌ಐಎ ತನಿಖೆ ನಡೆಯುತ್ತಿದೆ.
ಗುರುವಾರ ಪಿ. ನವೀನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನವೀನ್ ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ. ನವೀನ್ ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದಿತ್ತು.
ನವೀನ್ ಪರ ವಕೀಲರು ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯನ್ನು 60ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ಆದ್ದರಿಂದ, ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.

ಆಗಸ್ಟ್ 11ರಂದು ರಾತ್ರಿ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಗಲಭೆಗೆ ಸಂಬಂಧಿಸಿದಂತೆ 400ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ.
ನವೀನ್ ಪರವಾಗಿ ಇರುವ ಸಾಕ್ಷ್ಯಗಳು ಡಿಜಿಟಲ್ ರೂಪದಲ್ಲಿವೆ. ಅವುಗಳನ್ನು ನಾಶಪಡಿಸುವ ಸಾಧ್ಯತೆ ಇಲ್ಲ. ಆದ್ದರಿಂದ, ಜಾಮೀನು ನೀಡಬೇಕು ಎಂದು ನವೀನ್ ಪರ ವಕೀಲರು ಮನವಿ ಮಾಡಿದ್ದರು.
ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಅರಂಭವಾದ ಕೆಲವೇ ಗಂಟೆಗಳಲ್ಲಿ ನವೀನ್ ಬಂಧಿಸಲಾಗಿತ್ತು. ಗಲಭೆಗೆ ಕೋರರರು ನವೀನ್ ಪೊಲೀಸ್ ಠಾಣೆಯಲ್ಲಿ ಇದ್ದಾನೆ ಎಂದು ಶಂಕಿಸಿ ಮುತ್ತಿಗೆ ಹಾಕಿದ್ದರು. ಠಾಣೆಗೆ ಬೆಂಕಿ ಹಚ್ಚಿದ್ದರು.












Click it and Unblock the Notifications