ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಕೆಗೆ ಕೇಂದ್ರ ರಕ್ಷಣಾ ಸಚಿವರಿಗೆ ಡಿಕೆಶಿ ಮನವಿ
ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮಹತ್ವದ ಪ್ರಸ್ತಾವನೆಯೊಂದನ್ನು ಸಲ್ಲಿಸಿದ್ದಾರೆ. ನಗರದ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ವ್ಯಾಪ್ತಿಯಲ್ಲಿ ಕಟ್ಟಡಗಳ ಎತ್ತರದ ಮೇಲೆ ವಿಧಿಸಲಾಗಿರುವ ನಿರ್ಬಂಧಗಳು ಪ್ರಸ್ತುತ ಬೆಂಗಳೂರಿನ ಬೆಳವಣಿಗೆಗೆ ತೊಡಕಾಗಿ ಪರಿಣಮಿಸಿವೆ. ಇದನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿ.ಕೆ.ಶಿವಕುಮಾರ್ ಅವರು ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.
ವಿಮಾನಗಳ ಹಾರಾಟದ ಸುರಕ್ಷತೆಯನ್ನು ಕಾಪಾಡಿಕೊಳ್ಳುತ್ತಲೇ, ಹೆಚ್ಚುತ್ತಿರುವ ನಗರೀಕರಣದ ಅವಶ್ಯಕತೆಗಳಿಗೆ ಅನುಗುಣವಾಗಿ ಈ ನಿಯಮಗಳನ್ನು ಸಡಿಲಗೊಳಿಸುವುದು ಅನಿವಾರ್ಯವಾಗಿದೆ. ಈ ತಾಂತ್ರಿಕ ಅಡೆತಡೆಗಳನ್ನು ನಿವಾರಿಸುವ ಮೂಲಕ ರಕ್ಷಣಾ ಇಲಾಖೆಯು ನಗರದ ಮೂಲಸೌಕರ್ಯ ಮತ್ತು ಪ್ರಗತಿಗೆ ಹೊಸ ವೇಗ ನೀಡಬೇಕೆಂದು ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ನಿರ್ಬಂಧಗಳನ್ನ ಸಡಿಲಗೊಳಿಸುವಂತೆ ಮನವಿ
ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿವೆ. ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶುಕ್ರವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ನಿರ್ಬಂಧಗಳಿಂದ ಅಭಿವೃದ್ಧಿಗೆ ಅಡ್ಡಿ
"ಬೆಂಗಳೂರಿನ ರಕ್ಷಣಾ ಇಲಾಖೆ ಸುಪರ್ದಿಯ ವಿಮಾನ ನಿಲ್ದಾಣಗಳ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ವಿಮಾನ ನಿಲ್ದಾಣದ ಅಧಿಕಾರಿಗಳು ವಿಪರೀತ ನಿರ್ಬಂಧಗಳನ್ನು ವಿಧಿಸುತ್ತಿದ್ದಾರೆ. ಬೆಂಗಳೂರು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೆಚ್ಎಎಲ್ ವಿಮಾನ ನಿಲ್ದಾಣ ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆದರೆ ಹೆಚ್ಚುವರಿಯಾಗಿ ವಿಧಿಸಲಾಗಿರುವ ನಿರ್ಬಂಧಗಳು ಈ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಅಡ್ಡಿಯಾಗಿವೆ," ಎಂದು ಪತ್ರದಲ್ಲಿ ವಿವರಿಸಿದ್ದಾರೆ.
'ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿ'
"ಈ ವಿಚಾರವಾಗಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಗಳು, ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆ ಕಾರ್ಯದರ್ಶಿಗಳು ಹಾಗೂ ರಕ್ಷಣಾ ಕಾರ್ಯದರ್ಶಿಗಳಿಗೆ ಪತ್ರಗಳನ್ನು ಬರೆಯಲಾಗಿದೆ. ವಿಮಾನ ಸುರಕ್ಷತೆ ಹಾಗೂ ನಗರದ ಅಭಿವೃದ್ಧಿ ಎರಡರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರಿಶೀಲನೆ ನಡೆಸಿ, ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ," ಎಂದು ಮನವಿ ಮಾಡಿದ್ದಾರೆ.
