DK Shivakumar: ಅಮಿತ್ ಶಾ ಇರುವ ಹೋಟೆಲ್‌ಗೆ ಬಂದ ಡಿ.ಕೆ ಶಿವಕುಮಾರ್; ಕಾರಣ?
2023ರ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಮತ್ತು ನಾಯಕರು ತಂತ್ರ- ಪ್ರತಿತಂತ್ರ ಹೆಣೆಯುತ್ತಿದ್ದಾರೆ. ರಾಜ್ಯದ ಮತದಾರರ ಮನವೊಲಿಸಲು ಮತ್ತು ಎದುರಾಳಿ ಪಕ್ಷಗಳನ್ನು ಹಣೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್ ಶಾ ಕೂಡ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಇಂದು (ಏಪ್ರಿಲ್ 21) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವಿಜಯಪುರದಲ್ಲಿ ರೋಡ್ ಶೋನಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಆದರೆ, ದೇವನಹಳ್ಳಿ ಸುತ್ತಮುತ್ತ ಮಳೆ ಸುರಿದ ಕಾರಣ ಕೊನೆಯ ಕ್ಷಣದಲ್ಲಿ ರೋಡ್ ಶೋ ರದ್ದುಗೊಂಡಿತು.

ನಂತರ ವಿಮಾನ ನಿಲ್ದಾಣದಿಂದ ನೇರವಾಗಿ ಬೆಂಗಳೂರಿನ ತಾಜ್‌ವೆಸ್ಟ್ ಎಂಡ್ ಹೋಟೆಲ್‌ಗೆ ಬಂದ ಅಮಿತ್ ಶಾ ಅವರು ಶುಕ್ರವಾರ ರಾತ್ರಿ 7.45ರಿಂದ 9 ಗಂಟೆಯವರೆಗೆ ರಾಜ್ಯ ಬಿಜೆಪಿ ಪ್ರಮುಖ ನಾಯಕರ ಜೊತೆ ಮಹತ್ವದ ಸಭೆ ನಡೆಸಿದರು.
ಅಮಿತ್ ಶಾ ಆಗಮನದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಚುನಾವಣಾ ಉಸ್ತುವಾರಿ ಕೆ. ಅಣ್ಣಾಮಲೈ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವು ರಾಜ್ಯ ನಾಯಕರು ಒಬ್ಬೊಬ್ಬರಾಗಿ ಸಭೆಗೆ ಆಗಮಿಸಿದರು.
ಬಿಜೆಪಿ ನಾಯಕರೊಂದಿಗಿನ ಸಭೆಯ ಬಳಿಕ ಶುಕ್ರವಾರ ರಾತ್ರಿ ರೇಸ್ಕೋರ್ಸ್ ರಸ್ತೆಯ ತಾಜ್‌ವೆಸ್ಟ್ ಎಂಡ್ ಹೋಟೆಲ್ನಲ್ಲೇ ಅಮಿತ್ ಶಾ ವಾಸ್ತವ್ಯ ಹೂಡಲಿದ್ದಾರೆ. ನಂತರ ಶನಿವಾರ ಬೆಳಿಗ್ಗೆ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಂತರ ಮಧ್ಯಾಹ್ನ 12 ಗಂಟೆಗೆ ದೆಹಲಿಗೆ ವಾಪಸ್ಸಾಗಲಿದ್ದಾರೆ.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ತಾಜ್‌ವೆಸ್ಟ್ ಎಂಡ್ ಹೋಟೆಲ್‌ಗೆ ಆಗಮಿಸಿದ್ದು ಅಚ್ಚರಿ ಮೂಡಿಸಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಕೂಡ ತಾಜ್‌ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಅವರನ್ನು ಭೇಟಿಯಾಗಲು ಡಿ.ಕೆ. ಶಿವಕುಮಾರ್ ಬಂದಿದ್ದರು.
ಚುನಾವಣೆ ಘೋಷಣೆಯಾದಾಗಿನಿಂದ ರಾಜ್ಯದಲ್ಲೇ ಠಿಕಾಣಿ ಹೂಡಿರುವ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ, ಪ್ರತಿದಿನ ಕಾಂಗ್ರೆಸ್ ಪಕ್ಷದ ಸಭೆ ನಡೆಸಿ, ಚುನಾವಣಾ ತಂತ್ರ ಹೆಣೆಯುತ್ತಿದ್ದಾರೆ.
ಇನ್ನು ಬಿಜೆಪಿಯ ಚುನಾವಣಾ ಚಾಣಕ್ಯ ಕರ್ನಾಟಕಕ್ಕೆ ಬಂದಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರತಿತಂತ್ರ ರೂಪಿಸುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದ್ದಾರೆ ಎನ್ನಲಾಗಿದೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಈಗಾಗಲೇ ನಾಮಪತ್ರ ಸಲ್ಲಿಕೆ ಮತ್ತು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಏಕಕಾಲದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮತ್ತು ಅಂದೇ ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications