Ejipur Flyover: ಈಜೀಪುರ ಮೇಲ್ಸೇತುವೆ ಕಾಮಗಾರಿ ಪೂರ್ಣ ಬಗ್ಗೆ ಗುಡ್ ನ್ಯೂಸ್ ಕೊಟ್ಟ GBA
ಬೆಂಗಳೂರು, ನವೆಂಬರ್ 07: ಸರ್ಜಾಪುರ ರಸ್ತೆಯಲ್ಲಿ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಈಜಿಪುರ ಮೇಲ್ಸೇತುವೆ ಕಾಮಗಾರಿ ವರ್ಷಗಳಿಂದ ಕುಂಟುತ್ತ ಸಾಗುತ್ತಿದೆ. ಹಲವು ಗಡುವುಗಳು ಮೀರಿದರೂ ಸಹಿತ ಕಾಮಗಾರಿ ಮುಗಿದಿಲ್ಲ. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಈ ಭಾಗ ನಾಗರಿಕರಿಗೆ, ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ ಮಲ್ಲಶ್ವರಂ ಐಪಿಪಿ ಕೇಂದ್ರದಲ್ಲಿ ಮಾಧ್ಯಮಗಳ ಜೊತೆ ನಡೆದ ಸಂವಾದನ್ನು ಉದ್ದೇಶಿಸಿ ಅವರು ಮಾತನಾಡಿದರು. ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಜುಲೈ 2026ರಲ್ಲಿ ಪೂರ್ಣಗೊಳಿಸಲಾಗುವುದೆಂದು ಮಹೇಶ್ವರ್ ರಾವ್ ಅವರು ತಿಳಿಸಿದರು.

ಈಜೀಪುರ ಮೇಲ್ಸೇತುವೆ ಪೂರ್ಣಗೊಂಡಿದ್ದೆಷ್ಟು?
2.38 ಕಿಮೀ ಉದ್ದದ ಈಜಿಪುರ ಮೇಲ್ಸೇತುವೆ ಕಾಮಗಾರಿಯಲ್ಲಿ 1.35 ಕಿಮೀ ಭಾಗ ಈಗಾಗಲೇ ಪೂರ್ಣಗೊಂಡಿದೆ. ಸೆಂಟ್ ಜಾನ್ಸ್ ಜಾಗ ಸಂಬಂಧಿಸಿದ ನ್ಯಾಯಾಲಯದ ತೀರ್ಪು ಬಂದಿದ್ದು, ಜಾಗ ವಶಪಡಿಸಿಕೊಂಡ ನಂತರ ಜುಲೈ 2026ರೊಳಗೆ ಮೇಲ್ಸೇಸೇತುವೆ ಪೂರ್ಣಗೊಳ್ಳಲಿದೆ. ಅದಲ್ಲದೆ ಈಗಾಗಲೇ ಹೊಸಕೆರೆಹಳ್ಳಿ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಯಲಹಂಕ ಮೇಲ್ಸೇತುವೆ ಕಾಮಗಾರಿಯನ್ನು ಕೂಡಾ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ ಹಾಗೂ ಬೆಂಗಳೂರು ಉತ್ತರ - ಒಟ್ಟು 5 ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಜಿಬಿಎ ಸ್ಥಾಪನೆಗೊಂಡಿದೆ. 2025ರ ಸೆಪ್ಟೆಂಬರ್ 2 ರಿಂದ ಹೊಸ ಆಡಳಿತ ವ್ಯವಸ್ಥೆ ಜಾರಿಯಲ್ಲಿದೆ. ನಗರ ಪಾಲಿಕೆಗಳ ಆಯುಕ್ತರು ಸ್ಥಳೀಯ ಪರಿಶೀಲನೆಗಳನ್ನು ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದರು.
ವಾರ್ಡ್ ವಿಂಗಡಣೆ- ಅಂತಿಮ ಅಧಿಸೂಚನೆ ಶೀಘ್ರ
ಬೆಂಗಳೂರು ಐದು ನಗರ ಪಾಲಿಕೆಗಳ ಕರಡು ವಾರ್ಡ್ ಪುನರ್ ವಿಂಗಡಣೆ ಅಧಿಸೂಚನೆಯನ್ನು 2025ರ ಸೆಪ್ಟೆಂಬರ್ 30ರಂದು ಪ್ರಕಟಿಸಲಾಗಿತ್ತು. ಆಕ್ಷೇಪಣೆಗಳ ಅವಧಿ ಮುಗಿದಿದ್ದು, ಪರಿಶೀಲನೆಯ ನಂತರ ಅಂತಿಮ ಅಧಿಸೂಚನೆ ಶೀಘ್ರ ಹೊರಡಿಸಲಾಗುವುದು ಎಂದು ಅಪ್ಡೇಟ್ ನೀಡಿದರು.

ತೆರಿಗೆ ಸಂಗ್ರಹ ₹3437 ಕೋಟಿ
ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಿಗೆ ₹6700 ಕೋಟಿ ತೆರಿಗೆ ಸಂಗ್ರಹಿಸುವ ಗುರಿ ಇದೆ. ಇದುವರೆಗೆ 3437 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸಲಾಗಿದೆ. 3262 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸಬೇಕಿದೆ. ಆಯಾ ನಗರ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಸೂಕ್ತ ಕ್ರಮವಹಿಸಲಿದ್ದಾರೆ ಎಂದು ಹೇಳಿದರು.
ಇನ್ನೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿರುವ ಸುಮಾರು 25 ಲಕ್ಷ ಆಸ್ತಿಗಳ ಪೈಕಿ 7,96,780 ಅರ್ಜಿಗಳು ಸ್ವೀಕರಿಸಲಾಗಿದೆ. ಇದರಲ್ಲಿ 7,83,179 ಗೆ ಅಂತಿಮ ಇ-ಖಾತಾ ನೀಡಲಾಗಿದೆ. ಅದಕ್ಕೆ ಮತ್ತಷ್ಟು ವೇಗ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಜೊತೆಗೆ ಆಯಾ ನಗರ ಪಾಲಿಕೆಗಳಿಗೆ ಸಲಹೆಗಳನ್ನು ಪಡೆದು ತ್ವರಿತಗತಿಯಲ್ಲಿ ಇ-ಖಾತಾಗಳನ್ನು ನೀಡಲು ಕ್ರಮ ವಹಿಸಲಾಗುವುದೆಂದು ತಿಳಿಸಿದರು.
ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ
ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆಗಾಗಿ 1169 ಗೆ ನಾಗರಿಕರು ನೋಂದಣಿ ಮಾಡಿಕೊಂಡಿರುತ್ತಾರೆ. ಎಲ್ಲ ನಗರ ಪಾಲಿಕೆಗಳೊಂದಿಗೆ ಸಮನ್ವಯ ಮಾಡಿ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲು ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಲಾಗುವುದು.
ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಪ್ರಮುಖ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಸುರಂಗ ಮಾರ್ಗವು ಅಂತಿಮ ಹಂತದಲ್ಲಿದ್ದು, ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕಾಗಿ ಡಿಪಿಆರ್ ಅಂತಿಮ ಹಂತದಲ್ಲಿದ್ದು, ತ್ವರಿತಗತಿಯಲ್ಲಿ ಯೋಜನೆಗಳಿಗೆ ಚಾಲನೆ ನೀಡಲಾಗುವುದೆಂದು ತಿಳಿಸಿದರು.












Click it and Unblock the Notifications