ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್‌ಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಆಗಸ್ಟ್ 30: ಚುನಾವಣಾ ತಕರಾರು ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್‌ಗೆ ನೋಟಿಸ್ ಜಾರಿಗೊಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು 64,913 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಸಂಪಂಗಿ ರಾಮನಗರದ ಬಿ. ಲಕ್ಷ್ಮೀ ದೇವಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಶಾಸಕ ರಿಜ್ವಾನ್ ಅರ್ಷದ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿತು. ಅರ್ಜಿದಾರರು ಶಿವಾಜಿನಗರ ಕ್ಷೇತ್ರದಿಂದ ರಿಜ್ವಾನ್ ಅರ್ಷದ್ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿದ್ದಾರೆ.
ಮತದಾರರಿಗೆ ಆಮಿಷ: ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿರುವುದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮವಾಗಿದೆ ಎಂಬುದು ಅರ್ಜಿದಾರರ ಆಕ್ಷೇಪವಾಗಿದೆ.
ಕರ್ನಾಟಕ ಹೈಕೋರ್ಟ್‌ಗೆ ಈಗಾಗಲೇ ವರುಣ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲವು ಕಾಂಗ್ರೆಸ್ ಶಾಸಕರ ವಿರುದ್ಧ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿರುವ ಸಂಬಂಧ ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳು ವಿಚಾರಣೆಯ ಹಂತದಲ್ಲಿವೆ.
ಈ ಬಾರಿ ಶಿವಾಜಿನಗರ ಕ್ಷೇತ್ರದಲ್ಲಿ ರಿಜ್ವಾನ್ ಅರ್ಷದ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 64,913 ಮತಗಳನ್ನು ಪಡೆದು ಅವರು ಜಯಗಳಿಸಿದ್ದರು. ಎದುರಾಳಿಯಾಗಿದ್ದ ಬಿಜೆಪಿ ಅಭ್ಯರ್ಥಿ ಎನ್. ಚಂದ್ರ 41719 ಮತಗಳನ್ನು ಪಡೆದು ಸೋಲು ಕಂಡಿದ್ದರು.












Click it and Unblock the Notifications