ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ಜಾರಿ ನಿರ್ದೇಶನಾಲಯ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿದೆ.
ಲೋಕಾಯುಕ್ತ ಅಧಿಕಾರಿಗಳು ದಾಖಲಿಸಿರುವ ಎಫ್‌ಐಆರ್ ನಲ್ಲಿ ಉಲ್ಲೇಖವಾಗಿರುವ ಹೆಸರುಗಳ ಮೇಲೆ ಜಾರಿ ನಿರ್ದೇಶನಾಲಯ ಜಾರಿ ಪ್ರಕರಣದ ಮಾಹಿತಿ ವರದಿಯನ್ನು (ಇಸಿಐಆರ್) ದಾಖಲಿಸಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆಗಿದ್ದರೆ, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿರುವ ದೇವರಾಜು ಹೆಸರನ್ನು ಇಸಿಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದ ಬಳಿಕ ಎಫ್‌ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯನವರ ಪತ್ನಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ಕೊಟ್ಟಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.
ಇಡಿ ವಿಚಾರಣೆ ಸಾಧ್ಯತೆ
ಜಾರಿ ನಿರ್ದೇಶನಾಲಯದ ಇಸಿಐಆರ್ ಎನ್ನುವುದು ಪೊಲೀಸರ ಫ್‌ಐಆರ್‌ಗೆ ಸಮಾನವಾದ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ಗಳನ್ನು ಒಳಗೊಂಡಿದೆ. ಇಸಿಐಆರ್ ದಾಖಲಾದ ಬಳಿಕ ಆರೋಪಿಗಳನ್ನು ವಿಚಾರಣೆಗೆ ಕರೆಯುವ ಅಧಿಕಾರವನ್ನು ಜಾರಿ ನಿರ್ದೇಶನಾಲಯ ಹೊಂದಿರುತ್ತದೆ. ತನಿಖೆಯ ಸಂದರ್ಭದಲ್ಲಿ ಅಕ್ರಮ ನಡೆದಿರುವ ಮುನ್ಸೂಚನೆ ಸಿಕ್ಕರೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೂಡ ಅವಕಾಶ ಇರುತ್ತದೆ.
ರಾಜಕೀಯ ಎಂದ ಸಿಎಂ ಸಿದ್ದರಾಮಯ್ಯ
ಮುಡಾ ಹಗರಣದಲ್ಲಿ ತಾನು ಯಾವ ತಪ್ಪು ಮಾಡಿಲ್ಲ, ಇಷ್ಟು ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ. ಯಾವುದಕ್ಕೂ ನಾನು ಹೆದರುವುದಿಲ್ಲ, ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications