ಕೃಷಿ ಅಧಿಕಾರಿಗಳ ನೇಮಕಾತಿ ಗೊಂದಲ: ಪ್ರತಿಭಟನಾ ನಿರತ GKVK ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿರುವ ಗೊಂದಲವನ್ನು ಶೀಘ್ರದಲ್ಲೇ ಕಾನೂನಾತ್ಮಕವಾಗಿ ಬಗೆಹರಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನಾನಿರತ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಮನವಿ ಸಲ್ಲಿಸಿದ ವಿದ್ಯಾರ್ಥಿಗಳ ಮನವಿಯನ್ನಾ ಖುದ್ದು ಆಲಿಸಿದ ಅವರು, ಸಮಸ್ಯೆಯನ್ನು ಬಗೆಹರಿಸಲು ಈಗಾಗಲೇ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

DK Shivakumar

ಜಿಕೆವಿಕೆ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು?

ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 900ಕ್ಕೂ ಹೆಚ್ಚು ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಆದರೆ , ಈ ಹುದ್ದೆಗಳಿಗೆ ಕೃಷಿ ಪದವೀಧರರ ಜೊತೆಗೆ ಬಿ.ಇ ಮತ್ತು ಬಿ.ಟೆಕ್ ಕೋರ್ಸ್‌ಗಳಲ್ಲಿ ಬಯೋ-ಕೆಮಿಸ್ಟ್ರಿ ಓದಿದ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಕೃಷಿ ಕ್ಷೇತ್ರಕ್ಕೆ ಸಂಬಂಧಿಸದ ಇಂಜಿನಿಯರಿಂಗ್ ಪದವೀಧರರಿಗೆ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಅವಕಾಶ ನೀಡಿದ್ದರಿಂದ , ನಾಲ್ಕು ವರ್ಷಗಳ ಕಾಲ ಕೃಷಿ ವಿಜ್ಞಾನವನ್ನು ಆಳವಾಗಿ ಅಭ್ಯಾಸ ಮಾಡಿದ ನಿಜವಾದ ಕೃಷಿ ಪದವೀಧರರಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಆರೋಪಿಸಿ ಜಿಕೆವಿಕೆ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು.

ಜಿಕೆವಿಕೆ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಡಿ ಕೆ ಶಿವಕುಮಾರ್

ನಗರದಲ್ಲಿ ನಡೆಯುತ್ತಿರುವ 14ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಕಾರ್ಯಕ್ರಮದ ಸ್ಥಳದ ಬಳಿ ಮಂಗಳವಾರ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳ ಮನವಿ ಪತ್ರದೊಂದಿಗೆ ಆಗಮಿಸಿದ್ದರು. ಸಮ್ಮೇಳನ ಸ್ಥಳದ ಬಳಿ ವಿದ್ಯಾರ್ಥಿಗಳನ್ನು ಗಮನಿಸಿದ ಡಿ.ಕೆ. ಶಿವಕುಮಾರ್ ಅವರು, ಕೂಡಲೇ ಅವರನ್ನ ತಮ್ಮ ಹತ್ತಿರಕ್ಕೆ ಕರೆದರು.

ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಮರದ ನೆರಳಿಗೆ ಕರೆದುಕೊಂಡು ಹೋದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ನಿಖರವಾಗಿ ಯಾವ ಹಂತದಲ್ಲಿ ಸಮಸ್ಯೆ ಉಂಟಾಗಿದೆ ಮತ್ತು ನಿಯಮಗಳಲ್ಲಿ ಏನಾಗಿದೆ ಎಂಬುದರ ಕುರಿತು ವಿವರವಾದ ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳು ತಾವು ಎದುರಿಸುತ್ತಿರುವ ಆತಂಕವನ್ನು ವಿವರವಾಗಿ ತಿಳಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ನಿಯಮಗಳ ತಿದ್ದುಪಡಿಯೇ ಸಮಸ್ಯೆಗೆ ಕಾರಣ

ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ , "ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಮಾಡಲಾದ ತಿದ್ದುಪಡಿಯಿಂದಾಗಿಯೇ ಕೃಷಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಈ ಗೊಂದಲ ಸೃಷ್ಟಿಯಾಗಿದೆ. ಈ ಸಮಸ್ಯೆಯನ್ನು ಕಾನೂನಾತ್ಮಕ ಚೌಕಟ್ಟಿನಲ್ಲಿ ಪರಿಶೀಲಿಸಿ, ಕೃಷಿ ಪದವೀಧರರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನ್ಯಾಯ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ " ಎಂದು ಸ್ಪಷ್ಟಪಡಿಸಿದರು.

ಪ್ರತಿಭಟನೆ ಕೈಬಿಡಲು ವಿದ್ಯಾರ್ಥಿಗಳಿಗೆ ಮನವಿ

"ನಮ್ಮ ಸರ್ಕಾರವು ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನ ನಿರ್ಮೂಲನೆ ಮಾಡಲು ಬದ್ಧವಾಗಿದೆ. ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ. ಕೃಷಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಕೂಡಲೇ ತಮ್ಮ ಪ್ರತಿಭಟನೆಯನ್ನು ಕೈಬಿಟ್ಟು ಓದಿನ ಕಡೆ ಗಮನ ಹರಿಸಬೇಕು " ಎಂದು ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದರು. ಸರ್ಕಾರದ ಉನ್ನತ ಮಟ್ಟದಿಂದಲೇ ಸಕಾರಾತ್ಮಕ ಸ್ಪಂದನೆ ಹಾಗೂ ಭರವಸೆ ಸಿಕ್ಕಿರುವುದರಿಂದ ಕೃಷಿ ವಿವಿ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+