E-Khata: ಬೆಂಗಳೂರಲ್ಲಿ ಇನ್ನೊಂದು ವಾರದಲ್ಲಿ ಇ - ಖಾತಾ ಅರ್ಜಿ ಕ್ಲಿಯರ್, 6 ಲಕ್ಷ ಕರಡು ಇ-ಖಾತಾ ಡೌನ್ಲೋಡ್: ಬಿಬಿಎಂಪಿ
E-Khata Bengaluru: ಬೆಂಗಳೂರಿನಲ್ಲಿ (ಬಿಬಿಎಂಪಿ ವ್ಯಾಪ್ತಿಯಲ್ಲಿ) ಆಸ್ತಿದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಾಗೂ ಸಾರ್ವಜನಿಕರು ತ್ವರಿತವಾಗಿ ಇ-ಖಾತಾ ನೀಡುವ ಉದ್ದೇಶದಿಂದ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿನ ಆಸ್ತಿಗಳಿಗೆ ಇ - ಖಾತಾ ಕಡ್ಡಾಯ ಮಾಡಲಾಗಿದೆ. ಅಲ್ಲದೇ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಇರುವ ಆಸ್ತಿಗಳಿಗೆ ಇದನ್ನು ಕಡ್ಡಾಯ ಮಾಡಲಾಗಿದೆ. ಇದೀಗ ಈ ಪ್ರಕ್ರಿಯೆಯಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಲು ಬಿಬಿಎಂಪಿ ಮುಂದಾಗಿದೆ.
ಬೃಹತ್ ಬೆಂಗಳೂರು (ಬಿಬಿಎಂಪಿ ವ್ಯಾಪ್ತಿ) ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ಮಹತ್ವದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಇ-ಖಾತಾ ಮಾಡಿಸಲಾಗುತ್ತಿದೆ. ಸಹಾಯಕ ಕಂದಾಯ ಅಧಿಕಾರಿಗಳ ಲಾಗಿನ್‌ನ ಮೂಲಕ ಬಾಕಿಯಿರುವ ಇ-ಖಾತಾ ಅರ್ಜಿಗಳನ್ನು ಕೂಡಲೇ ವಿಲೇವಾರಿ (ಪೂರ್ಣ) ಮಾಡುವ ಉದ್ದೇಶದಿಂದ ಹಾಗೂ ಬಿಬಿಎಂಪಿಯ ವಲಯವಾರು ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನೇಮಕ ಮಾಡಿಕೊಂಡು ಇನ್ನೊಂದು ವಾರದ ಒಳಗಾಗಿ ಎಲ್ಲಾ ಬಾಕಿಯಿರುವ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತುಷಾರ್ ಗಿರಿನಾಥ್ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಲ್ಲಿಯವರೆಗೆ ಇ-ಖಾತಾ ಪಡೆಯುವುದಕ್ಕೆ 72.96 ಲಕ್ಷ ಜನ ಭೇಟಿ ನೀಡಿದ್ದಾರೆ. ಅದರಲ್ಲಿ 6 ಲಕ್ಷ ಕರಡು ಇ-ಖಾತಾ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಅಲ್ಲದೇ ಇಲ್ಲಿಯವರೆಗೆ ಬರೋಬ್ಬರಿ 21369 ಅಂತಿಮ ಇ-ಖಾತಾ ನೀಡಲಾಗಿದೆ. ಸಹಾಯಕ ಕಂದಾಯ ಅಧಿಕಾರಿಗಳ ಲಾಗಿನ್ ನಲ್ಲಿ ಅಂದಾಜು 14,000 ಇ-ಖಾತಾ ಅರ್ಜಿಗಳು ಇನ್ನೂ ಬಾಕಿ ಇರುವುದು ಗೊತ್ತಾಗಿದೆ. ಬಾಕಿ ಇರುವ ಇ -ಖಾತಾಗಳ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.
ಪ್ರತಿ ಬುಧವಾರ ಕಂದಾಯ ಅದಾಲತ್
ಇನ್ನು ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಇನ್ನು ಪ್ರತಿ ಬುಧವಾರ ವಾರ್ಡ್ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ಕುಂದು-ಕೊರತೆಗಳ ಸಭೆ ನಡೆಸಲು ನಿರ್ಧರಿಸಲಾಗಿದೆ. ಕಂದಾಯ ವಿಭಾಗದ ಅಧಿಕಾರಿಗಳ ಕಚೇರಿಗಳಲ್ಲಿ ಪ್ರತಿ ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಂದಾಯ ಮತ್ತು ಕುಂದು ಕೊರತೆಗಳ ಅದಾಲತ್ ನಡೆಸಲು ಸೂಚನೆ ನೀಡಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಆಸ್ತಿ ತೆರಿಗೆ ಸಂಗ್ರಹ: ಬಿಬಿಎಂಪಿಯು ಇದೇ ಮೊದಲ ಬಾರಿ ದಾಖಲೆಯ ಆದಾಯ ಸಂಗ್ರಹ ಮಾಡಿದೆ. ಈ ವಿಚಾರವಾಗಿಯೂ ತುಷಾರ್ ಗಿರಿನಾಥ್ ಅವರು ಮಾತನಾಡಿದ್ದಾರೆ. ಬಿಬಿಎಂಪಿಯು ಇದೇ ಮೊದಲ ಬಾರಿ ಬರೋಬ್ಬರಿ 4,250 ಹೆಚ್ಚು ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ. ಈ ಆರ್ಥಿಕ ವರ್ಷದಲ್ಲಿ 5,200 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಗುರಿ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ನಿಗದಿತ ಗುರಿ ಸಾಧಿಸಲು ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ನಗರದಲ್ಲಿ ಬಾಕಿ ಇರುವ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು ಎಂದು ಬಿಬಿಎಂಪಿಯ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.












Click it and Unblock the Notifications