"ಪ್ರಸ್ತುತ ಬೆಂಗಳೂರಿನಲ್ಲಿ ನಾಲ್ಕು ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ಹೆಚ್ಎಎಲ್ ಹಾಗೂ ಯಲಹಂಕ ವಾಯುನೆಲೆ ರಕ್ಷಣಾ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು ವಿಮಾನ ನಿಲ್ದಾಣ ಅಧಿಕಾರಿಗಳಿಂದ ನಿರಾಕ್ಷೇಪಣ ಪತ್ರ ಪಡೆಯಬೇಕಾಗಿದೆ. ವಿಮಾನ ನಿಲ್ದಾಣದ ಸುತ್ತಮುತ್ತಲ 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಟ್ಟಡಗಳ ಎತ್ತರದ ಮಿತಿಯನ್ನು 150 ಮೀ. ನಿಗದಿಪಡಿಸಲಾಗಿದೆ ಎಂದು ಜಿ.ಎಸ್.ಆರ್ 751 (ಇ) ನಿಯಮದಲ್ಲಿ ಸೂಚಿಸಲಾಗಿದೆ," ಎಂದು ತಿಳಿಸಿದ್ದಾರೆ.
"ಆದರೆ ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳು ಈ ವಿಪರೀತ ನಿರ್ಬಂಧ ಹೇರುವುದರ ಜತೆಗೆ 150 ಮೀ. ಎತ್ತರದ ಮಿತಿಯನ್ನು 15 ಕಿ.ಮೀ ಮೀರಿ 20 ಕಿಲೋ ಮೀಟರ್‌ವರೆಗೂ ವಿಸ್ತರಿಸಿವೆ. ಈ ನಿರ್ಬಂಧಗಳು ಈ ಬೆಂಗಳೂರು ನಗರದ ಪ್ರಗತಿಗೆ ಮಾರಕವಾಗಿವೆ. ಸಿಗಾಪುರ, ಆಂಸ್ಟ್ರಡಾಮ್, ಡಲ್ಲಾಸ್, ಲಂಡನ್ ಹಾಗೂ ದುಬೈ ಸೇರಿದಂತೆ ಅನೇಕ ನಗರಗಳಲ್ಲಿ ವಿಮಾನ ನಿಲ್ದಾಣಗಳನ್ನು ಕಚೇರಿ, ಮನರಂಜನೆ ಸೇರಿದಂತೆ ವಿವಿದೋದ್ದೇಶಕ್ಕೆ ಬಳಸಲಾಗುತ್ತಿದೆ. ಈ ನಗರಗಳಲ್ಲಿ ವಿಮಾನ ನಿಲ್ದಾಣಗಳು ಕೇವಲ ಸಂಚಾರ ಉದ್ದೇಶಕ್ಕೆ ಮಾತ್ರವಲ್ಲದೇ ಉದ್ಯೋಗದ ಕೇಂದ್ರವಾಗಿ ನಗರ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿವೆ. ಹೀಗಾಗಿ ಜಿ.ಎಸ್.ಆರ್ 751 (ಇ) ನಿಯಮವನ್ನು ಸಡಿಲಗೊಳಿಸಬೇಕು. 150 ಮೀಟರ್ ಎತ್ತರದ ಮಿತಿಯನ್ನು 20 ಕಿ.ಮೀ ಬದಲಿಗೆ 15 ಕಿ.ಮೀ ವ್ಯಾಪ್ತಿಗೆ ಸೀಮಿತಗೊಳಿಸಬೇಕು," ಎಂದು ರಾಜ್ಯ ಸರ್ಕಾರದ ವಿವಿಧ ಅಧಿಕಾರಿಗಳು ಕೇಂದ್ರ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು.












Click it and Unblock the Notifications